ಬ್ಯಾಡಗಿ: ಗ್ರಾಮೀಣ ಭಾಗದಲ್ಲಿ ಸಮಯಕ್ಕೆ ಸರಿಯಾಗಿ ಬಸ್‌ಗಳು ಸಂಚರಿಸುತ್ತಿಲ್ಲ ಎಂಬ ದೂರುಗಳು ಸಾಕಷ್ಟು ಕೇಳಿಬರುತ್ತಿವೆ. ಇದರಿಂದ ವಿದ್ಯಾರ್ಥಿಗಳು, ರೈತರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸು ವಂತಾಗಿದೆ. ಇನ್ನು ಮುಂದೆ ಗ್ರಾಮೀಣರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಬರಗಾಲವಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸಿ: ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದೆ. ಅಧಿಕಾರಿಗಳು ಕೇವಲ ಕಚೇರಿಗೆ ಸೀಮಿತವಾಗದೆ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕು. ಸಣ್ಣ ನೀರಾವರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮ ಲ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಕೆರೆ, ಕಟ್ಟೆಗಳ ನಿರ್ವಹಣೆಗೂ ಆದ್ಯತೆ ನೀಡಬೇಕು. ಜನರಿಗೆ ನೀರಿನ ಸಮಸ್ಯೆ ಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯದಿಂದ ಮುಂದಾಗುವ ಅನಾಹುತಗಳಿಗೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ವಿದ್ಯುತ್ ಸಮಸ್ಯೆ ಪರಿಹರಿಸಿ: ಗ್ರಾಮೀಣ ಭಾಗದಲ್ಲಿ ರೈತರಿಗೆ ನಿಯಮಾನುಸಾರ 7 ಗಂಟೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಸಭೆಯಲ್ಲಿ ಹೆಚ್ಚಾಗಿ ಕೇಳಿಬಂದವು. ಈ ಹಿನ್ನೆಲೆಯಲ್ಲಿ ಹೆಸ್ಕಾಂ ಎಇಇ ರಾಜು ಅರಳಿಕಟ್ಟಿ ಅವರನ್ನು ಪ್ರಶ್ನಿಸಿದ ಶಾಸಕರು, ರೈತರಿಗೆ ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು. ಯಾವ ಗ್ರಾಮದಲ್ಲಿ, ಯಾವ ರೈತರಿಗೆ ತೊಂದರೆಯಾಗುತ್ತಿದೆ ಎಂಬುದನ್ನು ಗುರುತಿಸಿ ತಕ್ಷಣ ಸಮಸ್ಯೆ ಬಗೆಹರಿಸಬೇಕು. ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ: ಪ್ರಜಾಸೇವೆ ಆಂದೋಲನದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 51 ಅರ್ಜಿಗಳು ಸಲ್ಲಿಕೆಯಾದವು. ಈ ಪೈಕಿ ಎರಡು ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು. ಉಳಿದ 49 ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ವರ್ಗಾಯಿಸಿ, ಆದ್ಯತೆಯ ಮೇರೆಗೆ ಪರಿಶೀಲಿಸಿ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.