ಕನ್ನಡಪ್ರಭ ವಾರ್ತೆ ಹಾಸನ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಭಾಗವಹಿಸಿ ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿ ನಿಲಯಗಳ ಸಿಬ್ಬಂದಿ ಮಾತ್ರ ಉಪಸ್ಥಿತರಿದ್ದರೆ, ಭವನದಲ್ಲಿದ್ದ ಬಹುತೇಕ ಕುರ್ಚಿಗಳು ಖಾಲಿಯಾಗಿಯೇ ಉಳಿದಿದ್ದವು. ಕಾರ್ಯಕ್ರಮದ ಬಗ್ಗೆ ಸಮರ್ಪಕ ಪ್ರಚಾರ ಮಾಡದಿರುವುದು ಹಾಗೂ ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾಹಿತಿ ತಲುಪಿಸದ ಕಾರಣವೇ ಜನರ ಹಾಜರಾತಿ ಕಡಿಮೆಯಾಗಿದೆ ಎಂದು ಸ್ಥಳದಲ್ಲಿದ್ದ ಕೆಲವರು ಆರೋಪಿಸಿದರು. ರಾಷ್ಟ್ರದ ಪ್ರಮುಖ ದಲಿತ ನಾಯಕ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರಂತಹ ಮಹನೀಯರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಇಂತಹ ನಿರ್ಲಕ್ಷ್ಯ ತೋರಿರುವುದು ಬೇಸರದ ಸಂಗತಿ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟರು.
ಇದೇ ವೇಳೆ ಕಾರ್ಯಕ್ರಮದ ಅವ್ಯವಸ್ಥೆ ಕುರಿತು ಕೆಲ ಸಾರ್ವಜನಿಕರು ಪ್ರಶ್ನೆ ಎತ್ತಿದಾಗ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ದೂದ್‌ಪೀರ್ ಅವರು ಅಪರ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲೇ ಪ್ರಶ್ನಿಸಿದ ಸಾರ್ವಜನಿಕರೊಂದಿಗೆ ಏಕವಚನದಲ್ಲಿ ಮಾತನಾಡಿ, ಅಸಮಾಧಾನ ವ್ಯಕ್ತಪಡಿಸಿದ ಘಟನೆ ಕೂಡ ನಡೆಯಿತು. ಅಧಿಕಾರಿಯ ವರ್ತನೆಗೆ ಸ್ಥಳದಲ್ಲಿದ್ದ ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ರಾಷ್ಟ್ರೀಯ ನಾಯಕರ ಜಯಂತಿ ಹಾಗೂ ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ಕೇವಲ ಔಪಚಾರಿಕವಾಗಿ ನಡೆಸದೆ, ಅರ್ಥಪೂರ್ಣವಾಗಿ ಮತ್ತು ಜನಸಹಭಾಗಿತ್ವದೊಂದಿಗೆ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂದಿನ ದಿನಗಳಲ್ಲಿ ಇಂತಹ ನಿರ್ಲಕ್ಷ್ಯ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ, ಕಾರ್ಯಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ನಡೆಸಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.