ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಶೈಕ್ಷಣಿಕ ಗುಣಮಟ್ಟಕ್ಕೆ ಒತ್ತು

KannadaprabhaNewsNetwork |  
Published : Aug 19, 2024, 12:55 AM ISTUpdated : Aug 19, 2024, 11:39 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಉಸ್ತುವಾರಿ ಕಾರ್ಯದರ್ಶಿ ಸಿ.ಕೆ.ಜಾಫರ್‌ ಅಧ್ಯಕ್ಷತೆಯಲ್ಲಿ ನಡೆಯಿತು. | Kannada Prabha

ಸಾರಾಂಶ

ಸರ್ಕಾರಿ ಶಾಲಾ-ಕಾಲೇಜು, ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಗುಣಮಟ್ಟದ ಶಿಕ್ಷಣ ನೀಡಿ ಪ್ರೋತ್ಸಾಹಿಸಬೇಕು  

 ದೊಡ್ಡಬಳ್ಳಾಪುರ :  ಸರ್ಕಾರಿ ಶಾಲಾ-ಕಾಲೇಜು, ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಗುಣಮಟ್ಟದ ಶಿಕ್ಷಣ ನೀಡಿ ಪ್ರೋತ್ಸಾಹಿಸಬೇಕು ಎಂದು ಆರ್ಥಿಕ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ಭವಿಷ್ಯದ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು. ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸ್ ಆದ ನಂತರ ಜೆ.ಇ.ಇ, ನೀಟ್ ನಂತಹ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉನ್ನತ ವ್ಯಾಸಂಗ ಪಡೆಯಲು ಸರ್ಕಾರಿ, ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಿಶು ಮರಣ ಪ್ರಮಾಣ ನಿಯಂತ್ರಣಕ್ಕೆ ಆದ್ಯತೆ: ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು. ಶಿಶು ಮರಣ ಮತ್ತು ತಾಯಿ ಮರಣ ತಡೆಗೆ ತಾಯಂದಿರಿಗೆ, ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಿ ಜಾಗೃತಿ ಮೂಡಿಸಬೇಕು. ಡೆಂಘೀ ನಿಯಂತ್ರಣಕ್ಕೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಆಗಾಗ್ಗೆ ಆಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಎಂದು ಹೇಳಿದರು.

ಗ್ಯಾರಂಟಿಗಳ ಅನುಷ್ಠಾನ: ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲಿಸಿ, ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳನ್ನು ಗುರುತಿಸಿ ಯೋಜನೆ ಸೌಲಭ್ಯ ಕಲ್ಪಿಸಿ. ನಕಲಿ ಆದಾಯ ಪ್ರಮಾಣ ಪತ್ರ ನೀಡಿ ಪಡಿತರ ಚೀಟಿ ಪಡೆದಿರುವ ಸರ್ಕಾರಿ ನೌಕರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.

ಕೃಷಿ ಸ್ನೇಹಿ ಯೋಜನೆಗಳ ಜಾರಿ: ಗಂಗಾ ಕಲ್ಯಾಣ ಯೋಜನೆಯಡಿ ನಿಗಮಗಳಲ್ಲಿ ಬಾಕಿ ಇರುವ ಅರ್ಜಿಗಳು ಎಷ್ಟು, ನೀರು ಸಿಕ್ಕಿರುವ ಕೊಳವೆ ಬಾವಿಗಳ ವರದಿ ನೀಡಿ. ಅಂತಹ ಕೊಳವೆ ಬಾವಿಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಿ ರೈತರಿಗೆ ಒಪ್ಪಿಸಿ. ರೈತರಿಗೆ ಸಮರ್ಪಕ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡಿ. ಅಂಗಡಿ-ಮಳಿಗೆಗಳು ರೈತರಿಂದ ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಡೆದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಿ ಎಂದರು.

ಶೇ.100 ಪ್ರಗತಿ ಗುರಿ: ವಿವಿಧ ಇಲಾಖೆಗಳಡಿ ಬರುವ ಯೋಜನೆಗಳಿಗೆ ಅಗತ್ಯ ಕ್ರಿಯಾ ಯೋಜನೆ ರೂಪಿಸಿ, ಅನುಮೋದನೆ ಪಡೆದು ಮಾರ್ಚ್ ಅಂತ್ಯದವರೆಗೆ ಕಾಯದೆ ತ್ವರಿತವಾಗಿ ಅನುದಾನ ಖರ್ಚು ಮಾಡಿ ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿಪಂ ಸಿಇಒ ಡಾ. ಕೆ.ಎನ್.ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್, ಪ್ರಾದೇಶಿಕ ಅರಣ್ಯ ವಿಭಾಗದ ಉಪವಿಭಾಗಾಧಿಕಾರಿ ಸರೀನಾ ಸಿಕ್ಕಲಿಗಾರ್, ಉಪವಿಭಾಗಾಧಿಕಾರಿ ಎನ್. ದುರ್ಗಶ್ರೀ, ನಾಲ್ಕು ತಾಲೂಕುಗಳ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌