ನೀರು ಪೂರೈಕೆಯಲ್ಲಿ ಸಮಸ್ಯೆಗಳಾಗದಂತೆ ನಿಗಾವಹಿಸಿ

KannadaprabhaNewsNetwork |  
Published : May 14, 2025, 01:55 AM IST
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಬೇಸಿಗೆ ತೀವ್ರವಾಗಿರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಗಳಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಬೇಸಿಗೆ ತೀವ್ರವಾಗಿರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಗಳಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಜರುಗಿದ 2024-25ನೇ ಸಾಲಿನ 4ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಲಜೀವನ್ ಮಿಷನ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಕಾಮಗಾರಿಗಳನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು. ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಇತರೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಗಳನ್ನು ತ್ವರಿತವಾಗಿ ಸಲ್ಲಿಸುವಂತೆ ಸೂಚಿಸಿದರು.

ಜಲಜೀವನ ಮಿಷನ್ ಹಾಗೂ ಮೇಲ್ಮಟ್ಟದ ಜಲ ಸಂಗ್ರಹಾಗಾರಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆಯಾ ಮತಕ್ಷೇತ್ರಗಳ ಶಾಸಕರುಗಳೊಡನೆ ಸಭೆ ಜರುಗಿಸಿ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಜಿಲ್ಲೆಗೆ ಮಂಜೂರಾಗಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಬೆಳಗಾವಿ ನಗರದಲ್ಲಿ ಅದರಲ್ಲೂ ಈಗಿರುವ ಬಿಮ್ಸ್ ಆವರಣದಲ್ಲಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಇದಕ್ಕಾಗಿ ಸೂಕ್ತ ನಿವೇಶನ ಗುರುತಿಸಲಾಗುವುದು ಎಂದರು.

ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನುರಿತ ತಜ್ಞ ವೈದ್ಯರ ಹಾಗೂ ಸಿಬ್ಬಂದಿ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಗಮನಕ್ಕೂ ತರಲಾಗಿದೆ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ಜಿಲ್ಲೆಯಲ್ಲಿ ನಿರ್ಮಾಣವಾದಂತಹ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಿವಾರಣೆಗೆ ಜಿಲ್ಲೆಯ ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದರು.

ವಿಕಲಚೇತನರಿಗೆ ವಿತರಿಸಲಾಗುವ ತ್ರಿಚಕ್ರವಾಹನಗಳನ್ನು ಆಯಾ ಆರ್ಥಿಕ ವರ್ಷದಲ್ಲಿಯೇ ವಿತರಿಸಲು ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ವಾಹನಗಳ ವಿತರಣೆಯಲ್ಲಿ ವಿಳಂಬವಾಗಬಾರದು. ಕೊಳಗೇರಿ ಅಭಿವೃದ್ಧಿ ನಿಗಮದ ಅಧಿಕಾರಿ ಸಭೆಗೆ ಆಗಮಿಸದೆ ಇರುವುದು ಹಾಗೂ ಸಮರ್ಪಕ ಮಾಹಿತಿ ನೀಡದೇ ಇರುವದರಿಂದ ಅವರ ವಿರುದ್ಧ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿ, ತಮ್ಮ ಹಂತದಲ್ಲಿ ಕೊಳಗೇರಿ ಅಭಿವೃದ್ಧಿ ನಿಗಮದಿಂದ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಭೆ ಜರುಗಿಸಿ ಮಾಹಿತಿ ನೀಡಲು ತಿಳಿಸಿದರು.ಅಂಗನವಾಡಿ ಕೇಂದ್ರಗಳಿಗೆ ಪೂರೈಸಲಾಗುವ ಮೊಟ್ಟೆ ಸೇರಿದಂತೆ ವಿವಿಧ ಆಹಾರ ಸಾಮಗ್ರಿಗಳ ಗುಣಮಟ್ಟತೆಯನ್ನು ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಸೂಚಿಸಿದರು. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ತೃಪ್ತಿದಾಯಕವಾಗಿಲ್ಲ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಳಮಟ್ಟದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಫಲಿತಾಂಶ ಸುಧಾರಣೆಗೆ ಒತ್ತು ನೀಡಲು ಗಂಭಿರವಾಗಿ ಚಿಂತಿಸಬೇಕು ಎಂದರು. ಅರಣ್ಯ ಇಲಾಖೆ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ ಇಲಾಖಾ ಅಧಿಕಾರಿಗಳು ತರಬೇತಿ ನೀಡುವುದರ ಜೊತೆಗೆ ನಿಯಮಿತವಾಗಿ ಜರಗುವು ಸಭೆಗಳಿಗೆ ಹಾಜರಾಗಬೇಕು. ಮುಂದಿನ ಸಭೆಯ ಒಳಗಾಗಿ ಸಚಿವರ ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಗಳನ್ನು ಆಯೋಜಿಸಲು ಜಿಲ್ಲಾಧಿಕಾರಿಗೆ ಸೂಚಿಸಿದರು.ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ(ಬ್ಯಾಡಗಿ) ಶಾಸಕರಾದ ಮಹಾಂತೇಶ ಕೌಜಲಗಿ, ಆಸೀಫ್‌ ಸೇಠ್‌, ಗಣೇಶ ಹುಕ್ಕೇರಿ , ವಿಶ್ವಾಸ ವೈದ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌, ಜಿಪಂ ಸಿಇಒ ರಾಹುಲ ಶಿಂಧೆ, ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮೊದಲಾದವರು ಉಪಸ್ಥಿತರಿದ್ದರು. ಸಭೆಯ ನಂತರ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಪಡೆದ ಬೈಲಹೊಂಗಲ ತಾಲೂಕಿನ ದೇವಲಾಪೂರ ಗ್ರಾಮದ ವಿದ್ಯಾರ್ಥಿನಿ ರೂಪಾ ಪಾಟೀಲ ಹಾಗೂ ಹೆಚ್ಚು ಅಂಕ ಪಡೆದ ಜಿಲ್ಲೆಯ ಎಲ್ಲ ತಾಲೂಕುಗಳ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸನ್ಮಾನಿಸಿದರು. ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ