ಕನ್ನಡಪ್ರಭ ವಾರ್ತೆ ಬೀದರ್
ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದ ಸಚಿವರು ಜಿಲ್ಲೆಯ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಯಾವುದೇ ಲೋಪವಾಗದಿರಲಿ: ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿ ಗಳು ನಿರಂತರ ನಿಗಾ ವಹಿಸಬೇಕು. ನೀರಿನ ಕೊರತೆ ಇರುವ ಗ್ರಾಮಗಳನ್ನು ತಕ್ಷಣ ಗುರುತಿಸಿ, ಅಗತ್ಯವಿರುವ ಕಡೆಗಳಲ್ಲಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯುವುದು, ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವುದು ಸೇರಿದಂತೆ ಪರ್ಯಾಯ ವ್ಯವಸ್ಥೆಗಳನ್ನು ಸಿದ್ಧಪಡಿಸಬೇಕೆಂದು ಸೂಚಿಸಿದರು.ಕೆಟ್ಟು ಹೋಗಿರುವ ಕೊಳವೆ ಬಾವಿಗಳು, ಪಂಪ್‌ಸೆಟ್‌ಗಳು ಹಾಗೂ ನೀರು ಸರಬರಾಜು ವ್ಯವಸ್ಥೆಗಳನ್ನು ತಕ್ಷಣ ದುರಸ್ತಿಗೊಳಿಸಿ, ಜನರಿಗೆ ಸಮರ್ಪಕವಾಗಿ ನೀರು ತಲುಪುವಂತೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕ ರಿಂದ ದೂರುಗಳು ಬಂದಲ್ಲಿ ವಿಳಂಬ ಮಾಡದೆ ತಕ್ಷಣ ಸ್ಪಂದಿಸಬೇಕು ಎಂದು ತಿಳಿಸಿದರು.
ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆಗಳನ್ನು ಆರಂಭಿಸುವುದು ಹಾಗೂ ಮೇವು ಬ್ಯಾಂಕ್‌ಗಳ ವ್ಯವಸ್ಥೆ ಮಾಡುವ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಬೀದರ್ ಶಾಸಕರಾದ ರಹಿಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ ಸಿಇಓ ಗಿಟ್ಟೆ, ಎಸ್ಪಿ ಪ್ರದೀಪ ಗುಂಟಿ, ಬೀದರ್ ಸಹಾಯಕ ಆಯುಕ್ತರು, ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.