ಹಾವೇರಿ: ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಪದವೀಧರರ ವಿಧಾನ ಪರಿಷತ್ ಚುನಾವಣೆಯನ್ನು ಗುರಿಯಾಗಿಸಿಕೊಂಡು ಹಾವೇರಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಆಲ್ ಇಂಡಿಯಾ ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ ಮರೆಣ್ಣನವರ ಹೇಳಿದರು.
ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳ ಆಡಳಿತದಲ್ಲಿದ್ದರೂ ಜನರ ನಿರೀಕ್ಷೆಗೆ ತಕ್ಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಆರು ಶಾಸಕರಿದ್ದರೂ ಜಿಲ್ಲೆಯ ಜನರಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲ. ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಇನ್ನೂ ಒಂದು ವಾರ ಮಳೆಯಾಗದಿದ್ದರೆ ಬೆಳೆಗಳು ಸಂಪೂರ್ಣ ಹಾನಿಯಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರ ಕೂಡಲೇ ಹಾವೇರಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪರಿಹಾರ, ಬೆಳೆ ವಿಮೆ ಹಾಗೂ ಅಗತ್ಯ ನೆರವು ನೀಡಬೇಕು. ಗ್ರಾಮೀಣ ಬಡವರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಬರಗಾಲ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸುವುದು, ಪಕ್ಷದ ಸಂಘಟನೆ ಬಲಪಡಿಸುವುದು, ಹೊಸ ಸದಸ್ಯತ್ವ ಅಭಿಯಾನ ಹಾಗೂ ಗ್ರಾಮ ಮಟ್ಟದ ಸಂಘಟನಾ ಚಟುವಟಿಕೆಗಳನ್ನು ಚುರುಕುಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು.