ಕನ್ನಡಪ್ರಭ ವಾರ್ತೆ ಹಾಸನವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಓದುವ ಕೌಶಲ್ಯ ಹಾಗೂ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ನಗರದ ಸ್ಕಾಲರ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ಪರೀಕ್ಷಾ ಸಿದ್ಧತಾ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ಗುರುಬಸವರಾಜು ಯಲಗಚ್ಚಿ ಅವರು ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸಮಯ ನಿರ್ವಹಣೆ, ಏಕಾಗ್ರತೆ, ನಿರಂತರ ಅಭ್ಯಾಸ, ಪುನರಾವರ್ತನೆ ಹಾಗೂ ಪರೀಕ್ಷಾ ಭಯ ನಿವಾರಣೆಯ ಕುರಿತು ಉಪಯುಕ್ತ ಸಲಹೆಗಳನ್ನು ನೀಡಿದರು. ಉತ್ತಮ ಅಂಕ ಗಳಿಸುವುದರ ಜೊತೆಗೆ ವಿಷಯವನ್ನು ಅರ್ಥಮಾಡಿಕೊಂಡು ಸಮರ್ಥವಾಗಿ ಉತ್ತರಿಸುವ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರವೂ ಮಹತ್ವದ್ದಾಗಿದ್ದು, ಪ್ರೋತ್ಸಾಹದಾಯಕ ವಾತಾವರಣ ಕಲ್ಪಿಸುವಂತೆ ಸಲಹೆ ನೀಡಿದರು. ಶಾಲೆಯ ಆಡಳಿತಾಧಿಕಾರಿ ಡಾ. ಎಚ್.ಎನ್. ಚಂದ್ರಶೇಖರ್ ಮಾತನಾಡಿ, ಯಶಸ್ಸು ಒಂದೇ ದಿನದಲ್ಲಿ ದೊರೆಯುವುದಿಲ್ಲ. ಪ್ರತಿದಿನದ ಪರಿಶ್ರಮ, ಶಿಸ್ತು, ಸಮಯದ ಸದುಪಯೋಗ ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲುಗಳಾಗಿವೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಕನಸುಗಳಿಗೆ ಪ್ರೇರಣೆಯಾಗಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ದಾರಿದೀಪವಾಗಲಿ ಎಂದು ಆಶಿಸಿದರು.ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಶ್ರೀಧರ್ ಅವರು ವಿದ್ಯಾರ್ಥಿಗಳಿಗೆ ಪಿಯು ಕಾಲೇಜು ಆಯ್ಕೆ ಮತ್ತು ಉನ್ನತ ಶಿಕ್ಷಣದ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳ ಸ್ವರೂಪ, ಸಿದ್ಧತಾ ವಿಧಾನ, ಸಮಯ ನಿರ್ವಹಣೆ ಹಾಗೂ ಯಶಸ್ಸಿಗೆ ಅನುಸರಿಸಬೇಕಾದ ತಂತ್ರಗಳನ್ನು ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಗುರಿಯನ್ನು ಸ್ಪಷ್ಟಪಡಿಸಿಕೊಂಡು ಶಿಸ್ತು ಮತ್ತು ನಿರಂತರ ಅಭ್ಯಾಸದೊಂದಿಗೆ ಮುನ್ನಡೆದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಉತ್ತಮ ಸಾಧನೆ ಮಾಡಬಹುದು ಎಂದು ಪ್ರೇರೇಪಿಸಿದರು. ಹಾಸನದ ಸ್ಕಾಲರ್ಸ್ ಪದವಿಪೂರ್ವ ಕಾಲೇಜು ಗುಣಮಟ್ಟದ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೂ ಉತ್ತಮ ಅವಕಾಶ ಕಲ್ಪಿಸುವ ಸಂಸ್ಥೆಯಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಉತ್ಸಾಹದಿಂದ ಭಾಗವಹಿಸಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಎದುರಿಸುವ ಆತ್ಮವಿಶ್ವಾಸ ಮತ್ತು ಭವಿಷ್ಯದ ಶಿಕ್ಷಣದ ಬಗ್ಗೆ ಸ್ಪಷ್ಟತೆ ಮೂಡಿಸಲು ಸಹಕಾರಿಯಾಯಿತು.