ಬಳ್ಳಾರಿ; ಪರಿಸರ ಸಂರಕ್ಷಣೆಗೆ ಮಾನವನ ಕೊಡುಗೆಗಳು ಗಣನೀಯವಾಗಿ ಕ್ಷೀಣಿಸುತ್ತಿದ್ದು, ಇದು ಮನುಕುಲಕ್ಕೆ ಸಂಕಷ್ಟ ತಂದೊಡ್ಡುತ್ತದೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ತಿಪ್ಪೇರುದ್ರಪ್ಪ ಅಭಿಪ್ರಾಯಪಟ್ಟರು.ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ ಯೋಜನೆಯ ಭಾಗವಾಗಿ ಆಯೋಜಿಸಿದ್ದ ‘ಯುವಮಂಥನ’ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್ ರುದ್ರೇಶ್ ಮಾತನಾಡಿ, ಪರಿಸರದಲ್ಲಿನ ಹಲವಾರು ಜೀವರಾಶಿಗಳ ಉಳಿವಿಗಾಗಿ ನೈಸರ್ಗಿಕ ಸಂಪನ್ಮೂಲಗಳನ್ನು ಸಾಧ್ಯವಾದಷ್ಟು ಕಡಿಮೆ ಬಳಸಬೇಕು. ಸುಸ್ಥಿರ ಬದುಕಿಗೆ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಾಣವಾಗಬೇಕು ಎಂದು ಹೇಳಿದರು.
ನೈಸರ್ಗಿಕ ತಾಪಮಾನ ನಿಯಂತ್ರಣ ಮಾಡಲು ಮರ-ಗಿಡಗಳನ್ನು ನೆಟ್ಟು ಪೋಷಿಸಬೇಕು. ಇಲ್ಲವಾದಲ್ಲಿ ಮುಂಬರುವ ಪೀಳಿಗೆಗೆ ಪರಿಸರ ಕಾಳಜಿಗೆ ನಾವು ನೀಡುವ ಕೊಡುಗೆ ಶೂನ್ಯವಾಗುತ್ತದೆ ಎಂದು ತಿಳಿಸಿದರು.ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ವಿಜಯಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿವಿಧ ವಿಭಾಗಗಳ 50 ವಿದ್ಯಾರ್ಥಿಗಳು ತಮ್ಮ ವಿಚಾರಧಾರೆ ಮಂಡಿಸಿದರು. ಸಂವಾದ ಗೋಷ್ಠಿಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಹನುಮೇಶ್ ವೈದ್ಯ, ಡಾ.ಕೆ.ಎಸ್. ಲೋಕೇಶ್, ಡಾ.ಅಂಶುಮಾಲಿ ತೀರ್ಪುಗಾರರಾಗಿ ಆಗಮಿಸಿದ್ದರು.