ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಲೆಶಂಕರದಲ್ಲಿ ಮೇ ಮಾಹೆಯಲ್ಲಿ ಆಯೋಜಿಸಲಾಗುವ ಕಾರ್ಯಕ್ರಮದ ಕುರಿತು ಚರ್ಚಿಸಲು ಜಿಲ್ಲಾಡಳಿತ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆಶಂಕರಕ್ಕೆ ತಾವು ಖುದ್ದು ಭೇಟಿ ನೀಡಿ ಅಲ್ಲಿನ ಕುಡಿಯುವ ನೀರಿನ ಸಮಸ್ಯೆ, ಬುಡಕಟ್ಟು ಜನಾಂಗದ ಕುಂದುಕೊರತೆ ಸೇರಿದಂತೆ ಅಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಮೇ ಮಾಹೆಯಲ್ಲಿ ಒಂದು ಕಾರ್ಯಕ್ರಮ ಮಾಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದ ಅವರು, ಪಶ್ಚಿಮ ಘಟ್ಟ ಪ್ರದೇಶಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತಿಳಿಸಲು ಸ್ಥಳೀಯರು ಬೆಂಗಳೂರಿಗೆ ಬರುವುದು ಕಷ್ಟವಾಗುತ್ತದೆ. ಆದ್ದರಿಂದ ಕುಂದು ಕೊರತೆಯನ್ನು ಆಲಿಸಲು ಸ್ಥಳೀಯವಾಗಿ ಕಚೇರಿಯನ್ನು ಸ್ಥಾಪಿಸಲಾಗುವುದು ಎಂದರು.
ದೇಶದ ಪಶ್ಚಿಮ ಘಟ್ಟಗಳನ್ನು ಹೊಂದಿರುವ 6 ರಾಜ್ಯಗಳ ಪೈಕಿ ನಮ್ಮ ರಾಜ್ಯವೇ ಪಶ್ಚಿಮ ಘಟ್ಟಗಳ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿದೆ ಹಾಗೂ ಸಂರಕ್ಷಣೆಗಾಗಿ ಸಮಿತಿ ರಚಿಸಿದ ಮೊದಲ ರಾಜ್ಯವಾಗಿದ್ದು, 2008ರಲ್ಲಿ ಈ ಸಮಿತಿ ರಚನೆಯಾಗಿದೆ. ವನ್ಯಜೀವಿ ಅಭಯಾರಣ್ಯ, ರಾಷ್ಟ್ರೀಯ ಉದ್ಯಾನವನಗಳನ್ನು ಘೋಷಿಸುವ ಮೂಲಕ ಪಶ್ಚಿಮ ಘಟ್ಟಗಳನ್ನು ಸಂರಕ್ಷಿಸಲಾಗುತ್ತಿದೆ ಎಂದು ಹೇಳಿದರು.ತಾವು ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತು ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದ್ದು, ಇದರಲ್ಲಿ ಮುಖ್ಯವಾಗಿ ಪ್ಲಾಸ್ಟಿಕ್ ನಿಷೇಧಕ್ಕಾಗಿ ಗ್ರೀನ್ ಚೆಕ್ ಪೋಸ್ಟ್‌ಗಳ ಸ್ಥಾಪನೆ, ಪ್ಲಾಸ್ಟಿಕ್ ಬಳಕೆ ಮಿತಗೊಳಿಸುವ ನಿಯಮಗಳು ಮತ್ತು ಪಶ್ಚಿಮ ಘಟ್ಟ ಮ್ಯೂಸಿಯಂ ಇನ್ಸ್ಟಿಟ್ಯೂಟ್ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ.
ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತು ಅರಿವು ಮೂಡಿಸಲು ಪೋಸ್ಟ್ ಕಾರ್ಡ್ ಬಿಡುಗಡೆಗೊಳಿಸಲಾಗಿದ್ದು, ಇತ್ತೀಚಿಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಹೋಂ ಸ್ಟೇ, ರೆಸಾರ್ಟ್ ಸ್ಥಾಪನೆ ಕುರಿತು ಡೇಟಾ ಬೇಸ್ ಸಂಗ್ರಹಿಸಿ, ಅಲ್ಲಿ ಪ್ಲಾಸ್ಟಿಕ್ ನಿಷೇಧ ಸೇರಿದಂತೆ ಎಸ್ ಓ ಪಿ ಯನ್ನು ತರಲಾಗುವುದು ಎಂದರು.
ಜೀವವೈವಿಧ್ಯ ಉಳಿವಿಗೆ ಸೂಕ್ಷ್ಮ ಪ್ರದೇಶಗಳನ್ನು ಘೋಷಿಸುವ ಉದ್ದೇಶ ಹೊಂದಿದ್ದು, ಸುಸ್ಥಿರ ಪ್ರವಾಸೋದ್ಯಮ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಪ್ರವಾಸೋದ್ಯಮ, ಗಣಿ ಮತ್ತು ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಪ್ರಸನ್ನ ಕೃಷ್ಣ ಪಟಗಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.