ಕನ್ನಡ ಭಾಷೆ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಶ್ರಮಿಸಿ: ಜಿಲ್ಲಾಧಿಕಾರಿ

KannadaprabhaNewsNetwork | Published : Oct 8, 2024 1:17 AM

ಸಾರಾಂಶ

ಕರ್ನಾಟಕ ಸಂಭ್ರಮ-50ರ ಅಂಗವಾಗಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಾಗತಕೋರಲಾಯಿತು.

ಕನ್ನಡಪ್ರಭ ವಾರ್ತೆ ಮಣಿಪಾಲ

ನಮ್ಮ ಮಾತೃ ಭಾಷೆ ಕನ್ನಡದ ಮಹತ್ವದ ಬಗ್ಗೆ ನಮ್ಮ ಮುಂದಿನ ಪೀಳಿಗೆಗೆ ಮನದಟ್ಟು ಮಾಡುವ ಮೂಲಕ ಕನ್ನಡವನ್ನು ಉಳಿಸಬೇಕು, ಕನ್ನಡ ನಮ್ಮ ಉಸಿರಾಗಬೇಕು, ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ ನೀಡಿದರು.ಅವರು ಸೋಮವಾರ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50ರ ಅಂಗವಾಗಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ ಕೋರಿ, ಕನ್ನಡ ತಾಯಿ ಭುನೇಶ್ವರಿಯ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರು ಮಾತನಾಡಿ, ಮನೆಯಲ್ಲಿ ಮಾತೃ ಭಾಷೆ ಕನ್ನಡವನ್ನು ಆಡುವುದರೊಂದಿಗೆ, ಮಕ್ಕಳು ಕನ್ನಡ ಪುಸಕ್ತಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಲು ಪ್ರೇರೇಪಿಸಬೇಕು. ಕನ್ನಡ ಭಾಷೆ ಕಲಿಕಾ ಮಾಧ್ಯಮವಾದಾಗ ಮಾತ್ರವೇ ಕನ್ನಡ ಜ್ಯೋತಿ ರಥಯಾತ್ರೆಗೆ ಸಾರ್ಥಕತೆ ದೊರೆಯುತ್ತದೆ ಎಂದರು.ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆನಂದ್ ಕುಂದರ್ ಮಾತನಾಡಿ, ಕನ್ನಡ ಸಾಹಿತ್ಯವನ್ನು, ಕನ್ನಡ ಶಾಲೆಗಳನ್ನು ಉಳಿಸುವ ಕಾರ್ಯವಾಗಬೇಕು. ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡುವುದರೊಂದಿಗೆ ಯುವಜನತೆಯಲ್ಲಿ ಕನ್ನಡ ಕಲಿಯುವಿಕೆಯ ಕುರಿತ ಆಸಕ್ತಿಯನ್ನು ಹೆಚ್ಚಿಸಬೇಕು ಎಂದು ಹೇಳಿದರು.ಈ ಸಂದರ್ಭ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಟಿ., ಪೌರಾಯುಕ್ತ ರಾಯಪ್ಪ, ಡಿಡಿಪಿಐ ಗಣಪತಿ ಕೆ., ಹಿಂ. ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್. ಲಮಾಣಿ, ಜಿಲ್ಲಾಮಟ್ಟದ ಅಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಕನ್ನಡ ಪರ ಘೋಷಣೆಗಳನ್ನು ಕೂಗುವುದರೊಂದಿಗೆ ಮೆರವಣಿಗೆ ಸಾಗಿತು. ರಥಯಾತ್ರೆಗೆ ವಿವಿಧ ಜಾನಪದ ಕಲಾ ತಂಡಗಳು ಆಕರ್ಷಕ ಮೆರುಗು ನೀಡಿದವು.

Share this article