ಚಾಮರಾಜನಗರ: ಜಿಲ್ಲೆಯ ಪರಿಶಿಷ್ಟ ಪಂಗಡ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ, ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂದಾಗುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ೧,೩೨,೨೦೧ ಮಂದಿ ಪರಿಶಿಷ್ಟ ಸಮುದಾಯಗಳ ಜನರಿದ್ದು, ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಘಟಕ ಯೋಜನೆಗಳಡಿ ಜಿಲ್ಲಾ ಹಾಗೂ ತಾಲೂಕುಮಟ್ಟದ ಕಚೇರಿಗಳಿಗೆ ಸಮುದಾಯದ ಜನರ ಸೌಲಭ್ಯಗಳಿಗಾಗಿ ಸರ್ಕಾರದ ವತಿಯಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಬೇಕು. ಯಾವುದೇ ಫಲಾನುಭವಿಗಳು ಸೌಲಭ್ಯದಿಂದ ವಂಚಿತಾರಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಯೋಜನೆಗಳ ಪರಿಶೀಲನಾ ಸಭೆಗೆ ಅಧಿಕಾರಿಗಳು ಕ್ರಮಬದ್ಧ ಮಾಹಿತಿ ಒದಗಿಸಬೇಕು. ಪರಿಶಿಷ್ಟ ಪಂಗಡಗಳ ಜನರಿಗೆ ಸೌಲಭ್ಯ ನೀಡುವ ಸಮಗ್ರ ಪ್ರಗತಿ ವರದಿಯನ್ನು ಸಂಬಂಧಿತ ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರತಿತಿಂಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ತಪ್ಪಿದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ೨,೧೬,೦೦೦ ರೈತರಿದ್ದು, ಬೆಳೆ ಸರ್ವೇಯಲ್ಲಿ ೧೮೩೫೦ ರೈತರು ಮಾತ್ರ ವಿಮೆಗೆ ಒಳಪಟ್ಟಿದ್ದಾರೆ. ಇನ್ನೂ ಹೆಚ್ಚಿನ ಪ್ರಗತಿಯಾಗಬೇಕು. ಸಹಕಾರ ಹಾಗೂ ಮೀನುಗಾರಿಗೆ ಇಲಾಖೆ ಯೋಜನೆ ಅನುಷ್ಠಾನದಲ್ಲಿ ಹೆಚ್ಚಿನ ಗುರಿ ನಿಗದಿ ಮಾಡಬೇಕು ಎಂದರು. ಕೆಲ ಗ್ರಾಮಗಳಲ್ಲಿ ಸಮುದಾಯಗಳ ಜನರಿಗೆ ಯಾರಿಗೆ ನಿವೇಶನಗಳಿಲ್ಲ, ಮನೆಗಳಿಲ್ಲ, ಸ್ಮಶಾನಗಳಿಲ್ಲ, ಅಂತಹ ಗ್ರಾಮಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಅಗತ್ಯ ಸೌಲಭ್ಯ ತಲುಪಿಸಲು ಸಕ್ರಿಯರಾಗಬೇಕು. ಜಿಲ್ಲೆಯ ಎಲ್ಲಾ ೧೩೦ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಭಾರತ್ ಜೂಡೋ ಯುವಕ ಸಂಘಗಳ ನೊಂದಣಿ ಚುರುಕುಗೊಳಿಸಬೇಕು. ನೊಂದಣಿಯಲ್ಲಿ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಆದ್ಯತೆ ನೀಡುವಂತೆ ಎಂದು ಸಚಿವರಾದ ಟಿ. ರಘುಮೂರ್ತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ಚಂದ್ರಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಪುಟ್ಟಗೌರಮ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್‌ಕುಮಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್. ಬಿಂದ್ಯಾ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
9ಸಿಎಚ್ಎನ್10