ಕನ್ನಡಪ್ರಭ ವಾರ್ತೆ ಹಾಸನ
ಮಕ್ಕಳು ಶಾಲಾ ಹಂತದಲ್ಲಿ ಪಠ್ಯ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಗೊಳಿಸುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಆರ್. ಪೂರ್ಣಿಮಾ ತಿಳಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಾಸವಿ ಆಂಗ್ಲ ಶಾಲೆಯ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಧಾರವಾಡದಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ ಮಕ್ಕಳು ತಮ್ಮ ಪ್ರತಿಭೆಯನ್ನು ಉತ್ತಮವಾಗಿ ಪ್ರಸುತ್ತಪಡಿಸುವ ಮೂಲಕ ರಾಜ್ಯಮಟ್ಟದಲ್ಲಿ ಹಾಸನ ಜಿಲ್ಲೆಗೆ ಕೀರ್ತಿ ತರಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ತಿಳಿಸಿದರು.
ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ಕಳೆದ ೧೦ ವರ್ಷಗಳಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು, ಮಕ್ಕಳು ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದರು.ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳಿಂದ ೨೨ ತಂಡಗಳು ಭಾಗವಹಿಸುತ್ತಿವೆ. ಜಿಲ್ಲಾ ಮಟ್ಟದಲ್ಲಿ ಉತ್ತಮ ತಂಡ ಆಯ್ಕೆಯಿಂದಾಗಿ ರಾಜ್ಯ ಮಟ್ಟದಲ್ಲಿ ಹೆಚ್ಚು ಪ್ರಥಮ ಸ್ಥಾನಗಳು ಗಳಿಸುವಂತಾಗಬೇಕು ಎಂದರು. ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ, ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯಿಂದ ಪ್ರಸ್ತುತಪಡಿಸುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯಕ್ರಮ ಮೂಡಿಬರುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರು ಮಾತನಾಡಿ, ಮಕ್ಕಳು ತಮ್ಮ ಪ್ರತಿಭೆಯಿಂದ ಹಾಸನವನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ಆಟ, ಊಟ, ಪಾಠ, ನಾಟ್ಯ, ಸಂಗೀತ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮಕ್ಕಳಿಗೆ ಪ್ರತಿಯೊಂದು ಹಂತದಲ್ಲಿ ಪ್ರೋತ್ಸಾಹ ನೀಡುವುದು ಶಿಕ್ಷಕರು ಪಾತ್ರವಾಗಿರುತ್ತದೆ ಎಂದು ಹೇಳಿದರು.ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎಚ್.ಕೆ. ಪಾಂಡು ಅವರು ಮಾತನಾಡಿ, ಜಿಲ್ಲಾ ಮಟ್ಟದ ಪ್ರತಿಭಾ ಕಾರಾಂಜಿ ಕಾರ್ಯಕ್ರಮದಲ್ಲಿ ಪ್ರತಿನಿಧಿಸಿ ಒಂದು ಉತ್ತಮ ಸ್ಥಾನ ಪಡೆದುಕೊಳ್ಳಿ ಎಂದು ಶುಭಹಾರೈಸಿದರು.
ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಕ್ಕಳ ಪ್ರತಿಭೆಗೆ ಅವಕಾಶಗಳನ್ನು ಕಲ್ಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು. ಸರಿಗಮಪ, ಕಾಮಿಡಿ ಕಿಲಾಡಿಗಳು ಇಂತಹ ಕಾರ್ಯಕ್ರಮಗಳಲ್ಲೂ ಕೂಡ ಶಿಕ್ಷಣ ಇಲಾಖೆಯಿಂದ ಭಾಗವಹಿಸುತ್ತಿದ್ದಾರೆ. ಜಿಲ್ಲಾ ಮಟ್ಟದಿಂದ ಮಕ್ಕಳು ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಮೊದಲ ಸ್ಥಾನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಣ್ಣಪ್ಪ, ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಬಿ.ಎಲ್. ಚಂದ್ರಪ್ಪ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಚ್.ಸಿ. ಬಸವರಾಜು, ಜಿಲ್ಲಾ ಪ್ರಾಥಮಿಕ ಶಾಲಾ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಡಿ.ಸಿ. ಮಹೇಶ್, ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪ್ರಾಥಮಿಕ ಮತ್ತು ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಂಪತ್ತು, ಹಾಸನ ಜಿಲ್ಲಾ ಕರ್ನಾಟಕ ರಾಜ್ಯ (೬-೮) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಂಜುನಾಥ ಎಂ ಸಿ, ಹಾಸನ ಜಿಲ್ಲಾ ಖಾಸಗಿ ಪ್ರೌಢಶಾಲಾ ಮತ್ತು ಸಂಯುಕ್ತ ಪದವಿಪೂರ್ವ ಕಾಲೇಜು ನೌಕರರ ಸಂಘದ ಅಧ್ಯಕ್ಷರಾದ ಆನಂದ್ ಕೆ ಬಿ, ಹಾಸನ ಜಿಲ್ಲಾ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಬಿ. ಸಂತೋಷ, ಹಾಸನ ಜಿಲ್ಲಾ ಶಾ.ಶಿ.ಇ ಲಿಪಿಕ ನೌಕರರು ವಾಹನ ಚಾಲಕರು ಮತ್ತು ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷರಾದ ಬಿ. ಎನ್. ಜಯರಾಮ್ ಮತ್ತಿತರರು ಉಪಸ್ಥಿತರಿದ್ದರು.
*********************************************ಫೋಟೋ:
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.