ಕನ್ನಡಪ್ರಭ ವಾರ್ತೆ ಚಾಮರಾಜನಗರ
ಪ್ರತಿಯೊಂದು ಕುಟುಂಬ ಶೌಚಾಲಯ ನಿರ್ಮಿಸಿಕೊಂಡು ಅದನ್ನು ಬಳಸುವ ಮೂಲಕ ಸ್ವಚ್ಛತೆ ಕಾಪಾಡಬೇಕು. ಜೀವನ ಶೈಲಿಯಲ್ಲಿ ಶೌಚಾಲಯದ ಮಹತ್ವ ಅತೀ ಮುಖ್ಯ ಹಾಗೂ ಅವಶ್ಯಕವೂ ಆಗಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.ತಾಲೂಕಿನ ಕುದೇರು ಗ್ರಾಪಂ ವ್ಯಾಪ್ತಿಯಲ್ಲಿ ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ನಮ್ಮ ಶೌಚಾಲಯ ನಮ್ಮ ಗೌರವ ಹಾಗೂ ಅಂದದ ಶೌಚಾಲಯ ಆನಂದದ ಜೀವನ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿರುವ ವಿಶೇಷ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದರು.
ಸ್ವಚ್ಛತೆಯನ್ನು ನಮ್ಮಿಂದಲೇ ಪ್ರಾರಂಭಿಸಿ ಕುಟುಂಬದವರು ಹಾಗೂ ಸಮುದಾಯಕ್ಕೆ ಇದರ ಬಗ್ಗೆ ಹೆಚ್ಚಿನ ಅರಿವು ಮತ್ತು ಜ್ಞಾನವನ್ನು ಮೂಡಿಸಬೇಕಾಗಿದೆ. ಶೌಚಾಲಯದ ಬಳಕೆಯಿಂದ ಮಲೇರಿಯಾ, ಕಾಲರಾ, ಟೈಫಾಯಿಡ್, ಡೆಂಘೀಯಂತಹ ಕಾಯಿಲೆಗಳಿಂದ ಪಾರಾಗಬಹುದಾಗಿದೆ. ಎಲ್ಲರೂ ವೈಯಕ್ತಿಕ, ಕೌಟುಂಬಿಕ ಹಾಗೂ ಸಾಮಾಜಿಕ ಸ್ವಚ್ಛತೆಗೆ ಮಹತ್ವ ನೀಡಿ ಆರೋಗ್ಯಯುತ ಜೀವನ ನಡೆಸಬೇಕು ಎಂದು ಹೇಳಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ, ಗ್ರಾಮ ಪಂಚಾಯಿತಿಗಳು ಜವಾಬ್ದಾರಿಯುತವಾಗಿ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಕರ್ತವ್ಯನಿರ್ವಹಿಸಿ ಶೌಚಾಲಯ ರಹಿತ ಫಲಾನುಭವಿಗಳನ್ನು ಗುರುತಿಸಬೇಕು. ಅವರ ಮನವೊಲಿಸಿ ಶೌಚಾಲಯಗಳನ್ನು ನಿರ್ಮಿಸಿ ಬಳಕೆ ಮಾಡಿಕೊಳ್ಳಲು ಪ್ರೇರೇಪಿಸುವಂತಹ ವಿವಿಧ ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ತಿಳಿಸಿದರು.
ನಮ್ಮ ಶೌಚಾಲಯ-ನಮ್ಮ ಗೌರವ ಅಭಿಯಾನದ ಉದ್ದೇಶ ಸಮುದಾಯಗಳ ಭಾಗವಹಿಸುವಿಕೆ ಈ ಆಂದೋಲನ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳು ನಿರ್ವಹಿಸಬೇಕಾದ ಕರ್ತವ್ಯ ಮತ್ತು ಚಟುವಟಿಕೆಗಳ ಬಗ್ಗೆ ವಿವರಿಸಿದರು.ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಜಿಲ್ಲಾ ನೋಡಲ್ ಅಧಿಕಾರಿ ಕಿರಣ್ ಫಡ್ನೇಕರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿ ಅಭಿಯಾನದ ಉದ್ದೇಶಗಳನ್ನ ತಿಳಿದುಕೊಳ್ಳಬೇಕು. ಅಭಿಯಾನದ ಸ್ಪರ್ಧೆ ಆಯೋಜನೆ ಸ್ವರ್ಧೆಯ ನೀಲನಕ್ಷೆ, ಪ್ರಮುಖ ಚಟುವಟಿಕೆಗಳನ್ನು ನಿರ್ವಹಿಸಬೇಕು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ ಇಲಾಖೆಗಳು ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಜವಾಬ್ದಾರಿಗಳು ಅಭಿಯಾನದಲ್ಲಿ ಹೆಚ್ಚಿದೆ. ಸದರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.ಇದೇ ವೇಳೆ ಫಲಾನುಭವಿಗಳಿಗೆ ಹೊಸದಾಗಿ ಶೌಚಾಲಯ ನಿರ್ಮಿಸಿಕೊಳ್ಳಲು ಗಣ್ಯರು ಕಾರ್ಯಾದೇಶ ಮಂಜೂರಾತಿ ಪತ್ರಗಳನ್ನು ವಿತರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಆನಂದಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಕುದೇರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಿವಣ್ಣ, ಗ್ರಾಮ ಪಂಚಾಯಿತಿ ಸದಸ್ಯರು, ಇತರರು ಹಾಜರಿದ್ದರು.