ಪರಿಸರ ಮತ್ತು ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆ ತಡೆಗೆ ಪರಿಸರ ದಿನಾಚರಣೆ

KannadaprabhaNewsNetwork |  
Published : Jun 06, 2026, 01:30 AM IST
5ಎಚ್ಎಸ್ಎನ್7 :  | Kannada Prabha

ಸಾರಾಂಶ

ಸ್ಟಿಕ್ ಬಳಕೆ, ವಾಯು ಮಾಲಿನ್ಯ, ಜಲಮಾಲಿನ್ಯ ಹಾಗೂ ಅತಿಯಾದ ಸಂಪನ್ಮೂಲ ಬಳಕೆಯಿಂದ ಪ್ರಕೃತಿಗೆ ಅಪಾರ ಹಾನಿಯಾಗುತ್ತಿದ್ದು, ಇದರ ಪರಿಣಾಮವಾಗಿ ಉಷ್ಣಾಂಶ ಏರಿಕೆ, ಅತಿವೃಷ್ಟಿ, ಬರಗಾಲ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. ವಿಶ್ವ ಯುದ್ಧದ ನಂತರ ವಿಶ್ವದಾದ್ಯಂತ ಕೈಗಾರಿಕಾ ಮತ್ತು ಆರ್ಥಿಕ ಕ್ರಾಂತಿಗಳು ನಡೆದವು. ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯ ಪ್ರದೇಶಗಳು ನಾಶವಾಗಿದ್ದು, ಪ್ರಕೃತಿಯ ಮೇಲಿನ ಒತ್ತಡ ಹೆಚ್ಚಾಗಿದೆ. ಈ ಅಪಾಯವನ್ನು ತಡೆಗಟ್ಟಲು ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಹಾಸನಾಂಬಾ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಾನಗರ ಪಾಲಿಕೆ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ್ ಸೇವಾದಳ, ವಿವಿಧ ಕೈಗಾರಿಕೆಗಳು ಹಾಗೂ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕೌಟುಂಬಿಕ ನ್ಯಾಯಾಲಯದ ಒಂದನೇ ಅಧಿಕ ಪ್ರಧಾನ ನ್ಯಾಯಾಧೀಶ ಪದ್ಮಪ್ರಸಾದ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಹಾಗೂ ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ವಿಶ್ವಸಂಸ್ಥೆಯು ೧೯೭೨ರಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ವಿಶ್ವ ಪರಿಸರ ದಿನವನ್ನು ಆಚರಿಸಲು ಆರಂಭಿಸಿತು. ಇಂದಿನ ದಿನಗಳಲ್ಲಿ ಪರಿಸರ ಮಾಲಿನ್ಯ, ಹವಾಮಾನ ಬದಲಾವಣೆ, ಜೈವಿಕ ವೈವಿಧ್ಯತೆಯ ನಾಶ ಹಾಗೂ ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆ ಜಾಗತಿಕ ಮಟ್ಟದಲ್ಲಿ ಗಂಭೀರ ಸವಾಲುಗಳಾಗಿ ಪರಿಣಮಿಸಿವೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಿ ನಡೆಯಬೇಕಾಗಿದೆ ಎಂದರು.

ಉತ್ತಮ ಪರಿಸರವು ಉತ್ತಮ ಆರೋಗ್ಯದ ಮೂಲಾಧಾರವಾಗಿದೆ. ಮನುಷ್ಯನ ಬದುಕು ಗಾಳಿ, ನೀರು, ಮಣ್ಣು ಮತ್ತು ಹಸಿರು ಸಂಪತ್ತಿನ ಮೇಲೆ ಅವಲಂಬಿತವಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ನಗರೀಕರಣ, ಕೈಗಾರಿಕೀಕರಣ ಮತ್ತು ಅರಣ್ಯ ನಾಶದ ಪರಿಣಾಮವಾಗಿ ಪರಿಸರದ ಸಮತೋಲನ ಹದಗೆಡುತ್ತಿದೆ. ಪ್ಲಾಸ್ಟಿಕ್ ಬಳಕೆ, ವಾಯು ಮಾಲಿನ್ಯ, ಜಲಮಾಲಿನ್ಯ ಹಾಗೂ ಅತಿಯಾದ ಸಂಪನ್ಮೂಲ ಬಳಕೆಯಿಂದ ಪ್ರಕೃತಿಗೆ ಅಪಾರ ಹಾನಿಯಾಗುತ್ತಿದ್ದು, ಇದರ ಪರಿಣಾಮವಾಗಿ ಉಷ್ಣಾಂಶ ಏರಿಕೆ, ಅತಿವೃಷ್ಟಿ, ಬರಗಾಲ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. ವಿಶ್ವ ಯುದ್ಧದ ನಂತರ ವಿಶ್ವದಾದ್ಯಂತ ಕೈಗಾರಿಕಾ ಮತ್ತು ಆರ್ಥಿಕ ಕ್ರಾಂತಿಗಳು ನಡೆದವು. ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯ ಪ್ರದೇಶಗಳು ನಾಶವಾಗಿದ್ದು, ಪ್ರಕೃತಿಯ ಮೇಲಿನ ಒತ್ತಡ ಹೆಚ್ಚಾಗಿದೆ. ಇಂದು ನಾವು ಉಸಿರಾಡುವ ಗಾಳಿ, ಕುಡಿಯುವ ನೀರು ಮತ್ತು ಕೃಷಿ ಮಾಡುವ ಮಣ್ಣು ಸಹ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಅಪಾಯವನ್ನು ತಡೆಗಟ್ಟಲು ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಪರಿಸರ ಸಂರಕ್ಷಣೆ ಮನೆಯ ಸ್ವಚ್ಛತೆಯಿಂದಲೇ ಆರಂಭವಾಗಬೇಕು ಎಂದು ಹೇಳಿದರು. ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಲ್ಲಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು. ಈ ವರ್ಷ ಜಿಲ್ಲೆಯಲ್ಲಿ ೭ರಿಂದ ೮ ಲಕ್ಷ ಮರದ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಗುರಿಯನ್ನು ಹೊಂದಲಾಗಿದೆ. ಜೂನ್‌ನಿಂದ ಆಗಸ್ಟ್ ತಿಂಗಳವರೆಗೆ ಜಿಲ್ಲೆಯಾದ್ಯಂತ ಸಸಿ ನೆಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಶಾಲೆಗಳು, ಕಾಲೇಜುಗಳು, ಸರ್ಕಾರಿ ಕಚೇರಿಗಳು, ಕೈಗಾರಿಕೆಗಳು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕಾದರೆ ಈಗಿನಿಂದಲೇ ಹಸಿರು ಸಂರಕ್ಷಣೆಯತ್ತ ಎಲ್ಲರೂ ಪಣ ತೊಡಬೇಕು ಎಂದು ಹೇಳಿದರು.ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಪರಿಸರ ಕಾಳಜಿ, ಹಸಿರು ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ವಿದ್ಯಾರ್ಥಿಗಳು ತಮ್ಮ ಕಲಾ ಪ್ರತಿಭೆಯ ಮೂಲಕ ಸಂದೇಶ ಸಾರಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಆರ್‌. ಭಾಸ್ಕರ್‌, ಹಿರಿಯ ಸಿವಿಲ್ ನ್ಯಾಯಾಧೀಶೆ ಜಿ.ಕೆ. ದಾಕ್ಷಾಯಿಣಿ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ್, ಡಿವೈಎಸ್ಪಿ ಪರಶುರಾಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಪರಿಸರ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಜಾವಗಲ್ ಪ್ರಸನ್ನ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಕೃತಿ ಉಳಿಸುವುದು ನಮ್ಮೆಲ್ಲರ ಹೊಣೆ
ಪರಿಸರ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಯ