ದೇಶದ ಅಭಿವೃದ್ಧಿಗೆ ಎಲ್ಲರೂ ಕೊಡುಗೆ ನೀಡಿ: ನ್ಯಾ. ಬಸವರಾಜ

KannadaprabhaNewsNetwork |  
Published : Sep 16, 2026, 02:30 AM IST
15ಎಂಡಿಜಿ1, ಮುಂಡರಗಿಯ ಹೊಸ ಎಪಿಎಂಸಿ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮತ್ತು ಮಾದರಿ ಯುವ ಸಂಸತ್ ಕಾರ್ಯಕ್ರಮದ ಉದ್ಘಾಟನೆಯನ್ನು ದಿವಾಣಿ ನ್ಯಾಯಾಧೀಶ ಬಸವರಾಜ ಉದ್ಘಾಟಿಸಿದರು.15ಎಂಡಿಜಿ1ಎ, ಮುಂಡರಗಿಯ ಹೊಸ ಎಪಿಎಂಸಿ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮತ್ತು ಮಾದರಿ ಯುವ ಸಂಸತ್ ಕಾರ್ಯಕ್ರಮದ ಉದ್ಘಾಟನೆಯನ್ನು ದಿವಾಣಿ ನ್ಯಾಯಾಧೀಶ ಬಸವರಾಜ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಪ್ರಜೆಗಳಿಂದ, ಪ್ರಜೆಗಳಿಗಾಗಿ ಮತ್ತು ಪ್ರಜೆಗಳಿಗೋಸ್ಕರ ಇರುವ ಸರ್ಕಾರವೇ ಪ್ರಜಾಪ್ರಭುತ್ವ. ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಸದ್ಬಳಕೆ ಮಾಡಿಕೊಂಡು ದೇಶದ ಅಭಿವೃದ್ಧಿಗೆ ಎಲ್ಲರೂ ಕೊಡುಗೆ ನೀಡಬೇಕು.

ಕನ್ನಡಪ್ರಭ ವಾರ್ತೆ ಮುಂಡರಗಿ

ಪ್ರಜೆಗಳಿಂದ, ಪ್ರಜೆಗಳಿಗಾಗಿ ಮತ್ತು ಪ್ರಜೆಗಳಿಗೋಸ್ಕರ ಇರುವ ಸರ್ಕಾರವೇ ಪ್ರಜಾಪ್ರಭುತ್ವ. ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಸದ್ಬಳಕೆ ಮಾಡಿಕೊಂಡು ದೇಶದ ಅಭಿವೃದ್ಧಿಗೆ ಎಲ್ಲರೂ ಕೊಡುಗೆ ನೀಡಬೇಕು ಎಂದು ಮುಂಡರಗಿ ದಿವಾಣಿ ನ್ಯಾಯಾಧೀಶ ಬಸವರಾಜ ಹೇಳಿದರು.

ಪಟ್ಟಣದಲ್ಲಿ ಹೊಸ ಎಪಿಎಂಸಿ ಆವರಣದಲ್ಲಿ ಮಂಗಳವಾರ ತಾಲೂಕು ಆಡಳಿತ, ತಾಪಂ, ಪುರಸಭೆ, ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮುಂಡರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮತ್ತು ಮಾದರಿ ಯುವ ಸಂಸತ್ ಉದ್ಘಾಟನೆ ನೆರವೇರಿಸಿ, ಸಂವಿಧಾನ ಪೀಠಿಕೆ ಓದಿಸಿ ಮಾತನಾಡಿದರು.

ನಮಗೆ ಸೂಕ್ತವಾದ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳುವ ಪರಮಾಧಿಕಾರವನ್ನು ಭಾರತದ ಸಂವಿಧಾನ ನಮಗೆ ನೀಡಿದೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ಮುಂದಿನ ದಿನಗಳಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಂಡು, ದೇಶ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ ನಾನು ದೇಶಕ್ಕೆ ಏನು ನೀಡಿದ್ದೇನೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಉಪನ್ಯಾಸಕರಾಗಿ ಕ.ರಾ.ಬೆಲ್ಲದ ಮಹಾವಿದ್ಯಾಲಯದ ಡಾ. ಆರ್.ಎಚ್. ಜಂಗನವಾರಿ ಮಾತನಾಡಿ, ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ನಮಗೆ ಸಾರ್ಥಕಗೊಳಿಸಿದವರು ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್. 18 ವರ್ಷ ತುಂಬಿದ ಪ್ರತಿಯೊಬ್ಬ ಪುರುಷ ಮತ್ತು ಮಹಿಳೆಗೆ ಸಾರ್ವತ್ರಿಕ ಮತದಾನದ ಹಕ್ಕು ಸಿಗಬೇಕೆಂದು ಪಟ್ಟುಹಿಡಿದು ಅದನ್ನು ಕಲ್ಪಿಸಿಕೊಟ್ಟ ಕೀರ್ತಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಸಾಮಾಜಿಕ ನ್ಯಾಯ, ಶಾಂತಿ, ಅಭಿವೃದ್ಧಿ ಹಾಗೂ ಮಾನವ ಹಕ್ಕುಗಳು ನಮ್ಮ ಸಂವಿಧಾನದ ಪ್ರಮುಖ ಆಧಾರಸ್ತಂಭಗಳಾಗಿವೆ. ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪ್ರಜ್ಞಾವಂತರೇ ಮತದಾನದಿಂದ ದೂರ ಉಳಿಯುತ್ತಿರುವುದು ಪ್ರಜಾಪ್ರಭುತ್ವದ ದುರಂತ. ಮತದಾರರು ಯಾವುದೇ ಆಸೆ-ಆಮಿಷಗಳಿಗೆ ಬಲಿಯಾಗದೆ ಪ್ರಾಮಾಣಿಕವಾಗಿ ಮತ ಚಲಾಯಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ ಎರ್ರಿಸ್ವಾಮಿ ಪಿ.ಎಸ್. ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಪಂ ಇಒ ವಿಜಯಕುಮಾರ ಬೆಣ್ಣಿ, ಸಿಪಿಐ ಅಯ್ಯನಗೌಡ ಪಾಟೀಲ, ಬಿಇಒ ಗಂಗಾಧರ ಅಣ್ಣೀಗೇರಿ, ಎ.ಕೆ. ಜೈನ್ ಸೇರಿ ಅನೇಕರು ಅತಿಥಿಗಳಾಗಿ ಪಾಲ್ಗೊಂಡಿದ್ದರು. ಈ ಸದಂರ್ಭ ರಾಘವೇಂದ್ರ, ಸಾಮಾಜಿಕ ಅರಣ್ಯಾಧಿಕಾರಿ ಸುನಿತಾ, ಅಲ್ಪಸಂಖ್ಯಾತ ಇಲಾಖೆಯ ಸವಿತಾ ಸಾಶ್ವಿಹಳ್ಳಿ, ಬಿಸಿಎಂ ಅಧಿಕಾರಿ ಗುಮ್ಮಗೋಳ, ಹೋರಾಟಗಾರರಾದ ವಿ.ಎಸ್. ಗಟ್ಟಿ, ದುರಗಪ್ಪ ವಿಠಲಾಪೂರ, ಲಕ್ಷ್ಮಿಣ ತಗಡಿನಮನಿ, ಸೋಮಣ್ಣ ಹೈತಾಪೂರ, ಬಸವರಾಜ ನವಲಗುಂದ, ಧ್ರುವಕುಮಾರ ಹೂಗಾರ, ಚಂದ್ರಶೇಖರ ಪೂಜಾರ, ರವೀಗೌಡ ಪಾಟೀಲ, ಗುಗ್ಗರಿ ಸೇರಿ ಅನೇಕರಿದ್ದರು. ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ ಸ್ವಾಗತಿಸಿದರು. ಶರಣು ಕಲಾಲ ನಿರೂಪಿಸಿ, ಶ್ರೀಕಾಂತ ಅರಹುಣಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿ’ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಎಚ್.ಪ್ರಭಾಕರ್
ಕರಾವಳಿ ಸಮಸ್ಯೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಪರಿಹಾರ: ನೀರೆ ಕೃಷ್ಣ ಶೆಟ್ಟಿ