ಚಿಕ್ಕಮಗಳೂರು, ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆ ಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ವೆಚ್ಚ ಮಾಡಿ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆ ಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ವೆಚ್ಚ ಮಾಡಿ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ ಸಿಪಿ, ಟಿ ಎಸ್ ಪಿ ಯೋಜನೆ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಕೆಲವು ಇಲಾಖೆ ಅಧಿಕಾರಿಗಳು ವರ್ಷವಿಡಿ ಅನುದಾನ ಖರ್ಚು ಮಾಡದಿದ್ದರೂ ಮಾರ್ಚ್‌ನಲ್ಲಿ ಶೇ. 100 ರಷ್ಟು ಸಾಧನೆ ಆಗಿದೆ ಎಂದು ವರದಿಯಲ್ಲಿ ತೋರಿಸುತ್ತಾರೆ. ಇದಕ್ಕೆ ಅವಕಾಶ ನೀಡದೆ ಕೊನೆಯಲ್ಲಿ ಖರ್ಚು ಮಾಡುವ ಇಲಾಖೆ ಅಧಿಕಾರಿಗಳ ಮೇಲೆ ತೀವ್ರ ನಿಗಾ ವಹಿಸಲಾಗುವುದು. ನೈಜ ಕಾರಣಗಳು ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಕಾಲದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಅನುದಾನ ವೆಚ್ಚ ಮಾಡಿ, ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯ ದಿರುವ ಅಧಿಕಾರಿಗಳು ಅನುಮೋದನೆ ಪಡೆದು ಅರ್ಜಿ ಆಹ್ವಾನಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಕ್ರಮವಹಿಸುವಂತೆ ತಿಳಿಸಿದರು.ಕೆಲವು ಇಲಾಖೆಗಳ ಪ್ರಗತಿ ಶೂನ್ಯವಾಗಿದ್ದು ಕ್ರಿಯಾ ಯೋಜನೆಗೆ ಅನುಮೋದನೆ ಪಡೆದು ಕಾಲಮಿತಿಯೊಳಗೆ ನಿಗಧಿತ ಗುರಿ ಸಾಧಿಸಬೇಕು ಎಂದ ಅವರು, ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನರ ಅಭ್ಯುದಯಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಸವಲತ್ತು ಕಲ್ಪಿಸಬೇಕು. ಆ ಕುರಿತು ವರದಿಯನ್ನು ನಿಗದಿತ ಅವಧಿಯೊಳಗೆ ನೀಡುವಂತೆ ತಿಳಿಸಿದರು.ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.