ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲಿಯೇ ಆಗಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗಬೇಕು. ನೀರಿನ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳಲ್ಲಿ ಪರ್ಯಾಯ ವ್ಯವಸ್ಥೆ ಮೂಲಕ ನೀರು ಬರಬರಾಜು ಮಾಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ನೀರಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕುಡಿಯುವ ನೀರು ವ್ಯವಸ್ಥೆಯ ಬಗ್ಗೆ ಸಂಪೂರ್ಣವಾಗಿ ನಿಗಾ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.ಲಭ್ಯವಿರುವ ಅನುದಾನದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ, ಮುಂದಿನ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಿಗೆ ಸಮಸ್ಯೆಯಾಗದಂತೆ ನೀರು ಪೂರೈಸುವುದು ಅಧಿಕಾರಿಗಳ ಮುಖ್ಯ ಹೊಣೆಗಾರಿಕೆಯಾಗಿದೆ. ಹೆಚ್ಚು ಸಂಗ್ರಹ ಸಾಮರ್ಥ್ಯದ ಟ್ಯಾಂಕ್‌ಗಳಲ್ಲಿ ನೀರು ಶೇಖರಣೆ ಮಾಡಬೇಕಿದೆ. ನೀರಿನ ಸರಬರಾಜು ಮಾಡುವ ಸ್ಥಳಗಳಲ್ಲಿ ಯಾವುದೇ ಸೋರಿಕೆ ಆಗದಂತೆ ಎಚ್ಚರವಹಿಸಿ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಇದೇ ವೇಳೆ ಮಾತನಾಡಿದ ಶಾಸಕ ಎ.ಆರ್. ಕೃಷ್ಣಮೂರ್ತಿ, ಜೆಜೆಎಂ ಕಾಮಗಾರಿ ನಿರ್ವಹಿಸಿದ ಕೆಲವು ಕಡೆ ಪೈಪ್‌ಗಳು ಒಡೆದು ಹೋಗಿ ತೊಂದರೆಯಾಗಿದೆ. ನಿಗದಿತ ಆಳ ಮತ್ತು ನಿರ್ದಿಷ್ಟ ಪೈಪ್‌ಗಳ ಅಳವಡಿಕೆಯಲ್ಲಿ ಮಾರ್ಗಸೂಚಿ ಪ್ರಕಾರ ಕಾಮಗಾರಿ ನಡೆಯಬೇಕಿದೆ. ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಗುಂಬಳ್ಳಿಯಂತಹ ಪ್ರಕರಣಗಳು ಮರುಕಳಿಸದಂತೆ ನಿಗಾವಹಿಸಬೇಕು ಎಂದರು.
ಹಾಲಿನ ದರ ಹೆಚ್ಚಳ ಸಂಬಂಧ ಪ್ರಸ್ತಾಪಿಸಿದ ಸಚಿವರು, ಹಾಲು ದರ ಏರಿಕೆ ಮಾಡಿದ ಸಂಪೂರ್ಣ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ ಎಂದರು.
ಲೋಕಸಭಾ ಸದಸ್ಯ ಸುನೀಲ್ ಬೋಸ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಸ್. ಗಣೇಶ್ ಪ್ರಸಾದ್, ಡಾ. ಡಿ. ತಿಮ್ಮಯ್ಯ, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮೈಸೂರು ವಿಭಾಗದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಚ್.ವಿ. ಚಂದ್ರು, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಮಹದೇವಣ್ಣ, ಸಯ್ಯದ್ ಮುಸೈಯೀಬ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಎಸ್ಪಿ ಡಾ. ಬಿ.ಟಿ. ಕವಿತಾ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.