ಬಳ್ಳಾರಿ: ವಿಶ್ವವಿದ್ಯಾಲಯಗಳು ಪಠ್ಯ ಚಟುವಟಿಕೆಗೆ ಮಾತ್ರ ಸೀಮಿತವಾಗಬಾರದು ಎಂಬ ಉದ್ದೇಶದಿಂದ ನಂದಿಹಳ್ಳಿಯ ಸ್ನಾತಕೋತ್ತರ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಅಕಾಡೆಮಿ ಆರಂಭಿಸಲಾಗುವುದು ಎಂದು ಕುಲಪತಿ ಪ್ರೊ. ಎಂ.ಮುನಿರಾಜು ತಿಳಿಸಿದರು.
ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಯೋಗ, ವ್ಯಾಯಾಮ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆ ಸಹಕಾರಿಯಾಗಿವೆ. ಪ್ರತಿಯೊಬ್ಬ ವಿದ್ಯಾರ್ಥಿ ವಿವಿಯಲ್ಲಿ ಗಿಡ ನೆಟ್ಟು ಪೋಷಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಜ್ಯ ಎನ್.ಎಸ್.ಎಸ್. ಹಾಗೂ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಮಾತನಾಡಿ, ಯುವಕರು ಭಾರತದ ಪ್ರೇರಕ ಶಕ್ತಿಯಾಗಿದ್ದಾರೆ. ಸಮಾಜಕ್ಕೆ ಜವಾಬ್ದಾರಿಯುತ ನಾಗರಿಕರನ್ನು ಕೊಡುಗೆ ನೀಡುವುದು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಗುರಿಯಾಗಿದೆ. ದೈಹಿಕ, ಮಾನಸಿಕ ಸದೃಢತೆ ವಿದ್ಯಾರ್ಥಿಗಳು ಕಲಿತುಕೊಂಡಲ್ಲಿ ಸಾಮಾಜಿಕ ಸದೃಢತೆ ತಾನಾಗಿಯೇ ನಿರ್ಮಾಣವಾಗುತ್ತದೆ. ಇದನ್ನು ಎನ್‌ಎಸ್‌ಎಸ್ ಶಿಬಿರಗಳು ಕಲಿಸಿಕೊಡುತ್ತವೆ ಎಂದರು.ಕುಲಸಚಿವ ಎಸ್.ಎನ್. ರುದ್ರೇಶ್ ಮಾತನಾಡಿ, ರಾಷ್ಟ್ರೀಯ ಸೇವಾಯೋಜನೆಯ ವಿದ್ಯಾರ್ಥಿಗಳ ಶ್ರಮದಾನ ಕಾರ್ಯದಿಂದ ಇಂದು ವಿಶ್ವವಿದ್ಯಾಲಯ ಹಸಿರಿನಿಂದ ಕಂಗೊಳಿಸುತ್ತಿದೆ. ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಯೋಚನೆಗಳು ಮೂಡುವಂತೆ ಉತ್ತೇಜಿಸುತ್ತದೆ. ನಮ್ಮಲ್ಲಿರುವ ಹಲವಾರು ದೇಸಿ ಕಲೆಗಳನ್ನು ವಿದ್ಯಾರ್ಥಿಗಳಿಗೆ ಇಂದು ಪರಿಚಯಿಸಬೇಕಾಗಿದೆ. ಅದಕ್ಕಾಗಿಯೇ 5 ದಿನಗಳು ತೊಗಲುಗೊಂಬೆ ಆಟ, ಕೈಗೊಂಬೆ ಆಟ, ಜಾನಪದ ನಾಟಕ, ತಬಲಾ ಜುಗಲ್‌ಬಂದಿ ಕಾರ್ಯಕ್ರಮಗಳನ್ನು ಏರ್ಪಡಿಸಿದೆ ಎಂದು ತಿಳಿಸಿದರು.
ಶಿಬಿರದಲ್ಲಿ ರಾಜ್ಯದ 21 ವಿಶ್ವವಿದ್ಯಾಲಯಗಳಿಂದ ಆಗಮಿಸಿರುವ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತಾದ ಜಪಾನ್ ಮಾದರಿಯ ಗೊಂಬೆ ನಾಟಕ ಜರುಗಿತು.
ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಜಾನಪದ ಕಲಾ ತಂಡಗಳ ಮೆರವಣಿಗೆ ನಡೆಯಿತು. ಕುಲಪತಿ ಹಾಗೂ ಕುಲಸಚಿವರು ಸೇರಿದಂತೆ ವಿವಿಯ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.