ಕನ್ನಡಪ್ರಭ ವಾರ್ತೆ ತುಮಕೂರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಹಾಗೂ ಗುಪ್ತಚರ ಇಲಾಖೆಯವರು ಕಾರ್ಯಪ್ರವೃತ್ತರಾಗಿ ಜಿಲ್ಲೆಯಲ್ಲಿಯಲ್ಲಿರುವ ಪಾಕಿಸ್ತಾನಿ, ಬಾಂಗ್ಲಾ ಅಕ್ರಮ ನಿವಾಸಿಗಳು, ಭಯೋತ್ಪಾದಕರು, ಮಾದಕ ಪದಾರ್ಥ ಮಾರಾಟ ಜಾಲದಲ್ಲಿ ಭಾಗಿಯಾದವರು, ಸಮಾಜ ದ್ರೋಹಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದರು.
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ಬಾಂಗ್ಲಾದಂತಹ ದೇಶಿಯವರು ಅಕ್ರಮವಾಗಿ ಬಂದು ಇಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದಾರೆ ಎಂಬ ಮಾತು ಕೇಳಿಬಂದಿವೆ. ಅಂತಹವರನ್ನೂ ಗುರುತಿಸಿ, ಅವರಿಗೆ ನೆರವಾದವರನ್ನೂ ಪತ್ತೆ ಮಾಡಿ ಶಿಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.ಪಹಲ್ಗಾಮ್‌ನಲ್ಲಿ ಪ್ರವಾಸಿ ಹಿಂದೂಗಳನ್ನು ಪಾಕಿಸ್ತಾನಿ ಪ್ರಾಯೋಜಿತ ಭಯೋತ್ಪಾದಕರು ಗುಂಡು ಹಾರಿಸಿ ಹತ್ಯೆ ಮಾಡಿದ್ದನ್ನು ಸಹಿಸಲಾಗುವುದಿಲ್ಲ. ಭಾರತದಲ್ಲಿ ಹಿಂದೂ, ಮುಸ್ಲಿಮರು ಭಾವೈಕ್ಯತೆಯಿಂದ ಬಾಳುತ್ತಿದ್ದಾರೆ. ಇವರ ನಡುವೆ ಶಾಂತಿ, ಭಾವೈಕ್ಯತೆಗೆ ಧಕ್ಕೆ ಮಾಡುವ ಸಲುವಾಗಿ ಭಯೋತ್ಪಾದಕರು ದಾಳಿ ಮಾಡುತ್ತಿದ್ದಾರೆ. ಭಯೋತ್ಪಾದನೆ ಮಟ್ಟ ಹಾಕಲು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ದೇಶದ ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ, ಧರ್ಮದವರೂ ಮೋದಿಯವರ ಕಾರ್ಯಕ್ಕೆ ಬೆಂಬಲ ನೀಡಬೇಕು. ದೇಶದ ಭದ್ರತೆ, ಸಾರ್ವಭೌಮತ್ವ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.
ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸೊಗಡು ಶಿವಣ್ಣ, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಲಿ, ಭಾರತದ ಮೇಲೆ ಭಯೋತ್ಪಾದಕ ಕೃತ್ಯ ನಡೆಸುತ್ತಿರುವ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಅನಿವಾರ್ಯವಾದರೆ ಯುದ್ಧ ಸಾರಲೇಬೇಕು ಎಂದರು.