ಕನ್ನಡಪ್ರಭವಾರ್ತೆ ಶಿವಮೊಗ್ಗ
ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಒಂದಿಲ್ಲೊಂದು ಪ್ರತಿಭೆ ಅಡಗಿದ್ದು, ಅಂತಹವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯ ಎಂದು ಎಂದು ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ, ಕೆಪಿಸಿಸಿ ಸಂಯೋಜಕ ಆರ್. ಮೋಹನ್ ಹೇಳಿದರು.ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64 ನೇ ಜನ್ಮ ದಿನಾಚರಣೆ ಅಂಗವಾಗಿ ಬುಧವಾರ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಶುಭಂ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಹಕ್ಕಿಪಿಕ್ಕಿ ಕ್ಯಾಂಪ್‌ನ ವಿದ್ಯಾರ್ಥಿಗಳು ಸೇರಿ ವಿವಿಧ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.
ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಮತ್ತಷ್ಟು ಸಾಧನೆ ಮಾಡಲು ಉತ್ತೇಜನ ನೀಡಿದಂತಾಗುತ್ತದೆ. ಅಲ್ಲದೆ ಈ ಮೂಲಕ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.ಮುಖ್ಯಮಂತ್ರಿ ಮತ್ತು ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಶಾಲೆಯಲ್ಲಿ ಓದಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್ ಪಡೆದ ಅಂಕಿತಾಗೆ ತಲಾ 5 ಲಕ್ಷ, 3ನೇ ಸ್ಥಾನ ಪಡೆದ ಮಂಡ್ಯದ ನವನೀತ್‌ಗೆ ಕ್ರಮವಾಗಿ ಮೂರು ಮತ್ತು ಎರಡು ಲಕ್ಷ ರು. ಪ್ರೋತ್ಸಾಹ ಧನ ನೀಡಿ ಅಭಿನಂದಿಸಿದ್ದಾರೆ. ಈ ಮೂಲಕ ಡಿ.ಕೆ. ಶಿವಕುಮಾರ್ ಅವರು ದೇಶದಲ್ಲೇ ಮಾದರಿ ರಾಜಕಾರಣಿ ಆಗಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಸ್ತುತ ದಿನಮಾನದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದರೆ ಜಗತ್ತಿನ ಯಾವುದೇ ಮೂಲೆಯಲ್ಲಿ ಬೇಕಾದರೂ ಸ್ಪರ್ಧೆ ಎದುರಿಸಿ ಸಮಾಜದಲ್ಲಿ ಮುಂದೆ ಬರಬಹುದು ಎಂದರು.ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಆರ್.ಮೋಹನ್ ಅವರು ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಸ್ಥಾಪಿಸಿ ಆಯಾ ಸಂದರ್ಭದ ಲಾಭ, ಸ್ವಹಿತ ಇಲ್ಲವೇ ವ್ಯಕ್ತಿಪೂಜೆ ಅಥವಾ ವ್ಯಕ್ತಿ ಆರಾಧನೆಗಾಗಿ ಸೀಮಿತವಾಗದೇ 2001 ರಿಂದಲೂ ನಿರಂತರವಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರಿಗೆ ಶೋಭೆ ತರುವಂತಹ ವಿವಿಧ ಸಮಾಜ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಪಶ್ಚಿಮ ಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಎಸ್.ಪಿ. ಶೇಷಾದ್ರಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರುಗಳನ್ನು ಸನ್ಮಾನಿಸಲಾಯಿತು. ಚಲವಾದಿ ಮಹಾಸಭಾದ ಅಧ್ಯಕ್ಷ ಸಿದ್ದಪ್ಪ, ಯಾಗ ಕ್ಷತ್ರೀಯ ಸಾಧುಶೆಟ್ಟಿ ಸಮಾಜದ ಜಿಲ್ಲಾಧ್ಯಕ್ಷ ಎನ್. ಉಮಾಪತಿ, ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಹಸೂಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಲಲಿತಾ ಗಣೇಶ್, ಯುವ ಕಾಂಗ್ರೆಸ್ ಮುಖಂಡ ದಯಾನಂದ್, ಕಾಂಗ್ರೆಸ್ನ 24 ನೇ ವಾರ್ಡಿನ ಅಧ್ಯಕ್ಷ ಶಿವಕುಮಾರ್, ಪ್ರಕಾಶ್ ಐತಾಳ್, ಹಸೂಡಿ ಫಾರಂನ ಆರ್ಮುಗಂ, ಭೋವಿ ಸಮಾಜದ ಮುಖಂಡ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ಜೆಪಿಎನ್ ರಸ್ತೆಯ ಸರ್ವಸಿದ್ಧಿ ವಿನಾಯಕ ದೇವಾಲಯದಲ್ಲಿ ಶಿವನಿಗೆ ರುದ್ರಾಭಿಷೇಕ, ಗಣಪತಿ ಪೂಜೆ ನಡೆಯಿತು.