ಎಲ್ಲರೂ ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ

KannadaprabhaNewsNetwork |  
Published : Aug 22, 2024, 12:59 AM IST
21ಕೆಆರ್ ಎಂಎನ್ 1.ಜೆಪಿಜಿರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ರಾಮನಗರ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.30ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಓ ಮೇಳದಲ್ಲಿ ಸಾವಿರಾರು ಉದ್ಯೋಗವಕಾಶಗಳು ಲಭ್ಯವಿದ್ದು, ಜಿಲ್ಲೆಯ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಮನಗರ

ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.30ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಓ ಮೇಳದಲ್ಲಿ ಸಾವಿರಾರು ಉದ್ಯೋಗವಕಾಶಗಳು ಲಭ್ಯವಿದ್ದು, ಜಿಲ್ಲೆಯ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಕರೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂಸ್ತಾನ್ ಕೋಕೊ ಕೋಲಾ, ಬ್ರೀಟಾನಿಯಾ, ಜೆಬಿಎಚ್, ಟಯೋಟ, ಬಾಸ್ಕೋ, ವಿಸ್ಟಾನ್, ಇನ್ಫೋಸಿಸ್ ಸಮೂಹ ಸಂಸ್ಥೆಗಳು ಸೇರಿದಂತೆ 120ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.

ಈ ಮೇಳದಲ್ಲಿ 20 ಸಾವಿರಕ್ಕೂ ಅಧಿಕ ಉದ್ಯೋಗವಕಾಶ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮೊ, ಪದವಿ, ಎಂಜಿನಿಯರಿಂಗ್, ಸ್ನಾತಕೊತ್ತರ ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದರು.

ಉದ್ಯೋಗ ಮೇಳವು ಆ.30ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಜರುಗಲಿದ್ದು, ಸಂಪೂರ್ಣ ಉಚಿತವಾಗಿ ನಡೆಸಲಾಗುತ್ತಿದೆ. ಅಭ್ಯರ್ಥಿಗಳಿಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು 10 ಪ್ರತಿ ರೆಸ್ಯೂಮ್‌ಗಳನ್ನು ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಸಂದರ್ಶನಕ್ಕೆ ತರಬೇಕಾಗಿದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಅಂತಿಮ ವರ್ಷ ವ್ಯಾಸಂಗ ಮಾಡುತ್ತಿರುವ ಪದವೀಧರರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದರು.

ಈ ಉದ್ಯೋಗ ಮೇಳದಲ್ಲಿ ಐದು ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವಕಾಶವನ್ನು ಕಲ್ಪಿಸಲಾಗುವುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಉದ್ಯೋಗಾಕಾಂಕ್ಷಿಗಳು ಅಧಿಕೃತ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 18005999918 ಕರೆ ಮಾಡಬಹುದು. ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ https://skillconnect.kaushalkar.com ಎಂಬ ಪ್ರತ್ಯೇಕ ಪೋರ್ಟಲ್ ಸೃಷ್ಟಿಸಲಾಗಿದೆ. ಈ ಪೋರ್ಟಲ್‌ನಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಉದ್ಯೋಗ ಮೇಳದ ಟ್ಯಾಬ್ ಆಯ್ಕೆ ಮಾಡಿಕೊಂಡು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಉದ್ಯೋಗ ಮೇಳದಲ್ಲಿ ನೇರವಾಗಿ ಉದ್ಯಮಿಗಳಿಂದಲೇ ನೇಮಕಾತಿ ಪ್ರಕ್ರಿಯೆ ನಡೆಯುವುದರಿಂದ ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಮತ್ತು ಉದ್ಯೋಗದಾತರಿಗೆ ಉಪಹಾರದ ವ್ಯವಸ್ಥೆ ಇರುತ್ತದೆ. ಭಾಗವಹಿಸುವ ಅಭ್ಯರ್ಥಿಗಳಿಗೆ 70 ಸೇವಾ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ ಎಂ.ಸಿ.ಪುಷ್ಪಲತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಬಾಬು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ