ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸಂವಾದ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಜಿಲ್ಲೆಯಲ್ಲಿ ಅಭಿವೃದ್ಧಿಗೆ ತೊಡಕಾಗಿರುವ ಅಂಶಗಳನ್ನು ಪರಿಗಣಿಸಿಕೊಂಡು ಸೂಕ್ತ ಪರಿಹಾರ ಕ್ರಮಗಳೊಂದಿಗೆ ಸಾಮಾಜಿಕ ಚಟುವಟಿಕೆಗಳ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪರಿಕಲ್ಪನೆ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಡಾ. ಮಂಜುನಾಥ ಭಂಡಾರಿ ಹೇಳಿದ್ದಾರೆ.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಾಮರಸ್ಯ, ವಿಭಿನ್ನತೆಯ ನಾಡಾಗಿರುವ ದ.ಕ. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳು ಸೀಮಿತಗೊಂಡಿದ್ದು, ದೇಶದ ಮಹಾನಗರಳಲ್ಲಿ ಇರುವಂತಹ ರಾತ್ರಿ ಬದುಕಿನ ಪರಿಕಲ್ಪನೆಯೇ ಇಲ್ಲವಾಗಿದೆ. ಹೀಗಾಗಿ ಇಲ್ಲಿ ಬಹುರಾಷ್ಟ್ರೀಯ ಕಂಪೆನಿಗಳು ಹೂಡಿಕೆಗೆ ಹಿಂದೇಟು ಹಾಕುತ್ತಿವೆ.ಹಿಂದೆಲ್ಲ ಹೊರ ರಾಜ್ಯಗಳ ಸಾಕಷ್ಟು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಮಂಗಳೂರನ್ನು ಅವಲಂಬಿಸಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಪಿಯುಸಿ ನಂತರದ ಹಂತದ ಶಿಕ್ಷಣಕ್ಕೆ ಹೊರ ರಾಜ್ಯಗಳ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.ಎಂಜಿನಿಯರಿಂಗ್, ಮೆಡಿಕಲ್, ನರ್ಸಿಂಗ್, ವೃತ್ತಿಪರ ಕಾಲೇಜು ಸೇರಿದಂತೆ ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಲಕ್ಷಾಂತರ ಮಂದಿ ಶಿಕ್ಷಣ ಪಡೆಯುತ್ತಾರೆ. ಆದರೆ 9 ಗಂಟೆಯ ಬಳಿಕ ಐಸ್‌ಕ್ರೀಂ ಪಾರ್ಲರ್‌ಗಳು ಕೂಡ ಇಲ್ಲಿ ಬಾಗಿಲು ಮುಚ್ಚುತ್ತವೆ. ಹಾಗಾಗಿ ಸುಮಾರು 200 ಎಕರೆ ಭೂಮಿಯನ್ನು ಖರೀದಿಸಿರುವ ವಿಪ್ರೋ ಸಂಸ್ಥೆಯವರು ತಮ್ಮ ಕಾರ್ಯ ಚಟುವಟಿಕೆ ಆರಂಭಿಸಲು ಮನಸ್ಸು ಮಾಡಿಲ್ಲ. ವಿವಿಧ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಉದ್ಯೋಗಕ್ಕಾಗಿ ಆಯ್ಕೆಯಾದರೂ ಮಂಗಳೂರಿನ ಬದಲು ಬೆಂಗಳೂರು ಅಥವಾ ಹೊರ ಜಿಲ್ಲೆ, ರಾಜ್ಯಗಳನ್ನು ಆಯ್ದುಕೊಳ್ಳುತ್ತಿದ್ದಾರೆ ಎಂದು ಮಂಜುನಾಥ ಭಂಡಾರಿ ಹೇಳಿದರು.
ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜಪಾನ್ ಸಂಸ್ಥೆಯು ಈಗಾಗಲೇ ಕ್ಯಾಂಪಸ್ ಸೆಲೆಕ್ಷನ್ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ನೀಡಿದ್ದು, ಈ ದಿಸೆಯಲ್ಲಿ ಕಾಲೇಜಿನಲ್ಲಿ ಜಪಾನ್ ಭಾಷಾ ಕಲಿಕೆಯ ಕೋರ್ಸ್ ಕೂಡ ಆರಂಭಿಸಲಾಗಿದೆ. ಇಂತಹ ಕಾರ್ಯಕ್ರಮಗಳನ್ನು ಸರ್ಕಾರಿ ಮಟ್ಟದಲ್ಲಿ ನಡೆಸಲು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿದರು. ಪ್ರೆಸ್‌ಕ್ಲಬ್ ಅಧ್ಯಕ್ಷ ಹರೀಶ್ ರೈ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಇದ್ದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ನಿರೂಪಿಸಿದರು. ಫೋಟೊ
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.