ತ್ಯಾಜ್ಯ ನಿರ್ವಹಣೆಗೆ 4 ದಿಕ್ಕಿನಲ್ಲೂ ಘಟಕ ಸ್ಥಾಪನೆ: ಪಾಲಿಕೆ ಮಾಹಿತಿ

KannadaprabhaNewsNetwork | Published : Mar 21, 2024 1:04 AM

ಸಾರಾಂಶ

ಘನತ್ಯಾಜ್ಯ ಸಮರ್ಪಕ ವಿಲೇವಾರಿ ಹಾಗೂ ನಿರ್ವಹಣೆಯ ಸಾಮರ್ಥ್ಯ ವೃದ್ಧಿಸಲು ಮುಂದಿನ ದಿನಗಳಲ್ಲಿ ನಗರದ ನಾಲ್ಕು ದಿಕ್ಕಿನಲ್ಲಿ ಬೃಹತ್ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಘನತ್ಯಾಜ್ಯ ಸಮರ್ಪಕ ವಿಲೇವಾರಿ ಹಾಗೂ ನಿರ್ವಹಣೆಯ ಸಾಮರ್ಥ್ಯ ವೃದ್ಧಿಸಲು ಮುಂದಿನ ದಿನಗಳಲ್ಲಿ ನಗರದ ನಾಲ್ಕು ದಿಕ್ಕಿನಲ್ಲಿ ಬೃಹತ್ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.

ಈ ವೇಳೆ ಅರ್ಜಿದಾರರ ಪರ ವಕೀಲರು, ನಗರದಲ್ಲಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡಿ ಪರಿಸರ ಹಾಳು ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣೆ ಕಾರ್ಯವು ಅಸಮರ್ಪಕ ಹಾಗೂ ಅವೈಜ್ಞಾನಿಕವಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ಪರ ವಕೀಲರು, ತ್ಯಾಜ್ಯ ಹಾಗೂ ವಿಲೇವಾರಿ ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ನಗರದ ನಾಲ್ಕು ದಿಕ್ಕಿನಲ್ಲಿ ಸಂಸ್ಕರಣಾ ಘಟಕ ಸ್ಥಾಪನೆ ಮಾಡಲಾಗುವುದು. ಘಟಕ ಸ್ಥಾಪನೆಗೆ ನೂರಾರು ಎಕರೆ ಜಮೀನಿನ ಅವಶ್ಯಕತೆ ಇದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಬಿಬಿಎಂಪಿ ಪರ ವಕೀಲರು, ನಗರದಲ್ಲಿ ಬೃಹತ್ ಸಂಸ್ಕರಣಾ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ನೀತಿ ರೂಪಿಸಿ ಸಂಪುಟದ ಮುಂದೆ ಸಲ್ಲಿಸಲಾಗಿದೆ. ಸರ್ಕಾರ ಈ ಬಗ್ಗೆ ಸಮ್ಮತಿ ಸೂಚಿಸುವ ಭರವಸೆ ಹೊಂದಲಾಗಿದೆ ಎಂದು ತಿಳಿಸಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಹಲವು ವರ್ಷಗಳಿಂದ ಈ ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ನಗರದಲ್ಲಿ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಂಡು ಮಾಹಿತಿ ನೀಡಬೇಕು ಎಂದು ಸರ್ಕಾರ ಹಾಗೂ ಬಿಬಿಎಂಪಿ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಮುಂದೂಡಿತು.

Share this article