ಜಿಲ್ಲಾದ್ಯಂತ ಜೂ. 30 ರಿಂದ ಜುಲೈ 29 ರವರೆಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸಬೇಕು. ಮತದಾರ ಪಟ್ಟಿಯು ಚುನಾವಣೆ ಪ್ರಕ್ರಿಯೆಯ ಮೂಲಾಧಾರ ಆಗಿರುವುದರಿಂದ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೇ ಕಾರ್ಯ ನಿರ್ವಹಿಸಬೇಕು.
ಕನ್ನಡಪ್ರಭ ವಾರ್ತೆ, ಆಲೂರು
ಪ್ರತಿಯೊಬ್ಬ ನಾಗರೀಕರ ಮತ ಅಮೂಲ್ಯವಾದುದ್ದು, ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ನೈಜ ಮತದಾರರನ್ನು ಪಟ್ಟಿಯಿಂದ ಕೈ ಬಿಡದಂತೆ ಹಾಗೂ ನಮ್ಮ ಮತದಾರರನ್ನು ಗಟ್ಟಿಗೊಳಿಸುವ ಪ್ರಯತ್ನವನ್ನು ಬೂತ್ ಮಟ್ಟದಲ್ಲಿರುವ ಬಿ.ಎಲ್.ಎ.ಗಳು ನೋಡಿಕೊಳ್ಳಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ತಿಳಿಸಿದರು.
ಪಟ್ಟಣದ ಶಾಂಭವಿ ಕಲ್ಯಾಣ ಮಂಟಪದಲ್ಲಿ ಸಕಲೇಶಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಆಲೂರು ಮತ್ತು ಕಟ್ಟಾಯ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ, ಬಿ.ಎಲ್.ಎ -2 ಕಾಂಗ್ರೆಸ್ ಮುಖಂಡರಿಗೆ ಎಸ್.ಐ.ಆರ್ ಜಾಗೃತಿ ಸಭೆಯಲ್ಲಿ ಮಾತನಾಡಿದರು.
ಸಂಸದ ಶ್ರೇಯಸ್ ಎಂ. ಪಟೇಲ್ ಮಾತನಾಡಿ, ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿ.ಜೆ.ಪಿಯವರು ಎಸ್.ಐ.ಆರ್ ನ ಕಳ್ಳ ಮತಗಳಿಂದ ಗೆದ್ದಿದ್ದು, ಈ ನಿಟ್ಟಿನಲ್ಲಿ ಹೊಸದಾಗಿ ನಮ್ಮ ಸರ್ಕಾರ ಮತ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಸಭೆಯನ್ನು ಆಯೋಜಿಸಲಾಗಿದೆ. ಜನರು ಎಚ್ಚರಿಕೆ ವಹಿಸಿ ಅಧಿಕಾರಿಗಳು ಮನೆ ಮನೆಗೆ ಭೇಟಿ ಕೊಟ್ಟಾಗ ಜಾಗೃತಿಯಿಂದ ಮತದಾನದ ಪಟ್ಟಿಯನ್ನು ಪರೀಕ್ಷಿಸಿಕೊಳ್ಳುವ ಮೂಲಕ ಪಕ್ಷವನ್ನು ಬಲಪಡಿಸಿ ಮುಂದಿನ ಬಾರಿ ಏಳು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ನಾವು ಕಾರ್ಯ ಪ್ರವೃತ್ತರಾಗಬೇಕು ಹಾಗೂ ನಮ್ಮ ಪಕ್ಷಕ್ಕೆ ಹಗಲು ಇರುಳು ಶ್ರಮಿಸಿ ಪಕ್ಷ ಸಂಘಟನೆಗೊಳಿಸುತ್ತಿರುವ ಮುರಳಿ ಮೋಹನ್ ಅವರನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಕೈಹಿಡಿಯುವಂತೆ ಕಾರ್ಯಕರ್ತರಿಗೆ ತಿಳಿಸಿದರು.
ಮತ ಪಟ್ಟಿ ಪರಿಷ್ಕರಣೆ:
ಸಕಲೇಶಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುರಳಿ ಮೋಹನ್ ಮಾತನಾಡಿ, ಜಿಲ್ಲಾದ್ಯಂತ ಜೂ. 30 ರಿಂದ ಜುಲೈ 29 ರವರೆಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸಬೇಕು. ಮತದಾರ ಪಟ್ಟಿಯು ಚುನಾವಣೆ ಪ್ರಕ್ರಿಯೆಯ ಮೂಲಾಧಾರ ಆಗಿರುವುದರಿಂದ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೇ ಕಾರ್ಯ ನಿರ್ವಹಿಸಬೇಕು. ನಿಗದಿತ ವೇಳಾಪಟ್ಟಿಯೊಳಗೆ ಪರಿಷ್ಕರಣೆ ಕಾರ್ಯ ಪೂರ್ಣಗೊಳಿಸಬೇಕು. ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಇರಬೇಕೆಂಬುದು ಎಸ್‌ಐಆರ್‌ನ ಮೂಲ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಸಂಪೂರ್ಣವಾಗಿ ತರಬೇತಿಯನ್ನು ಪಡೆದುಕೊಂಡು ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸುವಂತೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಹೇಮಂತ್ ಮಾತನಾಡಿ, ಮತದಾರರ ಪಟ್ಟಿಗೆ ಹೊಸ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮತಗಟ್ಟೆ ಮಟ್ಟದ ಅಧಿಕಾರಿಗಳು ಕ್ಷೇತ್ರದಲ್ಲಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುವಾಗ ಅನುಸರಿಸಬೇಕಾದ ನಿಯಮಗಳು ಹಾಗೂ ಮಾರ್ಗಸೂಚಿಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಲಕ್ಷ್ಮಣ್, ಕೆಪಿಸಿಸಿ ಕಾರ್ಯಾಧ್ಯಕ್ಷ ಶಶಿಧರ್, ಸಕಲೇಶಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ಆಲೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪೃಥ್ವಿ ಜಯರಾಮ್, ಸಕಲೇಶಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಮುಫೀಸ್ ಸೇರಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಹಂತದ ಪದಾಧಿಕಾರಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.