ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆ
ಪ.ಜಾ, ಪ.ಪಂ ಉಪಹಂಚಿಕೆ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲಿಯೇ ದೊರಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ (ಎಸ್‌ಸಿಪಿ, ಟಿಎಸ್‌ಪಿ) ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ.ಜಾ, ಪ.ಪಂ ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕತೆಯಿರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶೀಘ್ರಗತಿಯಲ್ಲಿ ತಲುಪುವಂತಾಗಬೇಕು. ಯಾವುದೇ ಕಾರಣಕ್ಕೂ ಯೋಜನೆಯಡಿ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಯಿತು.