ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಬೇರ್ಪಡಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ನೀಡಬೇಕೆಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ,ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯೂ ರಾಜ್ಯದಲ್ಲಿ ಎರಡನೆಯ ಬೃಹತ್ ಪಾಲಿಕೆಯಾಗಿದೆ.ಈ ಪ್ರದೇಶವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಹುಬ್ಬಳ್ಳಿ ಮತ್ತು ಧಾರವಾಡ ಸಮೀಪದ ಅನೇಕ ಹಳ್ಳಿಗಳು ಪಾಲಿಕೆಗೆ ಸಮೀಪವಾಗುತ್ತಿವೆ.ಜನಸಂಖ್ಯೆಯು ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಕೈಗಾರಿಕೆ ವಸತಿ ಹಾಗೂ ಶಿಕ್ಷಣದ ಎಲ್ಲ ಕ್ಷೇತ್ರಗಳು ಬೃಹದಾಕಾರವಾಗಿ ಬೆಳೆಯುತ್ತಿವೆ.ಸಾರ್ವಜನಿಕರ ಬೇಡಿಕೆಯೂ ಧಾರವಾಡಕ್ಕೆ ಪ್ರತ್ಯೇಕವಾಗಿ ಮಹಾನಗರ ಪಾಲಿಕೆ ಆಗಬೇಕೆಂಬುದಾಗಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಹೆಚ್ಚಾಗಿ ನಡೆಯುತ್ತವೆ.ಜತೆಗೆ ಸಾರ್ವಜನಿಕ ಸಮಸ್ಯೆಗಳು ಕೂಡ ಶೀಘ್ರವಾಗಿ ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಬೇಕೆಂದು ಈಗಾಗಲೇ ಹಲವಾರು ಸಂಘಟನೆಗಳು ಪ್ರತಿಭಟನೆ ನಡೆಸಿರುವುದುಂಟು. ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಧಾರವಾಡದ ಸರ್ವತೋಮುಖ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಸ್ಥಾಪಿಸಬೇಕೆಂದು ಒತ್ತಾಯಿಸಿದ್ದಾರೆ.