ಕನ್ನಡಪ್ರಭ ವಾರ್ತೆ ಸಕಲೇಶಪುರ
ಪಟ್ಟಣದ ಕ್ರಾಫರ್ಡ್ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಲೆನಾಡು ಭಾಗದ ಕಾಫಿ ತೋಟಗಳಲ್ಲಿ ಸಾವಿರಾರು ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರ ಮಕ್ಕಳೂ ಸೇರಿದಂತೆ ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ತೋಟದ ಮಾಲೀಕರು ವಿಶೇಷ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು.
ಪೋಲಿಯೋ ಹನಿ ಮಗುವಿನ ಆರೋಗ್ಯ ರಕ್ಷಣೆಗೆ ಅತ್ಯಂತ ಸುರಕ್ಷಿತ ಹಾಗೂ ಪರಿಣಾಮಕಾರಿ ಲಸಿಕೆಯಾಗಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೆ ಹಾಗೂ ವಿವಿಧ ಕೇಂದ್ರಗಳಲ್ಲಿ ಲಸಿಕೆ ನೀಡಲಿದ್ದು, ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದರು. ಇಂದಿನಿಂದ ಗ್ರಾಮೀಣ ಪ್ರದೇಶಗಳಲ್ಲಿ ಮೂರು ದಿನ ಹಾಗೂ ನಗರ ಪ್ರದೇಶಗಳಲ್ಲಿ ನಾಲ್ಕು ದಿನಗಳ ಕಾಲ ವಿಶೇಷ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ. ಈ ಅವಧಿಯಲ್ಲಿ ಜನನದಿಂದ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಹನಿ ನೀಡಲಾಗುವುದು. ಯಾವುದೇ ಮಗು ತಪ್ಪಿಹೋಗದಂತೆ ಪೋಷಕರು ಸಮೀಪದ ಪೋಲಿಯೋ ಬೂತ್‌ಗೆ ಕರೆತಂದು ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರು ಮನೆಮನೆಗೆ ತೆರಳಿ ಲಸಿಕಾಕರಣದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಅವರ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸುವ ಮೂಲಕ ಪೋಲಿಯೋ ನಿರ್ಮೂಲನೆಯ ಗುರಿ ಸಾಧಿಸಲು ನೆರವಾಗಬೇಕು ಎಂದು ಶಾಸಕರು ಕರೆ ನೀಡಿದರು.ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ವಿಶ್ವವನ್ನು ಪೋಲಿಯೋ ಮುಕ್ತಗೊಳಿಸುವ ಉದ್ದೇಶದಿಂದ ರೋಟರಿ ಸಂಸ್ಥೆ ಹಲವು ದಶಕಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದೊಂದಿಗೆ ಕೈಜೋಡಿಸಿ ಜಾಗೃತಿ ಕಾರ್ಯಕ್ರಮಗಳು ಹಾಗೂ ಲಸಿಕಾ ಅಭಿಯಾನಗಳಿಗೆ ಬೆಂಬಲ ನೀಡಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ರೋಟರಿ ಕ್ಲಬ್ ಪದಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.