ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣಗೆ ಒತ್ತು ನೀಡಿ

KannadaprabhaNewsNetwork | Published : Dec 4, 2024 12:32 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಸುಧಾರಣೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ವಿಶೇಷ ಕಾಳಜಿ ವಹಿಸಿ, ಪರಿಹಾರ ಬೋಧನೆ ಮಾಡಿ ಉಜ್ವಲ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಸುಧಾರಣೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ವಿಶೇಷ ಕಾಳಜಿ ವಹಿಸಿ, ಪರಿಹಾರ ಬೋಧನೆ ಮಾಡಿ ಉಜ್ವಲ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತಿಯಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಕ್ರಮ ವಹಿಸಬೇಕು. ಈ ಮೂಲಕ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬೇಕು ಎಂದು ಹೇಳಿದರು.

ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಭವಿಷ್ಯದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳ ದಾಖಲೆಗಳಲ್ಲಿ ಯಾವುದೇ ಲೋಪವಾಗದಂತೆ ಪ್ರಾಥಮಿಕ ಹಂತದಲ್ಲಿಯೇ ನೋಡಿಕೊಳ್ಳಬೇಕು. ಶಾಲೆ, ಅಂಗನವಾಡಿ, ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಅವಶ್ಯಕತೆ ಇರುವ ಕಡೆ ಪರಿಶೀಲನೆ ನಡೆಸಿ ನೀರು ಪೂರೈಸಲು ಸೂಚಿಸಿದ್ದನ್ನು ಪರಿಶೀಲನೆ ನಡೆಸಿ ಸಂಪರ್ಕ ಒದಗಿಸದಿರುವ ಇರುವ ಸ್ಥಳಗಳನ್ನು ಖಚಿತಪಡಿಸಿಕೊಂಡು ಆದ್ಯತೆ ಮೇಲೆ ಕುಡಿಯುವ ನೀರು ಪೂರೈಸಲು ಕ್ರಮಕೈಗೊಳ್ಳಲು ಸೂಚಿಸಿದರು.ಜೆಜೆಎಂ ಯೋಜನೆಯ ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳು ಯಾವುದೇ ಅರ್ಹ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ವಿಳಂಬ ಮಾಡದೇ ಅರ್ಜಿ ಇತ್ಯರ್ಥ ಪಡಿಸಿ ಶಿಷ್ಯವೇತನ ಒದಗಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದರು.ಪ್ರಧಾನಮಂತ್ರಿ ಸೂರ್ಯ ಘರ್‌ ಯೋಜನೆ, ಮಾದರಿ ಸೌರ ಗ್ರಾಮ, ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ (ಕುಸುಮಬಿ) ಯೋಜನೆ ಕುರಿತು ಹೆಸ್ಕಾಂ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಪಿಪಿಟಿ ಮೂಲಕ ಸಭೆಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕ್ರೀಡಾ ಇಲಾಖೆ, ಆರೋಗ್ಯ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕ್ರೀಡಾ ಇಲಾಖೆಯ ರಾಜಶೇಖರ ಧೈವಾಡಿ ಸೇರಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Share this article