ಕುಷ್ಟಗಿ: ಸರ್ಕಾರಿ ನೌಕರರಾದ ನಾವು ಜನಪರವಾಗಿ ಕೆಲಸ ಮಾಡಬೇಕು. ಅದರಲ್ಲೂ ಪ್ರಸ್ತುತ ಬರಗಾಲದ ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕೊಪ್ಪಳ ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ ಸೂಚಿಸಿದರು.
ಪ್ರಸ್ತುತ ಬರಗಾಲದ ಪರಿಸ್ಥಿತಿಯಲ್ಲಿ ರೈತರು ಸಂಕಷ್ಟ ಎದುರಿಸುತ್ತಿದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ರೈತರಿಗೆ ದೊರೆಯಬಹುದಾದ ಸರ್ಕಾರದ ವಿವಿಧ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು. ಸಹಾಯಧನ ಸೇರಿದಂತೆ ಇಲಾಖಾವಾರು ಯೋಜನೆಗಳ ಮಾಹಿತಿ ರೈತರಿಗೆ ತಲುಪಿಸಬೇಕು. ರೈತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ತಾಲೂಕಿನ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಯೋಜನೆ ರೂಪಿಸಿ, ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳತ್ತ ಹೆಚ್ಚಿನ ಗಮನ ಹರಿಸಬೇಕು. ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡುವ ಆಹಾರ ಹಾಗೂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪೂರೈಸುವ ಊಟದ ಗುಣಮಟ್ಟದ ಕುರಿತು ಸಂಬಂಧಿಸಿದ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು.