ಮಕ್ಕಳ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡಿ

KannadaprabhaNewsNetwork | Published : Jul 2, 2025 12:21 AM
ನಗರದ ಟಕ್ಕೆಯಲ್ಲಿರುವ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಎಂಎಸ್‌ಐಎಲ್ ಸಿಎಸ್‌ಆರ್ ಅನುದಾನದಡಿ ನಿರ್ಮಿಸಲಾದ ಸಭಾ ಭವನವನ್ನು ಸಚಿವ ಎಂ.ಬಿ ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಿಂದಲೇ ಅವರ ಶಿಕ್ಷಣಕ್ಕಾಗಿ ಒತ್ತು ನೀಡಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಿಂದಲೇ ಅವರ ಶಿಕ್ಷಣಕ್ಕಾಗಿ ಒತ್ತು ನೀಡಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕರೆ ನೀಡಿದರು.

ನಗರದ ಟಕ್ಕೆಯಲ್ಲಿರುವ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಎಂಎಸ್‌ಐಎಲ್, ಸಿಎಸ್‌ಆರ್ ಅನುದಾನದಡಿ ನಿರ್ಮಿಸಲಾದ ಸಭಾ ಭವನ ಉದ್ಘಾಟನೆ ಮತ್ತು ೨೦೨೪-೨೫ನೇ ಸಾಲಿನ ಎಸ್‌ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಗಸ್ತ್ಯ ಫೌಂಡೇಶನ್ ಪ್ರಾಯೋಜಕತ್ವದ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಸಂಚಾರಿ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಪ್ರಾಥಮಿಕ ಶಾಲಾ ಹಂತದಲ್ಲಿಯೇ ಪಾಲಕರು, ಶಿಕ್ಷಕರು ವಿಶೇಷ ಗಮನ ಹರಿಸಬೇಕು ಎಂದು ಪಾಲಕರಿಗೆ ಕಿವಿಮಾತು ಹೇಳಿದರು.

ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿ ಅವಶ್ಯಕ ವಾತಾವರಣ ನಿರ್ಮಿಸಲಾಗಿದೆ. ಅವಶ್ಯಕವಿರುವ ವಿವಿಧ ಪರಿಕರಗಳನ್ನು ಸಹ ಒದಗಿಸಲಾಗುತ್ತಿದೆ. ಜಿಲ್ಲೆಯ ಶೈಕ್ಷಣಿಕ ಉನ್ನತಿಗಾಗಿ ವಿವಿಧ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗುವುದು. ನಿರಂತರ ಶೈಕ್ಷಣಿಕ ಕಮ್ಮಟ, ಕಾರ್ಯಗಾರ ಮಾಡುವ ಮೂಲಕ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವತ್ತ ಎಲ್ಲರೂ ಶ್ರಮಿಸಬೇಕು. ಕಲಿಕಾ ಮಟ್ಟ ಹೆಚ್ಚಿಸಲು ಶ್ರಮಿಸಬೇಕು. ಶಾಲೆಗೆ ಶಿಕ್ಷಕ ಹೃದಯವಿದ್ದ ಹಾಗೆ, ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಒಟ್ಟಾರೆ ಜಿಲ್ಲೆಯ ಶೈಕ್ಷಣಿಕ ಬೆಳವಣಿಗೆಯ ಜವಾಬ್ದಾರಿಯನ್ನು ಸಾಮಾಜಿಕ ಜವಾಬ್ದಾರಿಯಾಗಿ ತೆಗೆದುಕೊಂಡು ಶಿಕ್ಷಕರು, ಅಧಿಕಾರಿಗಳು ಶ್ರಮಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹಾಗೂ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕೈ ಜೋಡಿಸಬೇಕು ಎಂದು ಹೇಳಿದರು.ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಅನೇಕ ಸೌಲಭ್ಯಗಳನ್ನು ಒದಗಿಸಿದೆ. ಈ ಸೌಲಭ್ಯಗಳನ್ನು ಬಳಸಿಕೊಳ್ಳುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಿ, ಶಿಕ್ಷಕರು ಶ್ರಮಿಸಬೇಕು. ಶಿಕ್ಷಕರು, ವಿಜ್ಞಾನದ ಅವಿಷ್ಕಾರಗಳ ಕುರಿತು, ಹೊಸ ಹೊಸ ವಿಚಾರಗಳನ್ನು ಮಕ್ಕಳಿಗೆ ಬೋಧನೆ ಮಾಡಬೇಕು. ಸ್ಮಾರ್ಟ ಕ್ಲಾಸ್ ವ್ಯವಸ್ಥೆ ಸಹ ಒದಗಿಸಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯ ಸುಭದ್ರಗೊಳಿಸಬೇಕು ಎಂದು ಹೇಳಿದರು. ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಟಿ.ಎಚ್.ಕೊಲ್ಹಾರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಗುರು ದಾಸ್ಯಾಳ, ಬಿಇಒ ಕಚೇರಿ ಸಮನ್ವಯಾಧಿಕಾರಿ ಮೋಸಲಗಿ ಅಗಸ್ತ್ಯ ಫೌಂಡೇಶನ್ ಸಮನ್ವಯಾಧಿಕಾರಿ ಗೀತಾ ಪಾಟೀಲ ಸೇರಿದಂತೆದಿನ್ನು ಮುಂತಾದವರು ಉಪಸ್ಥಿತರಿದ್ದರು. ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ ಸ್ವಾಗತಿಸಿದರು. ಪರಶುರಾಮ ಭಜಂತ್ರಿ ನಾಡಗೀತೆ ಹಾಡಿದರು.

PREV