ಕನ್ನಡಪ್ರಭ ವಾರ್ತೆ ಕೋಲಾರ
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಹೆಸರು ನೋಂದಾಯಿಸುವ ಮೂಲಕ ರೈತರು ತಮ್ಮ ಬೆಳೆಗಳಿಗೆ ಬೆಳೆವಿಮೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಮಟ್ಟದ ಬೆಳೆ ವಿಮೆ ಜಂಟಿ ಸಮಿತಿ ಸಭೆಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರು ಬೆಳೆಗಳ ವಿಮೆ ಮಾಡಿಸಲು ಬ್ಯಾಂಕ್, ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಪಡೆದ ರೈತರಿಗೆ ಸಾಲ ಮಂಜೂರಾತಿ ವೇಳೆ ವಿಮಾ ಕಂತನ್ನು ಕಡಿತ ಮಾಡಿಕೊಂಡೆ ಸಾಲದ ಮೊತ್ತ ನೀಡಲಾಗಿದೆ ಎಂದು ಹೇಳಿದರು.
ಬೆಳೆ ನಷ್ಟಕ್ಕೆ ವಿಮೆ ಪರಿಹಾರವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ, ನಾಟಿ ಮಾಡಲು ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿಯಿರುವ ಬೆಳೆಗಳಿಗೆ (ಬಿತ್ತನೆಯಿಂದ ಕಟ್ಟಾವು ಹಂತದವರೆಗೆ) ಬರ, ಶುಷ್ಕ ಪರಿಸ್ಥಿತಿ, ನೆರೆ, ಪ್ರವಾಹಗಳಿಂದ ಬೆಳೆ ಮುಳುಗಡೆ, ಗುಡುಗು-ಮಿಂಚುಗಳಿಂದ ಉಂಟಾಗುವ ಬೆಂಕಿಯ ಅಪಘಾತ, ಭೂ ಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆ ಒದಗಿಸುವುದು ಎಂದರು.
ರೈತರು ಹತ್ತಿರದ ಬ್ಯಾಂಕ್ ಗ್ರಾಮ-೧, ಸಾಮಾನ್ಯ ಸೇವಾ ಕೇಂದ್ರಗಳು ಹಾಗೂ ಕರ್ನಾಟಕ-೧ ಕೇಂದ್ರಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪುಸ್ತಕ, ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ
ಹೆಚ್ಚಿನ ವಿವರಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು. ರೈತರು ಅಂದಾಜು, ಅಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೇ ವಿಮೆಗೆ ನೋಂದಾಯಿಸಕೊಳ್ಳಬಹುದಾಗಿದೆ ಹಾಗೂ ಬಿತ್ತನೆ ದೃಢೀಕರಣದ ಅಗತ್ಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.ಬೆಳೆ ಬದಲಾಯಿಸಿದರೆ ಮಾಹಿತಿ ನೀಡಿ
ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗದಿಪಡಿಸಿದ ಅವಧಿಯೊಳಗಾಗಿ ತಾವು ನೋಂದಾಯಿಸಿದ ಕೇಂದ್ರಗಳಿಗೆ ತೆರಳಿ, ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ಸುಮಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ ಇದ್ದರು.