ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಅರಿಯಬೇಕು

KannadaprabhaNewsNetwork |  
Published : Sep 16, 2025, 12:03 AM IST
ಕ್ಯಾಪ್ಶನ್......ತುಮಕೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭ | Kannada Prabha

ಸಾರಾಂಶ

ಸಂವಿಧಾನದ ಆಶಯಗಳನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಅರಿತುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಸಂವಿಧಾನದ ಆಶಯಗಳನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಅರಿತುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಪ್ರಜಾಪ್ರಭುತ್ವವು ಕೇವಲ ಮತದಾನಕ್ಕೆ ಸೀಮಿತವಾಗಿರದೆ, ಜನಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಒತ್ತಿ ಹೇಳುತ್ತದೆ. ಪ್ರತೀ ನಾಗರಿಕನೂ ಪ್ರಜಾಪ್ರಭುತ್ವದ ಬಲವರ್ಧನೆಗೆ ತನ್ನ ಪಾತ್ರವನ್ನು ನಿರ್ವಹಿಸಬೇಕು ಎಂದು ಹೇಳಿದರು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನೂ ತನ್ನ ಹಕ್ಕುಗಳೊಂದಿಗೆ ಕರ್ತವ್ಯಗಳನ್ನೂ ಪಾಲಿಸಿದಾಗ ಮಾತ್ರ ಪ್ರಜಾಪ್ರಭುತ್ವ ಬಲವಾಗುತ್ತದೆ ಎಂದು ತಿಳಿಸಿದರು. ಸಂವಿಧಾನವು ನೀಡಿರುವ ಹಕ್ಕುಗಳನ್ನು ನಾವು ಗೌರವಿಸುವಂತೆ, ಅದರ ಕರ್ತವ್ಯಗಳನ್ನು ಪಾಲಿಸುವುದೂ ಅತ್ಯಂತ ಮುಖ್ಯ. ಪ್ರಜಾಪ್ರಭುತ್ವ ವ್ಯವಸ್ಥೆ ಜನರ ಆಶಯದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.ವಿದ್ಯಾರ್ಥಿ ಜೀವನದಲ್ಲಿ ಯಶಸ್ಸನ್ನು ಕಾಣಬೇಕಾದರೆ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಇತರೆ ಮಹನೀಯರ ಪುಸ್ತಕಗಳನ್ನು ಓದಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸಿನ ಹಾದಿಯಲ್ಲಿ ಸಾಗಬಹುದು ಎಂದು ಹೇಳಿದರು.ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ಮೌಲ್ಯಗಳು, ಸಿದ್ಧಾಂತಗಳು ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಜಾಗೃತಿ ಹೊಂದಿರಬೇಕು. ಪ್ರಜಾಪ್ರಭುತ್ವವೆಂದರೆ ಜನರ ಆಡಳಿತ, ಜನರಿಗಾಗಿ ನಡೆಯುವ ಸರ್ಕಾರ. ಜನರಿಗೆ ತಮಗೆ ನಾಯಕರನ್ನು ಆಯ್ಕೆಮಾಡುವ ಹಕ್ಕು, ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯ, ಕಾನೂನಿನ ಮುಂದೆ ಸಮಾನತೆ ಹಾಗೂ ನ್ಯಾಯವನ್ನು ಅನುಭವಿಸುವ ಅವಕಾಶಗಳನ್ನು ನೀಡುವುದು ಪ್ರಜಾಪ್ರಭುತ್ವದ ಮೂಲಭೂತ ತತ್ವವಾಗಿದೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಆಯಿಶಾ ಫರಝಾನ್ ಯು.ಟಿ. ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸ್ಥಾನ, ಗೌರವ, ಮೌಲ್ಯವಿದೆ. ಬಸವಣ್ಣನವರು 12ನೇ ಶತಮಾನದಲ್ಲಿಯೇ ತಮ್ಮ ಅನುಭವ ಮಂಟಪದ ಮೂಲಕ ಪ್ರಪಂಚದ ಮೊದಲ ಸದನವನ್ನು ಸ್ಥಾಪಿಸಿ ಪ್ರಜಾಪ್ರಭುತ್ವದ ಮೌಲ್ಯ, ಸಮಾನತೆಯ ತತ್ವವನ್ನು ಇಡೀ ಜಗತ್ತಿಗೆ ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆಯ ಮಾದರಿಯನ್ನು ತೋರಿಸಿದರು ಎಂದು ತಿಳಿಸಿದರು.ನಮ್ಮ ದೇಶದ ಪ್ರಜಾಪ್ರಭುತ್ವವು ಇತರ ದೇಶಗಳಿಗಿಂತ ಹೆಚ್ಚು ಬಲಿಷ್ಠವಾಗಿದೆ ಎಂಬುದನ್ನು ವಿಶೇಷವಾಗಿ ಉಲ್ಲೇಖಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರಸಿದ್ಧ ವಾಕ್ಯವನ್ನು ಉಲ್ಲೇಖಿಸಿ ಶಿಕ್ಷಣವು ಹುಲಿಯ ಹಾಲಿನಂತೆ, ಅದನ್ನು ಕುಡಿದವರು ಘರ್ಜಿಸಲೇಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಮಾತುಗಳನ್ನಾಡಿದರು. ವಿದ್ಯಾರ್ಥಿಗಳು ವಿದ್ಯಾವಂತರಾಗುವ ಮೂಲಕ ಜಾಗೃತ ನಾಗರಿಕರಾಗಿ, ಪ್ರಜಾಪ್ರಭುತ್ವದ ಬಲವನ್ನು ಹೆಚ್ಚಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ನಾಹಿದಾ ಜಮ್‌ ಜಮ್‌ , ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ತಹಶೀಲ್ದಾರ್ ರಾಜೇಶ್ವರಿ ಪಿ.ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಸೇರಿದಂತೆ ಮತ್ತಿತರ ದಲಿತ ಸಂಘದ ಮುಖಂಡರು ಉಪಸ್ಥಿತರಿದ್ದರು.

PREV

Recommended Stories

ದ.ಕ.ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಚಾಲನೆ
ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ