ಕನ್ನಡಪ್ರಭ ವಾರ್ತೆ ಶಹಾಪುರಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸೋಣ. ಸಮಾಜದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಪಾಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಇನ್ಪೆಕ್ಟರ್ ಶರಣುಗೌಡ ನ್ಯಾಮಣ್ಣನವರು ಹೇಳಿದರು.
ರಾಷ್ಟ್ರದ ಸಾಂಸ್ಕೃತಿಕ ಪರಂಪರೆಯನ್ನು ಸಾರುವ ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ನಾಗರಿಕರೆಲ್ಲರೂ ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು. ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಿಂದ ತೊಂದರೆಯಾಗದಂತೆ ಗಮನಹರಿಸಬೇಕು ಎಂದರು.ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ, ಪರಿಸರದ ಆರೋಗ ಕಾಪಾಡಬೇಕು. ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೊದಲು ಸಂಬಂಧಪಟ್ಟ ಪುರಸಭೆ, ಪೊಲೀಸ್ ಇಲಾಖೆ, ಜೆಸ್ಕಾಂ ಮುಂತಾದ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪತ್ರ ಪಡೆಯಬೇಕು ಎಂದು ತಿಳಿಸಿದರು.
ಭೀಮರಾಯನ ಗುಡಿ ಪೊಲೀಸ್ ಠಾಣೆ ಪಿಎಸ್ಐ ಮಹಾಂತೇಶ್ ಪಾಟೀಲ್ ಮತ್ತು ನಮ್ಮ ಕರ್ನಾಟಕ ಸೇನೆಯ ರಾಜ್ಯ ಪ್ರಧಾನ ಸಂಚಾಲಕ ಭೀಮಣ್ಣ ಶಖಾಪುರ ಮಾತನಾಡಿದರು. ಹುಲಗಪ್ಪ, ಚಂದ್ರು ಎ.ಎಸ್.ಐ, ಮಂಜುನಾಥ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ವಿವಿಧ ಮುಖಂಡರು ಹಾಜರಿದ್ದರು.