ಪರಿಷ್ಕರಣೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರನೂ ಮತದಾರರ ಪಟ್ಟಿಯಿಂದ ವಂಚಿತವಾಗದಂತೆ ಬಿಎಲ್‌ಒಗಳು ಹಾಗೂ ರಾಜಕೀಯ ಪಕ್ಷಗಳ ಬಿಎಲ್ ಎ- 2ಗಳು ಜಾಗೃತಿ ಮೂಡಿಸಬೇಕು. ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕು.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯಾವೊಬ್ಬ ಅರ್ಹ ಮತದಾರನೂ ಕೂಡ ವಂಚಿತವಾಗಬಾರದು. ನಾಗರಿಕ ಸಮಾಜದ ಎಲ್ಲಾ ಅರ್ಹ ಮತದಾರರು ಕೈಜೋಡಿಸಿ ಕೆಲಸ ಮಾಡಬೇಕು ಎಂದು ಮತದಾರರ ನೋಂದಣಾಧಿಕಾರಿ ಚಂದ್ರಶೇಖರ್ ಮನವಿ ಮಾಡಿದರು.
ತಾಲೂಕು ವ್ಯಾಪ್ತಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮತ ಚಲಾಯಿಸಿರುವ ಮತದಾರರು ಅದಕ್ಕೆ ಪೂರಕ ದಾಖಲೆಗಳನ್ನು ಒದಗಿಸುವ ಮೂಲಕ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.
ಪರಿಷ್ಕರಣೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರನೂ ಮತದಾರರ ಪಟ್ಟಿಯಿಂದ ವಂಚಿತವಾಗದಂತೆ ಬಿಎಲ್‌ಒಗಳು ಹಾಗೂ ರಾಜಕೀಯ ಪಕ್ಷಗಳ ಬಿಎಲ್ ಎ- 2ಗಳು ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಬೇರೆಡೆಗೆ ವರ್ಗಾವಣೆಯಾಗಿರುವ ಮತದಾರರು, ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಮೃತರಾಗಿರುವ ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗುವುದು ಎಂದು ಹೇಳಿದರು.
ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿರುವ ಮತದಾರರು ಸೇರಿದಂತೆ ಎಲ್ಲಾ ಅರ್ಹ ಮತದಾರರಿಗೆ ಮತದಾನದ ಹಕ್ಕನ್ನು ನೀಡುವ ಮಹತ್ವ ಪೂರ್ಣವಾದ ಕೆಲಸವನ್ನು ಚುನಾವಣಾ ಆಯೋಗ ಮಾಡುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಕಡ್ಡಾಯವಾಗಿ ಭಾರತೀಯ ನಾಗರಿಕ ಸಮಾಜದಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕರು ಭಾಗವಹಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಮತದಾರರ ಪಟ್ಟಿ ಪರಿಷ್ಕರಣೆಯ ಲೋಪ ದೋಷಗಳ ಬಗ್ಗೆ ವಿವಿಧ ರಾಜಕೀಯ ಪಕ್ಷಗಳ ಏಜೆಂಟರು ಹಾಗೂ ಬಿಎಲ್‌ಓ- 2ಗಳು ಮನವರಿಕೆ ಮಾಡಿಕೊಟ್ಟರು. ಪ್ರಸ್ತುತ ಪ್ರಗತಿ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಜೆಡಿಎಸ್ ಪಕ್ಷದ ಪರ ಮತಗಟ್ಟೆ ಮಟ್ಟದ ಏಜೆಂಟರಾದ ಹರೀಶ್, ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜು, ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಬಿಎಸ್ ಪಿ ಪಕ್ಷದ ತಾಲೂಕು ಸಂಚಾಲಕ ಗೋವಿಂದರಾಜು, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ವಿಶ್ವನಾಥ್, ಚುನಾವಣಾ ಶಾಖೆಯ ಶಿರಸ್ತೇದಾರ್ ಹರೀಶ್ ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.