ಹಾರೋಹಳ್ಳಿ: ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಮೀಪ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿ ಸಮತಾ ಸೈನಿಕ ದಳ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಬೆಂಗಳೂರು ನಗರ ಉಪ ವಿಭಾಗಾಧಿಕಾರಿ ವಿಶ್ವನಾಥ್ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಆಲಿಸಿದರು.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಮ್ಮ ಜವಾಬ್ದಾರಿಯಂತೆ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾಧಿಕಾರಿಗಳ ಸೂಚನೆಯಂತೆ ಸರ್ಕಾರದ ಪ್ರತಿನಿಧಿಯಾಗಿ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದರು.
ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಿದರೆ ಕಾನೂನುಬದ್ಧ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.ಇದಲ್ಲದೆ, ಪ್ರತಿಭಟನಾಕಾರರ ಮನವಿ, ಬೇಡಿಕೆಗಳು ಹಾಗೂ ಹೋರಾಟದ ಉದ್ದೇಶವನ್ನು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣವಾಗಿ ತಿಳಿಸಿ, ಅವರು ನೀಡುವ ನಿರ್ದೇಶನ ಹಾಗೂ ತೀರ್ಮಾನವನ್ನು ಪ್ರತಿಭಟನಾಕಾರರಿಗೆ ತಲುಪಿಸುವ ಜವಾಬ್ದಾರಿಯನ್ನು ತಾವು ನಿರ್ವಹಿಸುವುದಾಗಿ ವಿಶ್ವನಾಥ್ ಭರವಸೆ ನೀಡಿದರು.
20ಕೆಆರ್ ಎಂಎನ್ 5.ಜೆಪಿಜಿ