ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ : ಸಚಿವ ಸತೀಶ ಜಾರಕಿಹೊಳಿ

KannadaprabhaNewsNetwork |  
Published : Jan 25, 2025, 01:00 AM ISTUpdated : Jan 25, 2025, 02:27 PM IST
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು | Kannada Prabha

ಸಾರಾಂಶ

ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ನೀಡಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಹಕಾರ ಮತ್ತು ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

 ಬೆಳಗಾವಿ :   ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ನೀಡಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಹಕಾರ ಮತ್ತು ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಶುಕ್ರವಾರ ಜರುಗಿದ ಪ್ರಸಕ್ತ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳಿಂದ ಅಗತ್ಯ ಸಹಕಾರ ನೀಡಲಾಗುವುದು. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸಲು ಸಾಕಷ್ಟು ಸರ್ಕಾರಿ ಜಮೀನು ಲಭ್ಯವಿಲ್ಲದಿರುವುದರಿಂದ ಸದ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಜಮೀನು ನೀಡಲು ಸಾಧ್ಯವಾಗುತ್ತಿಲ್ಲ. ಆದರೆ, ಖಾಸಗಿ ಜಮೀನು ಖರೀದಿಸಿ ಕೈಗಾರಿಕೆಗಳ ಸ್ಥಾಪನೆಗೆ ಎಲ್ಲ ರೀತಿಯ ನೆರವು ಮತ್ತು ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

ಮೈಕ್ರೋ ಫೈನಾನ್ಸ್ ಕಿರುಕುಳ: ಪರಿಶೀಲಿಸಿ ಕ್ರಮ: ಮೈಕ್ರೋ ಫೈನಾನ್ಸ್‌ಗಳಿಂದ ಜನ ಮೋಸ ಹೋಗದಂತೆ ಸಾರ್ವಜನಿಕರಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಸಹಕಾರ ಸಂಘಗಳಲ್ಲಿ ಸಾಲ ನೀಡುವ ಸಂದರ್ಭದಲ್ಲಿ ಎಲ್ಲ ನಿಯಮ ಹಾಗೂ ಷರತ್ತುಗಳ ಕುರಿತು ಮಾಹಿತಿ ನೀಡುವಂತೆ ಸೂಚಿಸಿದರು.

ಬೆಳಗಾವಿ ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಂತ ಹಂತವಾಗಿ ಆರೋಗ್ಯ ಸೇವೆ ಆರಂಭಿಸಬೇಕು. ನಂತರದ ದಿನಗಳಲ್ಲಿ ಆಸ್ಪತ್ರೆ ಉದ್ಘಾಟನೆಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯ ಜಲಾಶಯಗಳಲ್ಲಿ ಕೈಗಾರಿಕಾ ಉದ್ದೇಶಕ್ಕೆ ಮೀಸಲಿಟ್ಟಿರುವ ನೀರಿನ ಪ್ರಮಾಣದ ಬಗ್ಗೆ ಸಮಗ್ರ ಮಾಹಿತಿ ಹಾಗೂ ಸರ್ಕಾರದ ಆದೇಶ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ತ್ರೈಮಾಸಿಕೆ ಕೆ.ಡಿ.ಪಿ. ಸಭೆ ಮಹತ್ವದ ಸಭೆಯಾಗಿದ್ದು ಸಭೆಯ ಗಂಭಿರತೆಯನ್ನು ಅರಿತು ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು. ಕೆ.ಡಿ.ಪಿ. ಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಸತೀಶ ಜಾರಕಿಹೊಳಿ ಅವರು, ಅಂತಹ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದರು.

ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯವೈಖರಿ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಅವರಿಗೆ ನಿರ್ದೇಶನ ನೀಡಿದರು.

ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಾಕಷ್ಟು ಅನುದಾನ ಒದಗಿಸುತ್ತಿದೆ. ಅದರೂ ಕೂಡ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಅಗತ್ಯ ಮೂಲ ಸೌಕರ್ಯದೊದಗಿಲು ಸಾಧ್ಯವಾಗುತ್ತಿಲ್ಲ ಎಂದ ಅವರು, ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯವೈಖರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕರಾದ ರಾಜು ಕಾಗೆ ಮಾತನಾಡಿ, ಪಶು ವೈದ್ಯಾಧಿಕಾರಿಗಳು ತಾಲೂಕು ಕೇಂದ್ರಗಳಲ್ಲಿಯೇ ಕಾರ್ಯ ನಿರ್ವಹಿಸುವಂತೆ ನಿರ್ದೆಶನ ನೀಡುವಂತೆ ಸೂಚಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಹಾಗೂ ಅಗತ್ಯ ಚಿಕಿತ್ಸಾ ಪರಿಕರಗಳನ್ನು ಒದಗಿಸಲು ಕ್ರಮ ವಹಿಸಬೇಕು. ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಕೊಳಗೇರಿ ನಿವಾಸಿಗಳಿಗೆ ನಿವೇಶನ ಹಾಗೂ ಹಕ್ಕುಪತ್ರ ವಿತರಿಸುವ ಕಾರ್ಯ ಕಾಲಮಿತಿಯಲ್ಲಿ ಪೂರ್ಣವಾಗಬೇಕು. ಈ ಕಾರ್ಯದಲ್ಲಿ ವಿಳಂಬಕ್ಕೆ ಆಸ್ಪದ ನೀಡದಂತೆ ನಿಗಾವಹಿಸುವಂತೆ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ್‌ ಮಾತನಾಡಿ, ಎರಡು ವರ್ಷಗಳಿಂದ ಗ್ರಾಮೀಣ ಭಾಗದ ಶಾಲೆಗಳಲ್ಲಿ ಮೂಲ ಸೌಕರ್ಯ ಪೂರೈಸಲಾಗುತ್ತಿಲ್ಲ. ಇದರಿಂದ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುವುದಿಲ್ಲ. ಶಾಲೆಗಳಿಗೆ ಮೂಲಸೌಕರ್ಯವನ್ನು ಕಾಲಮಿತಿಯಲ್ಲಿ ಒದಗಿಸಬೇಕು ಎಂದು ಒತ್ತಾಯಿಸಿದರು.ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಗೆ ಬರುವ ಜಿಲ್ಲಾ ಆಸ್ಪತ್ರೆಗಳ ಆಡಳಿತದಲ್ಲಿ ಜಿಲ್ಲಾಡಳಿತಕ್ಕೆ ಪ್ರಮುಖ ಜವಾಬ್ದಾರಿ ನೀಡಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು. ಕ್ಯಾನ್ಸರ್ ಆಸ್ಪತ್ರೆಯನ್ನು ಬೆಳಗಾವಿ ನಗರದಲ್ಲಿಯೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಶಾಸಕರಾದ ಮಹಾಂತೇಶ ಕೌಜಲಗಿ ಮಾತನಾಡಿ, ಸರಕಾರಿ ಜಾಗೆಗಳ ಒತ್ತುವರಿ ಕಾರ್ಯ ನಡೆಯುತ್ತಿದ್ದು, ಈ ಕುರಿತು ಜಿಲ್ಲಾಡಳಿತ ಸೂಕ್ತ ನಿಗಾವಹಿಸಬೇಕು. ಭೂ ಪರಿವರ್ತನೆಗೆ ಬರುವಂತಹ ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಲು ತಿಳಿಸಿದರು.

ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ-ಧಾರವಾಡ ಕೈಗಾರಿಕೆಗಳಿಗೆ ನೀಡುವ ಕುರಿತು ಮಾಹಿತಿಯನ್ನು ಕೇಳಿದ ಶಾಸಕ ಆಸಿಫ್(ರಾಜು) ಸೇಠ್ ಅವರು, ಹಿಡಕಲ್ ಜಲಾಶಯದಿಂದ ಕೈಗಾರಿಕಾ ಉದ್ಧೇಶಕ್ಕಾಗಿ ನೀರು ಕೊಂಡೊಯ್ಯಲು ಇದುವರೆಗೆ ಅನುಮತಿ ನೀಡಿರದಿದ್ದರೆ ತಕ್ಷಣವೇ ಅನುಮತಿ ತಡೆಹಿಡಿಯಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.

ಶಾಸಕ ಬಾಬಾಸಾಹೇಬ್ ಪಾಟೀಲ, ಕಿತ್ತೂರು ತಾಲ್ಲೂಕಿನ ಪಶು ಆಸ್ಪತ್ರೆಗಳಿಗೆ ಕೂಡಲೇ ವೈದ್ಯರನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ ಮಾತನಾಡಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕುರಿತು ಈಗಾಗಲೇ ಸಭೆ ಜರುಗಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಬಡ್ಡಿ ಆಸೆಗಾಗಿ ಸಾಲ ಪಡೆದು ಮೋಸ ಹೊಗುತ್ತಿದ್ದು, ಇದನ್ನು ನಿಯಂತ್ರಿಸಲು ಕ್ರಮ ವಹಿಸಲಾಗುವುದು.

ಹಿಡಕಲ್ ಜಲಾಶಯದಿಂದ ೦.೫೮ ಟಿಎಂಸಿ ನೀರನ್ನು ಕಿತ್ತೂರು ಹಾಗೂ ಧಾರವಾಡ ಕೈಗಾರಿಕಾ ಪ್ರದೇಶಗಳಿಗೆ ನೀರು ಹಂಚಿಕೆ ನಿಯಮಾನುಸಾರ ಮಾಡಲಾಗಿರುತ್ತದೆ. ಜಲಾಶಯದ ಹಿನ್ನೀರಿನಿಂದ ನೀರು ಪಡೆಯುತ್ತಿಲ್ಲ. ಇದರ ಬದಲಾಗಿ ಜಲಾಶಯದಿಂದ ಬಿಡುಗಡೆ ಮಾಡಲಾದ ನೀರನ್ನು ಮಾತ್ರ ಪಡೆಯಲು ಅವಕಾಶವಿರುತ್ತದೆ ಎಂದು ತಿಳಿಸಿದರು.

ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ಮಾತನಾಡಿ, ಮೈಕ್ರೋ ಫೈನಾನ್ಸ್ ಕಿರಿಕಳಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಕಾರ್ಯವಾಗುತ್ತಿದೆ. ಈ ಕುರಿತು ಬ್ಯಾಂಕ್ ಅಧಿಕಾರಿಗಳ ಸಭೆ ಆಯೋಜಸಲಾಗುತ್ತಿದೆ. ಮೂರನೇ ವ್ಯಕ್ತಿ ಹೆಸರಿನಲ್ಲಿ ಸಾಲ ಪಡೆಯದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿದರು.ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ವಿಠ್ಠಲ ಹಲಗೇಕರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ನಾಮನಿರ್ದೆಶಿತ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುವಾಗ ಮರಣ ಹೊಂದಿದ ನೌಕರರ ೨೧ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ಕೆಡಿಪಿ ಸಭೆಗೆ ಶಾಸಕರ ಗೈರು: ಬೆಳಗಾವಿ: ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಗೆ ಬೆಳಗಾವಿ ಜಿಲ್ಲೆಯಲ್ಲಿ 18 ಶಾಸಕರ ಪೈಕಿ ಸಚಿವರು ಸೇರಿ ಆರು ಜನ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಶಾಸಕರಾದ ಮಹಾಂತೇಶ ಕೌಜಲಗಿ, ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ, ರಾಜು ಕಾಗೆ, ವಿಠ್ಠಲ ಹಲಗೇಕರ್ ಹಾಜರಿಗಿದ್ದರೆ, ಶಾಸಕರಾದ ಲಕ್ಷ್ಮಣ ಸವದಿ, ವಿಶ್ವಾಸ ವೈದ್ಯ, ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಮಹೇಂದ್ರ ತಮ್ಮನ್ನವರ, ಶಶಿಕಲಾ ಜೊಲ್ಲೆ, ಗಣೇಶ ಹುಕ್ಕೇರಿ, ಅಶೋಕ ಪಟ್ಟಣ, ಅಭಯ ಪಾಟೀಲ ಸೇರಿ ಹಲವರು ಗೈರಾಗಿದ್ದರು.

PREV

Recommended Stories

ಪಕ್ಷದ ಗೆಲುವಿಗೆ ಕಾರ್ಯಕರ್ತೆಯರು ಶ್ರಮಿಸಿ
ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಉಗ್ರ ಶಿಕ್ಷೆ ವಿಧಿಸಿ