ಸಾಧಕರಿಗೆ ಪ್ರೋತ್ಸಾಹ ಇತರರಿಗೆ ಪ್ರೇರಣೆ: ಡಾ. ಎಂಎನ್‌ಆರ್

KannadaprabhaNewsNetwork |  
Published : Jul 05, 2026, 02:45 AM IST
ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್‌ ವತಿಯಿಂದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು | Kannada Prabha

ಸಾರಾಂಶ

ಸಾಧಕ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ಅವರನ್ನು ಇನ್ನಷ್ಟು ಸಾಧನೆ, ಉನ್ನತ ಶಿಕ್ಷಣ ಪಡೆಯಲು ಉತ್ತೇಜಿಸುತ್ತದೆ. ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಮಂಗಳೂರು: ಸಾಧಕ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ಅವರನ್ನು ಇನ್ನಷ್ಟು ಸಾಧನೆ, ಉನ್ನತ ಶಿಕ್ಷಣ ಪಡೆಯಲು ಉತ್ತೇಜಿಸುತ್ತದೆ. ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಶನಿವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರಿ ಪಿತಾಮಹ ದಿ.ಮೊಳಹಳ್ಳಿ ಶಿವರಾವ್ ಸ್ಮರಣಾರ್ಥವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಲಿಕೆಗೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ದೃಷ್ಟಿಯಿಂದ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ೨೦೦೮ರಿಂದ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ನಡೆಸುತ್ತಿದೆ. ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್ ವತಿಯಿಂದ ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಲ್ಲ. ನವೋದಯ ಸ್ವಸಹಾಯ ಸಂಘಗಳಲ್ಲಿ ಶೇ.೯೦ರಷ್ಟು ಮಂದಿ ಮಹಿಳಾ ಸದಸ್ಯರಿದ್ದು, ಶೇ. ೯೮.೫ರಷ್ಟು ಸಾಲ ಮರುಪಾವತಿ ಆಗುತ್ತಿದೆ. ಗ್ರಾಮಾಂತರ ಪ್ರದೇಶದ ಮಹಿಳೆಯರೂ ಬೆಳೆಯಬೇಕು ಎಂಬ ದೃಷ್ಟಿಯಿಂದ ಎಲ್ಲರೂ ಸೇರಿ ಪ್ರತಿಭಾ ಪುರಸ್ಕಾರ ನಡೆಸುತ್ತಿದ್ದೇವೆ ಎಂದರು.ವಿಕಾಸ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕ, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನೀಡಿದ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದು ಅವರು ದೇಶದ ಸಂಪತ್ತಾಗಿ ಬೆಳೆಯಬೇಕು. ಮೊಳಹಳ್ಳಿ ಶಿವರಾವ್ ಅವರನ್ನು ಮೀರಿಸುವ ವ್ಯಕ್ತಿತ್ವ, ಕೆಲಸ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಆಗಿದೆ. ಸಹಕಾರ ರಂಗವನ್ನು ಹೇಗೆ ಕಟ್ಟಿ ಬೆಳೆಸಬೇಕು ಎಂಬುದನ್ನು ಡಾ.ಎಂ.ಎನ್‌.ಆರ್‌. ತೋರಿಸಿಕೊಟ್ಟಿದ್ದಾರೆ ಎಂದರು.

ಮೂರು ಲಕ್ಷ ನವೋದಯ ಗುಂಪುಗಳ ಮೂಲಕ ೧೫ ಲಕ್ಷಕ್ಕೂ ಹೆಚ್ಚು ಜನರಿಗೆ ನೆರವಾಗಿರುವುದು ಜಗತ್ಪ್ರಸಿದ್ದ ಕಾರ್ಯ. ಆ ಮೂಲಕ ಅವರು ಅವಿಭಜಿತ ದ.ಕ. ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದರು.ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ.ವಾದಿರಾಜ ಶೆಟ್ಟಿ, ಭಾಸ್ಕರ್ ಎಸ್.ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ಬಿ.ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ.ಮಹೇಶ್ ಹೆಗ್ಡೆ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್.ಎನ್.ಮನ್ಮಥ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಸಹಾಯಕ ನಿಬಂಧಕ ರಘು, ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಿಇಒ ಪ್ರವೀಣ್ ನಾಯಕ್, ಎಸ್‌ಸಿಡಿಸಿಸಿ ಬ್ಯಾಂಕ್ ಮಹಾಪ್ರಬಂಧಕ ಸುನೀಲ್ ಕುಮಾರ್ ಹೊಳ್ಳ ಮತ್ತಿತರರು ಇದ್ದರು.ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿದರು. ಸಹಾಯಕ ಮಹಾಪ್ರಬಂಧಕ ರಾಜೇಶ್ ಶೆಟ್ಟಿ ವಂದಿಸಿದರು. ಸಿಬ್ಬಂದಿ ರಾಜೀವ್ ಕಕ್ಯಪದವು ನಿರೂಪಿಸಿದರು.\ಪ್ರತಿಭಾ ಪುರಸ್ಕಾರ: 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆ ಮಾಡಿದ (ಒಟ್ಟು 34 ಮಂದಿ) ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕ್‌ನ 116 ಸಿಬ್ಬಂದಿ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಹಾಗೂ ನವೋದಯ ಸ್ವಸಹಾಯ ಸಂಘಗಳ 161 ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.ಎಸ್‌ಸಿಡಿಸಿಸಿ ಬ್ಯಾಂಕ್ ಜನತಾ ಬಜಾರ್ ಶಾಖೆಯ ಮೆನೇಜರ್ ದೀಪಕ್ ಅವರ ಪುತ್ರ ಕನಿಶ್ ಡಿ.ಕೋಟ್ಯಾನ್ ಕ್ರೀಡಾ ಕ್ಷೇತ್ರದ ಸಾಧನೆಗೆ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಿಬ್ಬಂದಿ ಚಂದ್ರಶೇಖರ ಅವರ ಪುತ್ರಿ ಶ್ರೀಜಾ ಸಿ.ಕೋಟ್ಯಾನ್ ಅವರ ಬಹುಮುಖ ಪ್ರತಿಭೆ ಗುರುತಿಸಿ ಹಾಗೂ ಯೋಗದಲ್ಲಿ ಅಪೂರ್ವ ಸಾಧನೆ ಮಾಡಿರುವ ತನುಶ್ರೀ ಪಿತ್ರೋಡಿ ಅವರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಳಿಕೋಟೆ ಪುರಸಭೆಯಿಂದ ಭೀಮನಬಾವಿ ಸ್ವಚ್ಛತಾ ಕಾರ್ಯ
ಪ್ರಸ್ತುತ ದಿನದಲ್ಲಿ ಸಂಸ್ಕಾರಯುತ ಶಿಕ್ಷಣ ಅತ್ಯವಶ್ಯಕ