ಗದಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿಮತ್ತು ಗೃಹಜ್ಯೋತಿ ಯೋಜನೆಗಳ ಅನುಷ್ಠಾನವು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಪ್ಪು ಮಾಹಿತಿ ನೀಡಿ ಗ್ಯಾರಂಟಿ ಯೋಜನೆಗಳ ಲಾಭ ಪಡೆದಿರುವುವರಿಂದ ನಿಯಮಾನುಸಾರ ಹಣವನ್ನು ಹಿಂಪಡೆಯಲು ಮತ್ತು ಈ ಪ್ರಕ್ರಿಯೆಯನ್ನು ಎರಡು ವಾರಗಳೊಳಗೆ ಪೂರ್ಣಗೊಳಿಸಬೇಕು. ಗೃಹಜ್ಯೋತಿ ಯೋಜನೆಯಡಿ ಇನ್ನು ಜಾರಿಗೆ ಬಾರದೇ ಬಾಕಿ ಉಳಿದಿರುವ ಗ್ರಾಹಕರ ನೋಂದಣಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ಯಾರಂಟಿ ಯೋಜನೆಗಳ ಯಶಸ್ಸಿನ ಸಂಕೇತವಾಗಿ ಮತ್ತು ಪರಿಸರ ಸಂರಕ್ಷಣೆಯ ಮಹತ್ವ ಸಾರಲು ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಫಲಾನುಭವಿಗಳ ಮೂಲಕ ಕನಿಷ್ಠ ಒಂದು ಬೇವಿನ ಅಥವಾ ಆಲದ ಮರವನ್ನು ನೆಡುವ ವಿಶಿಷ್ಟ ಅಭಿಯಾನವನ್ನು ಹಮ್ಮಿಕೊಂಡು ಪರಿಸರ ಜಾಗೃತಿ ಮೂಡಿಸಲು ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚಿಸಿದರು.ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ(ಬ್ಯಾಡಗಿ) ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಾವಿನ ಪ್ರಕರಣಗಳ ಸಂಖ್ಯೆ, ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕಾರದ ಮೂಲಕ ಚಾಲನೆ ನೀಡಿ ಜು. 19ಕ್ಕೆ ಮೂರು ವರ್ಷ ತುಂಬುವ ಹಿನ್ನೆಲೆ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ, ರಾಜ್ಯದ ಯೋಜನೆಯ ಫಲಾನುಭವಿಗಳ ಹೆಚ್ಚುವರಿ ಮಾಹಿತಿಯನ್ನು ಪಡೆಯಲು ಎಸ್ಕಾಂ ಸಿಬ್ಬಂದಿ ಗ್ಯಾರಂಟಿ ಸಮಿತಿಗಳು ಸದಸ್ಯರ ಸಹಕಾರದ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕೃಷ್ಣಗೌಡ ಪಾಟೀಲ, ಮುಂಡರಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಡಿ.ಡಿ. ಮೊರಾನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಹುಲಿಗೆಮ್ಮ ಜೋಗೇರ, ಹೆಸ್ಕಾಂ ಅಧಿಕ್ಷಕ ಎಂಜಿನಿಯರ್ ನಜ್ಮನ್ನಿಸ್ ಕೆ. ಇದ್ದರು.