ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ: ನ್ಯಾಯಾಧೀಶ ಪುಟ್ಟರಾಜು

KannadaprabhaNewsNetwork | Published : Feb 22, 2024 1:49 AM

ಸಾರಾಂಶ

ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಮೂಲಕ ಅವರಿಗೆ ಸಮಾನ ಹಕ್ಕು ಹಾಗೂ ನ್ಯಾಯ ಒದಗಿಸುವುದು ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಉದ್ದೇಶವಾಗಿದೆ.

ಕನ್ನಡಪ್ರಭ ವಾರ್ತೆ ಹಾವೇರಿ

ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಲಾಗಿದೆ. ಸಮಾಜದಲ್ಲಿ ಮುಂದುವರಿದ ಜನಾಂಗದೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಮೂಲಕ ಅವರಿಗೆ ಸಮಾನ ಹಕ್ಕು ಹಾಗೂ ನ್ಯಾಯ ಒದಗಿಸುವುದು ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಉದ್ದೇಶವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಋತು ಚಕ್ರ ನೈರ್ಮಲ್ಯ ನಿರ್ವಹಣೆ ಮತ್ತು ಪೋಕ್ಸೋ ಕಾಯ್ದೆ ಕುರಿತು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಗಳ ವಾರ್ಡನ್ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅನ್ಯಾಯದ ವಿರುದ್ಧ ಧ್ವನಿ ಎತ್ತಲೂ ಜಾತಿ, ಧರ್ಮ, ವರ್ಣ ಎನ್ನದೆ ಎಲ್ಲರಿಗೂ ಅವಕಾಶವಿದೆ ಎಂದು ಹೇಳಿದರು.

ಪೋಕ್ಸೋ ಪ್ರಕರಣದಲ್ಲಿ ದಂಡ ಹಾಗೂ ಶಿಕ್ಷೆ ಕುರಿತು ಎಷ್ಟೇ ಅರಿವು ಮೂಡಿಸಿದರೂ ಜಿಲ್ಲೆಯಲ್ಲಿ ಪ್ರಕರಣಗಳು ಕಡಿಮೆಯಾಗಿಲ್ಲ. ಹಾಗಾಗಿ ಯಾವ ರೀತಿ ತುಳುವಳಿಕೆ ನೀಡಬೇಕು ಎಂದು ತಿಳಿಯದಾಗಿದೆ. ೧೬ರಿಂದ ೨೦ ವಯೋಮಾನದವರು ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಒಳ್ಳೆಯದು ಹಾಗೂ ಕೆಟ್ಟದರ ಬಗ್ಗೆ ಅರಿವು ಹೊಂದಬೇಕು. ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಇತರರಿಗೂ ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿದ್ದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ ಕೆ.ಎನ್. ಮಾತನಾಡಿ, ಮಕ್ಕಳಿಗೆ ಒಳ್ಳೆಯ ಸ್ಪರ್ಶ ಹಾಗೂ ಕೆಟ್ಟ ಸ್ಪರ್ಶಗಳ ಬಗ್ಗೆ ಅರಿವು ಮೂಡಿಸುವುದರಿಂದ ಪೋಕ್ಸೋ ಪ್ರಕರಣಗಳನ್ನು ಕಡಿಮೆ ಮಾಡಬಹುದು. ಪಾಲಕರು ಹಾಗೂ ವಿದ್ಯಾರ್ಥಿ ನಿಲಯಗಳ ವಾರ್ಡನ್‌ಗಳು ಮಕ್ಕಳ ಚಲನವಲನ ಗಮನಿಸಬೇಕು. ನಿಮ್ಮ ಅಕ್ಕಪಕ್ಕದಲ್ಲಿ ಬಾಲ್ಯ ವಿವಾಹ ಪ್ರಕರಣ ನಡೆಯುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಬಾಲ್ಯವಿವಾಹ ತಡೆಗೆ ಕೈಜೋಡಿಸಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ವಿದ್ಯಾರ್ಥಿನಿಯರು ಆರೋಗ್ಯದ ಹಿತದೃಷ್ಟಿಯಿಂದ ಋತುಚಕ್ರ ಸಮಯದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ೧೬ ರಿಂದ ೨೦ ವರ್ಷದ ಮಕ್ಕಳ ಮನಸ್ಸು ಹುಚ್ಚು ಕುದುರೆಯಂತೆ, ಈ ಅವಧಿಯಲ್ಲಿ ಮಕ್ಕಳು ತಮ್ಮ ಮನಸ್ಸಿನ ಹತೋಟಿ ಇಟ್ಟುಕೊಳ್ಳಬೇಕು ಹಾಗೂ ಸರಿ-ತಪ್ಪುಗಳ ಯೋಚನೆ ಮಾಡಬೇಕು ಎಂದು ಸಲಹೆ ನೀಡಿದರು.

ಸ್ತ್ರೀ ರೋಗ ತಜ್ಞೆ ಡಾ. ಅಕ್ಷತಾ ಋತುಚಕ್ರ ನೈರ್ಮಲ್ಯ ನಿರ್ವಹಣೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲೆ ರೇಹಾನಾ ಚನ್ನಪಟ್ಟಣ ಪೋಕ್ಸೋ ಕಾಯ್ದೆ-೨೦೧೨ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್. ಮಜೀದ್ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ, ಡಾ. ಪರಸಪ್ಪ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಸ್ವಾಗತಿಸಿದರು. ಮಂಗಳಾ ಅಳಗುಂಡಗಿ ಕಾರ್ಯಕ್ರಮ ನಿರೂಪಿಸಿದರು. ಕೃಷ್ಣ ಹುರಳಿಕುಪ್ಪಿ ವಂದಿಸಿದರು.

Share this article