ಹುಬ್ಬಳ್ಳಿ:
ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ನೇತೃತ್ವದಲ್ಲಿ ನಡೆದ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರ ಮಧ್ಯೆ ಕೆಲಕಾಲ ವಾಗ್ವಾದವೂ ನಡೆಯಿತು. ಅನಧಿಕೃತವಾಗಿ ನಿರ್ಮಿಸಿದ ಅಂಗಡಿಗಳನ್ನು ತೆರವು ಮಾಡಿಕೊಳ್ಳುವಂತೆ ಪಾಲಿಕೆಯಿಂದ ನೋಟಿಸ್ ಸಹ ನೀಡಲಾಗಿತ್ತು. ಆದರೆ, ವ್ಯಾಪಾರಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಪಾಲಿಕೆ ಪರ ತೀರ್ಪು ನೀಡಿದೆ. ನ್ಯಾಯಾಲಯದ ಆದೇಶದಂತೆ ತೆರವು ಕಾರ್ಯಾಚರಣೆ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ತಿಳಿಸಿದರು.
ಹಳೇ ಹುಬ್ಬಳ್ಳಿ ಆಸ್ಪತ್ರೆ ಪುನರ್ ಅಭಿವೃದ್ಧಿಪಡಿಸಲಾಗುತ್ತಿದೆ. ಇದರ ಸುತ್ತಲೂ ಅನಧಿಕೃತವಾಗಿ ಹಲವು ಅಂಗಡಿಗಳನ್ನು ನಿರ್ಮಿಸಲಾಗಿತ್ತು. ಇದರಿಂದಾಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಗೂ ವಾಹನಗಳಿಗೆ ತೀವ್ರ ಸಮಸ್ಯೆಯಾಗುತ್ತಿತ್ತು. ಈ ಹಿನ್ನೆಲೆ ತೆರವು ಕಾರ್ಯ ಮಾಡಲಾಗಿದೆ ಎಂದರು. ಈ ವೇಳೆ ಪಾಲಿಕೆ ಅಧಿಕಾರಿಗಳು, ಪೊಲೀಸರು ಇದ್ದರು.ನಾಲಾ ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ:ಮಳೆಗಾಲ ಆರಂಭವಾದ ಹಿನ್ನೆಲೆ ಮುನ್ನಚ್ಚರಿಕೆ ಹಾಗೂ ಮುಂಜಾಗೃತ ಕ್ರಮವಾಗಿ ನಾಲಾ ಹಾಗೂ ಚರಂಡಿಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಿ ಎನ್ನುವ ಉದ್ದೇಶದಿಂದ ಹೂಳು ತೆಗೆಯುವುದು ಹಾಗೂ ಸ್ವಚ್ಛತೆಗೆ ಮಹಾನಗರ ಪಾಲಿಕೆ ಮುಂದಾಗಿದೆ. ಇದರ ಭಾಗವಾಗಿ ಉಣಕಲ್ಲ ಕೆರೆ ಸಮೀಪದ ನಾಲಾ ಸ್ವಚ್ಛತಗೊಳಿಸಲು ಬುಧವಾರ ಚಾಲನೆ ನೀಡಿದ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗುಂಡೂರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ತ್ಯಾಜ್ಯವನ್ನು ಕಾಲುವೆಗೆ ಎಸೆಯದೆ ಮನೆ ಬಳಿ ಬರುವ ಕಸ ಸಂಗ್ರಹಿಸುವ ವಾಹನಕ್ಕೆ ನೀಡಬೇಕು. ಇದರಿಂದ ನಾಲಾ ಸ್ವಚ್ಛವಾಗಿರುವ ಜತೆಗೆ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗುತ್ತದೆ ಎಂದರು.