ಸಂಡೂರು: ಭವ್ಯ ಪರಂಪರೆ, ಸರ್ವ ಧರ್ಮ ಸಮನ್ವಯತೆಯನ್ನು ಹೊಂದಿರುವ ದೇಶದಲ್ಲಿ ಸರ್ವರಿಗೂ ಸಮಾನ ಅವಕಾಶವನ್ನು ಸಂವಿಧಾನ ಕಲ್ಪಿಸಿದೆ ಎಂದು ತಹಸೀಲ್ದಾರ್ ಜಿ. ಅನಿಲ್‌ಕುಮಾರ್ ಅಭಿಪ್ರಾಯಪಟ್ಟರು.
ಪಟ್ಟಣದ ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಸಂವಿಧಾನ ಸವೋಚ್ಛ ಕಾನೂನಾಗಿದ್ದು. ಅದನ್ನು ಎಲ್ಲರೂ ಪಾಲಿಸಬೇಕಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಬೇಕು. ತಾಲೂಕಿನಲ್ಲಿ ಕ್ಲಿನಿಕ್ ಆನ್ ವೀಲ್ ಯೋಜನೆಯ ಮೂಲಕ ಮನೆಮನೆಗೆ ಉಚಿತ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತಿದೆ. ಮೆಟ್ರಿಕಿ ಹಾಗೂ ಚೋರುನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ₹೩೦ ಕೋಟಿ ವೆಚ್ಚದಲ್ಲಿ ತಾಲೂಕು ಆಡಳಿತ ಸೌಧವನ್ನು ನಿರ್ಮಿಸಲಾಗುತ್ತಿದೆ. ದೇಶವನ್ನು ಪ್ರಗತಿಪಥದಲ್ಲಿ ಮುನ್ನಡೆಸಲು ಸರ್ವರೂ ಶ್ರಮಿಸೋಣ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಈ. ತುಕಾರಾಂ ಮಾತನಾಡಿ, ಸ್ವಾತಂತ್ರ್ಯಾ ನಂತರ ಪಂಚವಾರ್ಷಿಕ ಯೋಜನೆ, ೨೦ ಅಂಶಗಳ ಕಾರ್ಯಕ್ರಮ, ಆಹಾರ ಭದ್ರತೆ ಮುಂತಾದ ಕಾರ್ಯಕ್ರಮಗಳ ಮೂಲಕ ದೇಶದ ಸರ್ವತೋಮುಖ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ.ಯುಪಿಎ ಆಡಳಿತಾವಧಿಯಲ್ಲಿಯೇ ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಂದಾಲ್, ಥರ್ಮಲ್ ಪವರ್ ಪ್ಲಾಂಟ್ ಸ್ಥಾಪನೆಯಾದವು ಎಂದರು.
ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಎಲ್ಲ ೫ ಭರವಸೆಗಳನ್ನು ಈಡೇರಿಸಿದೆ. ಸಂಡೂರಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಿ, ಉದ್ಯೋಗ ಒದಗಿಸಲು ಮೆಷಿನ್ ಆ್ಯಂಡ್ ಟೂಲ್ಸ್ ತರಬೇತಿ ಕೇಂದ್ರವನ್ನು ಆರಂಭಿಸಲಾಗುವುದು. ೭೫ನೇ ವರ್ಷದ ಗಣರಾಜ್ಯೋತ್ಸವದ ಸ್ಮರಣೆಗಾಗಿ ಛತ್ರಪತಿ ಶಿವಾಜಿ ವಿದ್ಯಾಮಂದಿರದ ಮೈದಾನವನ್ನು ₹೨ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ, ಎಂ.ವೈ. ಘೋರ್ಪಡೆ ಪರೇಡ್ ಮೈದಾನ ಎಂದು ನಾಮಕರಣ ಮಾಡುವ ಕುರಿತು ಬಹಿರ್ಜಿ ಘೋರ್ಪಡೆಯವರೊಂದಿಗೆ ಚರ್ಚಿಸಲಾಗುವುದು ಎಂದರು.ಪೊಲೀಸ್, ಗೃಹರಕ್ಷಕ ದಳ, ಎನ್‌ಸಿಸಿ, ಸ್ಕೌಟ್ ಆ್ಯಂಡ್ ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಡೆಸಿಕೊಟ್ಟ ಪಥಸಂಚಲನ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಆಕರ್ಷಕವಾಗಿದ್ದವು. ರೈತ ಸಂಘದಿಂದ ಉತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಕಾಯಕ ಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಬಹುಮಾನ ನೀಡಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಬಸವರಾಜ ಕಾರ್ಯಕ್ರಮವನ್ನು ನಿರೂಪಿಸಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಕಾಧಿಕಾರಿ ಎಚ್. ಷಡಾಕ್ಷರಯ್ಯ, ಸರ್ಕಲ್ ಇನ್‌ಸ್ಪೆಕ್ಟರ್ ಬಿ. ಮಹೇಶ್‌ಗೌಡ, ಪುರಸಭೆ ಮುಖ್ಯಾಧಿಕಾರಿ ಕೆ. ಜಯಣ್ಣ, ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ರೈತ, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಮುಖಂಡರು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.