ಬಳ್ಳಾರಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ

KannadaprabhaNewsNetwork | Published : Dec 17, 2023 1:45 AM

ಸಾರಾಂಶ

ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು. ಹಳೇ ನ್ಯಾಯಾಲಯದಲ್ಲಿ ಸರ್ಕಾರಿ ಕಾನೂನು ಕಾಲೇಜನ್ನು ಪ್ರಾರಂಭಿಸಬೇಕು.

ಬಳ್ಳಾರಿ: ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು. ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡಲೇಬೇಕು ಹಾಗೂ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ಸೌಕರ್ಯ ಎಂದು ಇಲ್ಲಿನ ಗಾಂಧಿಭವನದಲ್ಲಿ ಶನಿವಾರ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ(ಎಐಡಿಎಸ್‌ಒ) 10ನೇ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನದಲ್ಲಿ ಆಗ್ರಹಿಸಿದೆ.

ಸಮ್ಮೇಳನದ ಬಹಿರಂಗ ಅಧಿವೇಶನ ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ ಬಿಳೂರು, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(2020) ತೆಗೆದು ಹಾಕಲು ರಾಜ್ಯಾದ್ಯಂತ ವಿದ್ಯಾರ್ಥಿಗಳ ಬೃಹತ್ ಹೋರಾಟವೇ ಕಾರಣ. ರಾಜ್ಯ ಶಿಕ್ಷಣ ನೀತಿಯಲ್ಲಿ ಸರ್ಕಾರಿ ಶಾಲಾ- ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು. ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸಲು ವಿದ್ಯಾರ್ಥಿಗಳ ಹಣದ ಮೇಲೆ ಅವಲಂಬಿತ ಆಗಬಾರದು. ಕಡಿಮೆ ದಾಖಲಾತಿ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವುದು ಹಾಗೂ ಮುಚ್ಚುವುದನ್ನು ನಿಲ್ಲಿಸಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಕಾರ್ಪೊರೇಟ್ ಕಂಪನಿಗಳ ಬಳಿ ಧನಸಹಾಯ ಪಡೆಯುವ ಬದಲು, ಜನಗಳಿಂದ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ ಸರ್ಕಾರವೇ ನೀಡಬೇಕು. ವಿದೇಶಿ ನೇರ ಬಂಡವಾಳ ಹೂಡಿಕೆ ಹೆಸರಿನಲ್ಲಿ ವಿದೇಶಿ ವಿವಿಗಳನ್ನು ತೆರೆಯಲು ಅವಕಾಶ ಕೊಡಬಾರದು. ವಿದ್ಯಾರ್ಥಿಗಳಿಗೆ ಕೌಶಲ್ಯ ಆಧರಿತ ಶಿಕ್ಷಣದ ಹೆಸರಿನಲ್ಲಿ ಮೌಲ್ಯಗಳನ್ನು ಕಡೆಗಣಿಸಬಾರದು. ಈ ಅಂಶಗಳನ್ನು ಗಮನಿಸಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಅಧ್ಯಕ್ಷ ರವಿಕಿರಣ ಜೆ.ಪಿ. ಅವರು, ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು. ಹಳೇ ನ್ಯಾಯಾಲಯದಲ್ಲಿ ಸರ್ಕಾರಿ ಕಾನೂನು ಕಾಲೇಜನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರಲ್ಲದೆ, ವಿದ್ಯಾರ್ಥಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಜ್ಞೆಯನ್ನು ಮೂಡಿಸಿಕೊಳ್ಳಬೇಕು. ಜತೆಗೆ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹೋರಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ಎಐಡಿಎಸ್‌ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಶಿಲ್ಪಾ ಅವರು ಪ್ರತಿನಿಧಿ ಅಧಿವೇಶನ ನಡೆಸಿಕೊಟ್ಟರು. ಸಮ್ಮೇಳನದಲ್ಲಿ ಎಐಡಿಎಸ್‌ಒ ನೂತನ ಬಳ್ಳಾರಿ ಜಿಲ್ಲಾ ಸಮಿತಿ ಚುನಾಯಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಕೆ. ಈರಣ್ಣ, ಉಪಾಧ್ಯಕ್ಷರಾಗಿ ಎಂ.ಶಾಂತಿ, ಉಮಾ, ಪ್ರಮೋದ್, ಕಾರ್ಯದರ್ಶಿಯಾಗಿ ಕಂಬಳಿ ಮಂಜುನಾಥ, ಖಜಾಂಚಿಯಾಗಿ ಅನುಪಮಾ, ಕಚೇರಿ ಕಾರ್ಯದರ್ಶಿಯಾಗಿ ನಿಹಾರಿಕ ಆರ್. ಹಾಗೂ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಸತೀಶ್, ಇಂದ್ರ, ರವಿಕುಮಾರ್, ನಾಗಲಿಂಗ, ಉಪೇಂದ್ರ, ಲಕ್ಷ್ಮೀ, ವಿಶಾಲ, ತನುಜಾ, ಸಾಯಿಬಮ್ಮ, ಜನಾರ್ದನ, ಸಮೀರ್, ಕಿರಣ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಒಟ್ಟು 149 ಜನರನ್ನು ನೇಮಿಸಲಾಯಿತು. ಸಮ್ಮೇಳನ ಮುನ್ನ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿನಿಧಿಗಳ ಅಧಿವೇಶನದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share this article