ಕನ್ನಡಪ್ರಭ ವಾರ್ತೆ ಮಡಿಕೇರಿಕೊಡಗು ವಿಶ್ವವಿದ್ಯಾನಿಲಯದಲ್ಲಿ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಲು ಒತ್ತು ನೀಡಲಾಗಿದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್ ತಿಳಿಸಿದ್ದಾರೆ.
ವಿಶ್ವವಿದ್ಯಾನಿಲಯದಲ್ಲಿ ಹಲವು ಇತಿಮಿತಿಗಳ ನಡುವೆ ಧನಾತ್ಮಕ ಚಿಂತನೆ ಒಳಗೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಯುವಜನರಿಗೆ ಉದ್ಯೋಗ ಸೃಷ್ಟಿಯತ್ತ ವಿಶೇಷ ಆದ್ಯತೆ ನೀಡಲಾಗಿದೆ. ಕೊಡಗು ವಿಶ್ವವಿದ್ಯಾನಿಲಯದಲ್ಲಿ ಬಿಸಿಎ, ಎಂಸಿಎ, ಎಂಬಿಎ, ಪದವಿ, ಸ್ನಾತಕೋತ್ತರ ಪದವಿ ಆರಂಭಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ರವಿ ಮಾತನಾಡಿ, ಕೊಡಗು ವಿಶ್ವವಿದ್ಯಾನಿಲಯವು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಆ ನಿಟ್ಟಿನಲ್ಲಿ ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈಗಾಗಲೇ ಏಳು ವಿಶ್ವವಿದ್ಯಾನಿಲಯಗಳು ಸ್ಥಾಪನೆಯಾಗಿದ್ದು, ವಿಶ್ವವಿದ್ಯಾನಿಲಯಗಳು ವಿನೂತನ ಪಠ್ಯ ಚಟುವಟಿಕೆಗಳನ್ನು ಅಳವಡಿಸಿಕೊಂಡು ಅಭಿವೃದ್ಧಿಯತ್ತ ಹೆಜ್ಜೆ ಇಡಬೇಕು ಎಂದು ಅವರು ಪ್ರತಿಪಾದಿಸಿದರು.ಆಧುನಿಕ ಬದುಕಿನಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಬದಲಾವಣೆಗಳತ್ತ ವಿಶ್ವವಿದ್ಯಾನಿಲಯಗಳು ಸಾಗಬೇಕು. ಮಾನವಿಕ ಪದವಿಗಳ ಜೊತೆ ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಸಿಕೊಂಡು ಅಭಿವೃದ್ಧಿಯತ್ತ ದಾಪುಗಾಲು ಹಾಕಬೇಕು ಎಂದು ಹೇಳೀದರು.* ಪರಿಸರ, ಜಲ ಸಂರಕ್ಷಣೆಗೆ ಒತ್ತುಹಾಸನ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ತರಿಕೆರೆ ಚಂದ್ರಶೇಖರ ತಾರಾನಾಥ್ ಮಾತನಾಡಿ, ವರ್ಷದಿಂದ ವರ್ಷಕ್ಕೆ ವಾತಾವರಣದಲ್ಲಿ ಬದಲಾವಣೆ ಕಂಡು ಬರುತ್ತಿದ್ದು, ಪ್ರಾಕೃತಿಕ ಪರಿಸರ ಹಾಗೂ ಜಲ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳು ಜಲಸಂರಕ್ಷಣೆ, ವಾತಾವರಣದಲ್ಲಿನ ಬದಲಾವಣೆ ಮತ್ತಿತರ ವಿಷಯಗಳ ಕುರಿತು ವಿಶ್ವವಿದ್ಯಾನಿಲಯಗಳಲ್ಲಿ ಹೆಚ್ಚಿನ ಅಧ್ಯಯನ ಮಾಡುವಂತಾಗಬೇಕು ಎಂದರು.ಜ್ಞಾನ ಇದ್ದಲ್ಲಿ ಅಜ್ಞಾನಕ್ಕೆ ಅವಕಾಶ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜೊತೆಗೆ ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸುವಂತಾಗಬೇಕು ಎಂದು ತಾರಾನಾಥ್ ಹೇಳಿದರು.
ಬರೋಡ ಬ್ಯಾಂಕಿನ ಮಂಗಳೂರು ವಲಯ ವ್ಯವಸ್ಥಾಪಕರಾದ ಗಾಯತ್ರಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಘವ ಮಾತನಾಡಿದರು.
ಪ್ರಾಧ್ಯಾಪಕ ಜಮೀರ್ ಅಹ್ಮದ್, ವಿವಿಧ ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕರಾದ ಜಯಶಂಕರ್ ಮಾತನಾಡಿದರು. ಪ್ರಾಧ್ಯಾಪಕರಾದ ಶ್ರೀಧರ ಹೆಗಡೆ ನಿರೂಪಿಸಿದರು. ರಾಘವ ವಂದಿಸಿದರು.