ಕೂಡ್ಲೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭೋತ್ಸವ

KannadaprabhaNewsNetwork |  
Published : Jul 20, 2025, 01:15 AM IST
ಕೂಡ್ಲೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭೋತ್ಸವ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 47 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಈಗ ಒಟ್ಟು 74 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತದೆ ಎಂದು ಸಿ. ರಂಗಧಾಮಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವ ಕಾರ್ಯಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರವು ಇದೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಬೋಧಿಸುತ್ತಿರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ) ತರಗತಿ ಆರಂಭಿಸಲಾಗುತ್ತಿದೆ.ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 47 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗ ಒಟ್ಟು 74 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಮಪ್ಪ ಅವರು ತಿಳಿಸಿದರು.ಕುಶಾಲನಗರ ಸಮೀಪ ಕೂಡ್ಲೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬಲವರ್ಧನೆಗೆ ಸಹಕರಿಸಬೇಕು:

ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ್ಯ ಬೆಳೆಸಲು ಆಂಗ್ಲ ಮಾಧ್ಯಮ ಶಿಕ್ಷಣ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಮತ್ತು ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು ಎಂದು ರಂಗಧಾಮಪ್ಪ ಮನವಿ ಮಾಡಿದರು.

ಜ್ಯೋತಿ ಬೆಳೆಗಿಸುವ ಮೂಲಕ ಆಂಗ್ಲ ಮಾಧ್ಯಮ ಶಿಕ್ಷಣ ಕಲಿಕಾ ತರಗತಿಗೆ ಚಾಲನೆ ನೀಡಿ ಮಾತನಾಡಿದ ಉದ್ಯಮಿ ಕೆ.ಕೆ.ಮಂಜುನಾಥ್ ಕುಮಾರ್ , ರಾಜ್ಯ ಸರ್ಕಾರವು ಆಂಗ್ಲ ಮಾಧ್ಯಮ ಆರಂಭಿಸುವ ಮೂಲಕ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 4,134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದ್ದು, ಗುಣಮಟ್ಟದ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದರು.

ಕುಶಾಲನಗರ ತಾಲೂಕಿನ ಸರ್ಕಾರಿ ಶಾಲೆಗಳ ಕಟ್ಟಡಗಳ ನಿರ್ಮಾಣ ಮತ್ತು ದುರಸ್ತಿಗೆ ಸರ್ಕಾರ ಸೂಕ್ತ ಅನುದಾನ ನೀಡಲಿದೆ ಎಂದರು.ಆಂಗ್ಲ ಮಾಧ್ಯಮ ಶಿಕ್ಷಣ ಕೇವಲ ಕೆಲವರ ಸ್ವತ್ತಾಗಿತ್ತು. ಈಗ ಕಾಲ ಬದಲಾಗಿದೆ. ಈಗ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುತ್ತಿರುವುದರಿಂದ ಗ್ರಾಮಾಂತರ ಪ್ರದೇಶಗಳ ಬಡ ಕೂಲಿ ಕಾರ್ಮಿಕರ ಮಕ್ಕಳು ಅಗತ್ಯ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಮಂಜುನಾಥ್ ಕುಮಾರ್ ಹೇಳಿದರು.

ಮಕ್ಕಳಿಗೆ ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್, ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದು ತುಂಬಾ ಸಂತಸ ಮತ್ತು ಖುಷಿ ತಂದಿದೆ ಎಂದರು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಮನವಿ ಮಾಡಿದರು.

ಸರ್ಕಾರ ಕೈಗೊಂಡಿರುವ ಕ್ರಮ ಉತ್ತಮ:

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮ ಉತ್ತಮವಾದುದ್ದು. ಸೋಮವಾರಪೇಟೆ ತಾಲೂಕಿನಲ್ಲಿ 15 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. .ಇದು ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಇಂಗ್ಲೀಷ್ ಕಲಿಯುವ ಅವಕಾಶ ಲಭಿಸಿರುವುದು ಸಂತಸದ ವಿಷಯ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವ ಕುರಿತು ಸ್ಥಳೀಯವಾಗಿ

ಅರಿವು ಮೂಡಿಸಿದರೆ ಶಾಲೆಗೆ ಹೆಚ್ಚು ಮಕ್ಕಳನ್ನು ದಾಖಲಿಸಲು ಸಾಧ್ಯ ಎಂದರು.ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಗ್ರಾಮಾಂತರ ಪ್ರದೇಶದ ನಮ್ಮ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ , ತಮ್ಮ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲು ಇಲಾಖೆಯ ಅಧಿಕಾರಿಗಳಿಗೆ ಸಹಕರಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

ಸಿ.ಆರ್.ಪಿ., ಕೆ.ಶಾಂತಕುಮಾರ್, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕುರಿತು ಮಾಹಿತಿ ನೀಡಿದರು.

ಮಂಡಲ ಪಂಚಾಯತಿ ಮಾಜಿ ಪ್ರಧಾನ ಕೆ.ಎಸ್.ರಾಜಾಚಾರಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಗ್ರಾ.ಪಂ.ಪಿಡಿಓ ಎಂ.ಆರ್. ಸಂತೋಷ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪೂಜಾ, ಅರ್ಪಿತ, ಯಮುನ, ಸುಮತಿ, ಪ್ರಾಥಮಿಕ ಶಾಲೆಯ ಶಿಕ್ಷಕರು, ಪೋಷಕರು

ವಿದ್ಯಾರ್ಥಿಗಳು ಇದ್ದರು. ಸಿ.ಆರ್.ಪಿ., ಕೆ.ಶಾಂತಕುಮಾರ್ ನಿರ್ವಹಿಸಿದರು.

PREV

Latest Stories

ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ
ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ