ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ-ಸದಾನಂದಸ್ವಾಮಿ

KannadaprabhaNewsNetwork | Published : Jun 9, 2024 1:33 AM

ಸಾರಾಂಶ

ಪರಿಸರ ನಾಶದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.

ಹಾವೇರಿ: ಪರಿಸರ ನಾಶದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾವೇರಿ ಪ್ರಾದೇಶಿಕ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಭಾರತ ದೇಶದಲ್ಲಿ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಕಾರಣಗಳಿಗೆ ಅಂದಾಜು ೧೦ ಕೋಟಿ ಗಿಡ-ಮರಗಳನ್ನು ನಾಶಮಾಡಲಾಗಿದೆ. ಇದರಿಂದ ಬಿಸಿಲಿನ ತಾಪಮಾನ ಹೆಚ್ಚಾಗಿದೆ ಹಾಗೂ ಬಿಸಿಲಾಘಾತದಿಂದ ಸಾವುಗಳು ಸಂಭವಿಸುತ್ತಿವೆ. ಬಿಸಿಲಿನ ತಾಪಮಾನ ಕೆಡಿಮೆ ಮಾಡಲು ನಿಮ್ಮ ಬಿಡುವಿನ ಸಮಯದಲ್ಲಿ ಮನೆಯ ಆವರಣದಲ್ಲಿ ವಿವಿಧ ಮರಗಳ ಸಸಿಗಳನ್ನು ನೆಡಬೇಕು. ನೆಟ್ಟ ಸಸಿಗಳನ್ನು ತಾಯಿಯಂತೆ ಗೌರವಿಸಿ, ಮಕ್ಕಳಂತೆ ಸಂರಕ್ಷಿಸಿ ಹಾಗೂ ಬಂಧುಗಳಂತೆ ಆಧರಿಸಬೇಕು ಎಂದು ಹೇಳಿದರು.ಇಂದು ಅತೀಯಾದ ಪ್ಲಾಸ್ಟಿಕ್ ಬಳಕೆಯಿಂದ ಮನುಷ್ಯನ ಆರೋಗ್ಯ ಹಾಗೂ ಪರಿಸರದಲ್ಲಿ ಅನೇಕ ದುಷ್ಪರಿಣಾಮ ಉಂಟಾಗುತ್ತಿದೆ. ಬಿಸಿಯಾದ ಪದಾರ್ಥವನ್ನು ಪ್ಲಾಸ್ಟಿಕ್‌ನಲ್ಲಿ ಹಾಕಿದರೆ ಅದು ವಿಷವಾಗಿ ಪರಿವರ್ತನೆಯಾಗುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ಹಾಗಾಗಿ ಪ್ಲಾಸ್ಟಿಕ್ ಬಳಕೆ ಬಿಡಬೇಕು. ನೈಸರ್ಗಿಕ ಸಂಪನ್ಮೂಲಗಳು ಜಗತ್ತಿನ ಸಕಲ ಜೀವರಾಶಿಗಳಿಗೆ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ. ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಗಳಾದ ಬಾಲಮುಕುಂದ ರಮೇಶರಾವ ಮುತಾಲಿಕದೇಸಾಯಿ ಅವರು ಮಾತನಾಡಿ, ಪ್ರತಿ ತಾಲೂಕಿನಲ್ಲಿ ೧೦ ಸಾವಿರ ಸಸಿ ನೆಡುವ ಗುರಿ ಹಾಕಿಕೊಳ್ಳಲಾಗಿದ್ದು, ಈ ಗುರಿ ಸಾಧನೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಅವರು ಪರಿಸರ ಹಾಗೂ ಪರಿಸರ ಸಂರಕ್ಷಣೆ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿ, ಗಿಡ-ಮರಗಳನ್ನು ಬೆಳೆಸುವುದರೊಂದಿಗೆ ಜಲ ಮಾಲಿನ್ಯ ಹಾಗೂ ವಾಯುಮಾಲಿನ್ಯ ತಡೆಯುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಸಂಕಲ್ಪಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಯಾವುದೇ ಗೃಹದಲ್ಲಿ ಇಲ್ಲದ ಪಂಚಭೂತಗಳು ಈ ಭೂಮಿ ಮೇಲೆ ಇವೆ. ಈ ಪಂಚಭೂತಗಳು ಸಕಲ ಜೀವರಾಶಿಗಳ ಜೀವನಕ್ಕೆ ಸಹಕಾರಿಯಾಗಿದ್ದು, ಇದರಲ್ಲಿ ಒಂದು ಹಾಳಾದರೂ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತದೆ. ಪರಿಸರದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ರಸಗೊಬ್ಬರ ಬಳಕೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಜಲ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಜಾಗೃತೆವಹಿಸಬೇಕು. ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಿಸಿ ಕಸದ ಗಾಡಿಗಳಿಗೆ ಹಾಕಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ ಹಾಗೂ ಹಾಗೂ ಶಾಲಾ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ರಮೇಶ ಮಾತನಾಡಿ, ಪರಿಸರ ರಕ್ಷಣೆ ಕುರಿತು ಎಲ್ಲರೂ ಕಾಳಜಿ ವಹಿಸಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಜೋಡಿ ಬಸವೇಶ್ವರ ಕಲಾತಂಡದವರು ಪರಿಸರ ಜಾಗೃತಿ ಗೀತೆ ಹಾಗೂ ಕಿರು ನಾಟಕ ಪ್ರದರ್ಶನ ಮಾಡಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಡಾ.ಎಚ್.ಲಕ್ಷ್ಮೀಕಾಂತ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ ಉಪಸ್ಥಿತರಿದ್ದರು. ಸವಿತಾ ಬೆಳ್ಳಿಗಟ್ಟಿ ಸ್ವಾಗತಿಸಿದರು. ನಾಗರಾಜ ನಡುವಿನಮಠ ಕಾರ್ಯಕ್ರಮ ನಿರೂಪಿಸಿದರು.ಜಾಥಾ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾರ್ಯಕ್ರಮಕ್ಕೂ ಮೊದಲು ಆಯೋಜಿಸಲಾದನ ಪರಿಸರ ಜಾಗೃತಿ ಜಾಥಾಕ್ಕೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪರಿಸರ ಅಧಿಕಾರಿ ಡಾ.ಎಚ್. ಲಕ್ಷ್ಮೀಕಾಂತ ಅವರು ಚಾಲನೆ ನೀಡಿದರು. ಜಾಥಾದಲ್ಲಿ ವಿವಿಧ ಶಾಲಾ ಮಕ್ಕಳು ಪರಿಸರ ರಕ್ಷಣೆ ಘೋಷವಾಕ್ಯಗಳನ್ನು ಹೇಳುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದವರೆಗೆ ಜಾಥಾ ಜರುಗಿತು.

೮ಎಚ್‌ವಿಆರ್೧, ೧ಎ

Share this article