ಕುಡಿವ ನೀರಿನ ಯೋಜನೆ ಕಾಮಗಾರಿ ತ್ವರಿತಗೊಳಿಸಿ

KannadaprabhaNewsNetwork |  
Published : May 15, 2025, 01:40 AM IST
14ಸಿಎಚ್‌ಎನ್‌60ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹವಾಮಾನ, ಕುಡಿಯುವ ನೀರು ನಿರ್ವಹಣೆ, ಜಾನುವಾರುಗಳ ಮೇವು ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳು ಮತ್ತು ಇತರೆ ಇಲಾಖೆ ವಿಷಯಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಸಭೆ ನಡೆಸಿದರು. | Kannada Prabha

ಸಾರಾಂಶ

ಚಾಮರಾಜನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸಭೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಯೋಜನೆ ಕಾಮಗಾರಿಗಳಿಗೆ ಯಾವುದೇ ವಿಳಂಬ ಮಾಡದೇ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹವಾಮಾನ, ಕುಡಿಯುವ ನೀರು ನಿರ್ವಹಣೆ, ಜಾನುವಾರುಗಳ ಮೇವು ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳು ಮತ್ತು ಇತರೆ ಇಲಾಖೆ ವಿಷಯಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿಗೆ ಅಧಿಕಾರಿಗಳು ಪ್ರಥಮ ಪ್ರಾಶಸ್ತ್ಯ ನೀಡಬೇಕು. ಜಲ ಜೀವನ್ ಮಿಷನ್ (ಜೆಜೆಎಂ) ಅಡಿ ಗ್ರಾಮಗಳಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸಿದ ಬಳಿಕವಷ್ಟೇ ಆಯಾಯ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಬೇಕು. ಈ ಬಗ್ಗೆ ದೂರು ಕೇಳಿ ಬರುತ್ತಿದೆ. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಿ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

ಹೊಂಗನೂರು, ಇರಸವಾಡಿ, ಕೆಂಪನಪುರ ಗ್ರಾಪಂಗಳಿಗೆ ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಹಸ್ತಾಂತರ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಪ್ರಸ್ತಾಪಿಸಿದ್ದಾರೆ. ಕಾಮಗಾರಿ ಪೂರ್ಣಗೊಳಿಸದ ಹೊರತು ಹೇಗೆ ಗ್ರಾಪಂಗಳಿಗೆ ವಹಿಸುತ್ತೀರಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಅವರನ್ನು ಸಚಿವರು ಪ್ರಶ್ನಿಸಿದರು.

ನಗರ, ಪಟ್ಟಣ ಪ್ರದೇಶಗಳಲ್ಲಿಯೂ ಸಹ ನೀರು ಸರಬರಾಜಿನಲ್ಲಿ ಯಾವುದೇ ತೊಂದರೆಯಾಗಬಾರದು. ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಇರುವ ಕ್ರಮಗಳ ಬಗ್ಗೆ ಮುತುವರ್ಜಿ ವಹಿಸಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ಕುಡಿಯುವ ನೀರಿನ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ಹೇಳಿದರು.

ಕೃಷಿ ಚಟುವಟಿಕೆಗಳಿಗೆ ಪೂರಕವಾದ ಬಿತ್ತನೆಬೀಜ, ರಸಗೊಬ್ಬರ ಇನ್ನಿತರ ಪರಿಕರಗಳಿಗೆ ಯಾವುದೇ ತೊಂದರೆ ಯಾಗಬಾರದು. ಜಾನುವಾರುಗಳು ರೋಗದಿಂದ ಮರಣ ಹೊಂದಿದಾಗ ನೀಡುವ ಪರಿಹಾರವನ್ನು ವಿಳಂಬ ಮಾಡಬಾರದು. ಮೇವು ದಾಸ್ತಾನು ಸಹ ಅಗತ್ಯಕ್ಕನುಗುಣವಾಗಿ ಇರಬೇಕು ಎಂದು ತಿಳಿಸಿದರು.

ಬಿಎಸ್ಎನ್ಎಲ್ ಸಂಪರ್ಕ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಕುರಿತು ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ , ಬಂಡೀಪುರದಲ್ಲಿ ಸ್ಥಾಪಿಸಲಾಗುವ ಟವರ್‌ಗೆ ಅವಶ್ಯವಿರುವ ಸೋಲಾರ್ ಸಂಪರ್ಕಕಕ್ಕೆ ಫಿಲ್ಲರ್‌ಗಳನ್ನು ನಿರ್ಮಾಣ ಮಾಡಬೇಕು. ಪ್ರಸ್ತಾವನೆಯನ್ನು ಕಳುಹಿಸಿ ಈ ಸಂಬಂಧ ಪರಿಶೀಲಿಸಿ ಮುಂದಿನ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಅರಣ್ಯ ಇಲಾಖೆಯ ವ್ಯಾಪ್ತಿಯೊಳಗೆ ಕೈಗೊಳ್ಳಬೇಕಿರುವ ಕಾಮಗಾರಿಗಳ ಅನುಷ್ಠಾನ ಸಂಬಂಧ ಪರಿಶೀಲನೆ ಮಾಡಬೇಕು. ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರೊಂದಿಗೆ ತಾವು ಸಹ ಮಾತನಾಡಲಿದ್ದು ಗಮನಕ್ಕೆ ತರಲಾಗುವುದು. ಯಾವುದೇ ತೊಡಕುಗಳಿದ್ದರೂ ಪರಿಹರಿಸಿಕೊಳ್ಳಬೇಕು ಎಂದು ಮೇಜರ್ ಪಿ. ಮಣಿವಣ್ಣನ್ ತಿಳಿಸಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿ ಶುದ್ಧತೆಯ ಬಗ್ಗೆ ಖಾತರಿಪಡಿಸಿಕೊಳ್ಳಲಾಗುತ್ತಿದೆ. ಬೆಳಹಾನಿ, ವಸತಿ ಹಾನಿಯಂತಹ ಪ್ರಕರಣಗಳಿಗೆ ನಿಯಮಾನುಸಾರ ಪರಿಶೀಲಿಸಿ ತ್ವರಿತವಾಗಿ ಪರಿಹಾರ ಕಲ್ಪಿಸಲಾಗುತ್ತಿದೆ. ಪರಿಹಾರ ಪೋರ್ಟಲ್‌ನ ಎಡಿಟ್ ಆಪ್ಶನ್ ತಾಂತ್ರಿಕ ತೊಡಕು ನಿವಾರಣೆ ಯಾಗಬೇಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್ ಮಾತನಾಡಿ, ಹನೂರು ಭಾಗದಲ್ಲಿ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆಯಿದೆ. ಕೌದಳ್ಳಿ ಭಾಗದಲ್ಲಿ ಬೋರ್‌ವೆಲ್ ಕೊರೆಸಲು ಸ್ಥಳ ಗುರುತಿಸಲಾಗಿದೆ. ಆದರೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದೆ. ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕಿದೆ ಎಂದರು.

ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಚ್.ವಿ.ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ನಗರಸಭೆ ಅಧ್ಯಕ್ಷ ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಲೆಮಹದೇಶ್ವರ ವನ್ಯಜೀವಿಧಾಮದ ಡಿಎಫ್‌ಒ ಚಕ್ರಪಾಣಿ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಬರ ನಿರ್ವಹಣೆ ಸಭೆಗೆ

ಬಹುತೇಕ ಶಾಸಕರು ಗೈರುಬರ, ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಬಗ್ಗೆ ನಗರದ ಜಿಪಂ‌ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾ‌ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಸಭೆಗೆ ಜಿಲ್ಲೆಯ ನಾಲ್ವರು ಶಾಸಕರಲ್ಲಿ ಮೂವರು ಶಾಸಕರು ಗೈರಾಗಿದ್ದರು. ಬೆಂಗಳೂರಲ್ಲಿ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸಭೆ ಸಭೆಗೆ ಎ.ಆರ್‌.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಗೊಂಡಿದ್ದರಿಂದ ಅವರು ಗೈರಾಗಿದ್ದರು. ಪ್ರಾಥಮಿಕ ಕೃಷಿ ಪತ್ತಿನ ಚುನಾವಣೆ ಹಿನ್ನೆಲೆಯಲ್ಲಿ ಹನೂರು ಶಾಸಕ ಮಂಜುನಾಥ್ ಕೂಡ ಗೈರಾಗಿದ್ದಾರು. ವಿಧಾನ ಪರಿಷತ್ತು ಸದಸ್ಯರಾದ ತಿಮ್ಮಯ್ಯ, ಮಂಜೇಗೌಡ, ವಿವೇಕಾನಂದ, ಮಧು ಜಿ ಮಾದೇಗೌಡ ಕೂಡ ಗೈರಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ