ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯದ ಹಕ್ಕಿದೆ: ನ್ಯಾ. ದಿವ್ಯಶ್ರೀ

KannadaprabhaNewsNetwork |  
Published : Oct 17, 2025, 01:02 AM IST
 | Kannada Prabha

ಸಾರಾಂಶ

ಸಾಮಾನ್ಯವಾಗಿ ಎಲ್ಲರೂ ಒತ್ತಡ ಹಾಗೂ ಜೀವನದ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಹೊಂದಿರುತ್ತಾರೆ.

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ

ಕನ್ನಡಪ್ರಭ ವಾರ್ತೆ ಕಾರವಾರ

ಸಾಮಾನ್ಯವಾಗಿ ಎಲ್ಲರೂ ಒತ್ತಡ ಹಾಗೂ ಜೀವನದ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಆದರೆ ಒತ್ತಡ ಮತ್ತು ಸವಾಲು ಎದುರಿಸದೇ ಮಾನಸಿಕ ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಅಸ್ವಸ್ಥೆಗಳಿಗೆ ಚಿಕಿತ್ಸೆಯು ಎಲ್ಲಾ ಕಡೆಯಲ್ಲೂ ಲಭ್ಯವಿರುತ್ತದೆ ಮತ್ತು ಪ್ರತಿಯೊಬ್ಬ ವ್ಯಕ್ತಿಗೂ ಮಾನಸಿಕ ಆರೋಗ್ಯ ರಕ್ಷಣೆಗೆ ಚಿಕಿತ್ಸೆ ಪಡೆಯುವ ಹಕ್ಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ವಿಚಾರದಲ್ಲಿ ಮೆಂಟಲ್ ಹೆಲ್ತ್ ಕೇರ್ ಕಾಯ್ದೆಯು ಅತ್ಯಂತ ಪ್ರಮುಖವಾದ ಕಾನೂನಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಜನರಲ್ಲಿ ಕಾನೂನುಗಳ ಬಗ್ಗೆ ಹಾಗೂ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೂ ಜೀವಿಸುವ ಹಕ್ಕು ಇರುವಂತೆ ಮೆಂಟಲ್ ಹೆಲ್ತ್ ಕೇರ್ ಕಾಯ್ದೆಯನ್ವಯ ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯದ ಹಕ್ಕಿದೆ ಎಂದರು.

ಪ್ರತಿಯೊಂದು ಜಿಲ್ಲೆಯಲ್ಲೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾನಸಿಕ ಆರೋಗ್ಯ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಯಾವುದೇ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ಚಿಕಿತ್ಸೆ ದೊರೆಯದೆ ಕುಂದು ಕೊರತೆಗಳು ಉಂಟಾದಲ್ಲಿ ಮೆಂಟಲ್ ಹೆಲ್ತ್ ರಿವ್ಯೂ ಬೋರ್ಡನಲ್ಲಿ ದೂರನ್ನು ಸಲ್ಲಿಸಬಹುದು. ದೈಹಿಕ ಆರೋಗ್ಯಕ್ಕೆ ಎಷ್ಟು ಪ್ರಾಮುಖ್ಯತೆಯನ್ನು ನೀಡುತ್ತೇವೆಯೋ ಮಾನಸಿಕ ಆರೋಗ್ಯಕ್ಕೂ ಕೂಡ ಅಷ್ಟೇ ಪ್ರಾಮುಖ್ಯತೆ ನೀಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನೀರಜ್ ಬಿ.ವಿ., ಈಚಿನ ದಿನಗಳಲ್ಲಿ ಮಾನಸಿಕ ರೋಗಿಗಳು ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮಾನಸಿಕ ಆರೋಗ್ಯದ ಕುರಿತು ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ದೈಹಿಕ ಕಾಯಿಲೆ ಗುಣಪಡಿಸುವುದರ ಜೊತೆಯಲ್ಲಿ ಮಾನಸಿಕ ಆರೋಗ್ಯದ ಕಡೆ ಗಮನ ಹರಿಸಬೇಕು. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬಂದಿ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಮಾನಸಿಕ ಕಾಯಿಲೆಗಳಿಗೆ ನಿರಂತರವಾಗಿ ಸಮಾಲೋಚನೆ ಮತ್ತು ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಬಹುದು ಎಂದರು.

ಮನೋವೈದ್ಯ ಡಾ. ಸುಹಾಸ್, ಮಾನಸಿಕ ಆರೋಗ್ಯದ ಉದ್ದೇಶ ಗುರಿ ಮತ್ತು ಪರಿಹಾರದ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ.ಶಂಕರ್ ರಾವ್ ಮಾತನಾಡಿದರು. ಜಿಲ್ಲಾ ಕಾರ್ಯಕ್ರಮ ಸಂಯೋಜಕ ಬಸವರಾಜ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಕನ್ನಕ್ಕನವರ್ ನಿರೂಪಿಸಿ, ವಂದಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯವರೆಗೆ ಜಾಥಾ ಕಾರ್ಯಕ್ರಮ ನಡೆಯಿತು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಅರಕ್ಷಕ, ಶಿಕ್ಷಣ, ಕಾರಾಗೃಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಕಾರವಾರ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ
ರೈತ ಭವನ ಶಿಥಿಲ, ವಾಸಿಸಲು ಜಟಿಲ!