ಗದಗ: ಜೀತ ಪದ್ಧತಿಯು ನಿರ್ಮೂಲನೆಯು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜೀತ ಪದ್ಧತಿಗೆ ಅನಕ್ಷರತೆ, ಬಡತನ, ಅಸಹಾಯಕತೆ ಮುಖ್ಯ ಕಾರಣಗಳಾಗಿವೆ. ಎಲ್ಲಿ ಅಸಮಾನತೆ ಬರುತ್ತೋ ಅಲ್ಲಿ ಜೀತ ಪದ್ಧತಿ ಆರಂಭವಾಗುತ್ತದೆ. ಮಕ್ಕಳಿಗೆ ಶಿಕ್ಷಣ ಒದಗಿಸುವುದು ಇಂದಿನ ಅಗತ್ಯವಾಗಿದೆ. ಜೀತ ಪದ್ಧತಿ ನಿರ್ಮೂಲನೆ ಕುರಿತು ಸಾರ್ವಜನಿಕರಲ್ಲಿ ವ್ಯಾಪಕವಾಗಿ ತಿಳಿವಳಿಕೆ ನೀಡುವುದು ಅವಶ್ಯಕವಾಗಿದೆ ಎಂದರು.ವಕೀಲ ಗುರುರಾಜ ಗೌರಿ ಮಾತನಾಡಿ, ಜೀತ ಪದ್ಧತಿ ನಿರ್ಮೂಲನಾ ಕಾಯ್ದೆ 1976ರಡಿ ಇದನ್ನು ನಿಷೇಧಿಸಲಾಗಿದೆ. ಜೀತ ವಿಮುಕ್ತರಿಗೆ ಸರ್ಕಾರವು ಪುನರ್ವಸತಿ ಮತ್ತು ಮೂಲ ಸೌಲಭ್ಯಗಳನ್ನು ಒದಗಿಸುತ್ತದೆ. ಜೀತ ಪದ್ಧತಿಯನ್ನು ಗುರುತಿಸಿ ಸಂಬಂಧಿಸಿದವರ ಗಮನಕ್ಕೆ ತಂದು ಕಾನೂನಿನ ಪ್ರಕಾರ ಶಿಕ್ಷೆ ಕೊಡುವುದಕ್ಕೂ ಮುಂಚೆ ಅಲ್ಲಿ ಆಗುವ ಅನಾಹುತಗಳ ಬಗ್ಗೆ ತಿಳಿವಳಿಕೆಯನ್ನು ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಅವಶ್ಯಕತೆಯಿದೆ. ಜೀತದಾಳು ಇಟ್ಟುಕೊಂಡವರಿಗೆ ಕಾನೂನಿನಲ್ಲಿ ಶಿಕ್ಷೆಯಿದೆ. ಜೀತ ಪದ್ಧತಿ ನಿರ್ಮೂಲನೆಗೆ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವ ಅಗತ್ಯವಾಗಿದೆ ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.