ಮಂಗಳೂರು: ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರೊಂದಿಗೆ ಹುಬ್ಬಳ್ಳಿ-ಧಾರವಾಡ ಪ್ರದೇಶದ ಪ್ರತಿಷ್ಠಿತ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲೊಂದು ಆಗಿರುವ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಶಿಕ್ಷಕರು ಸಂವಾದ ನಡೆಸಿದರು.ಪ್ರಸ್ತುತ ಕಾಲಘಟ್ಟದಲ್ಲಿ ಪದವಿ ಪೂರ್ವ ಶಿಕ್ಷಣದ ಪಠ್ಯಕ್ರಮದ ರೂಪುರೇಷೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ವಿಧಾನಗಳು ಹಾಗೂ ಪೂರಕ ಪಠ್ಯ ವಿಷಯಗಳ ಅಗತ್ಯತೆ ಕುರಿತಾಗಿ ಪ್ರೊ.ನರೇಂದ್ರ ಎಲ್.ನಾಯಕ್ ಅವರು ಶಿಕ್ಷಕರೊಂದಿಗೆ ಸಮಗ್ರ ಚರ್ಚೆ ನಡೆಸಿದರು. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರು ನವೀನ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಅವರು ಒತ್ತಿ ಹೇಳಿದರು.ಈ ಸಂದರ್ಭದಲ್ಲಿ ಶಿಕ್ಷಕರು ತಮ್ಮ ಅನುಭವಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪ್ರಶ್ನೋತ್ತರ ರೂಪದಲ್ಲಿ ಸಂವಾದ ಮುಂದುವರಿಯಿತು. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಜ್ಞಾನವಷ್ಟೇ ಅಲ್ಲ, ವಿಶ್ಲೇಷಣಾತ್ಮಕ ಚಿಂತನೆ ಮತ್ತು ಸಮಯ ನಿರ್ವಹಣೆಯೂ ಸಮಾನವಾಗಿ ಮುಖ್ಯವೆಂದು ಅವರು ತಿಳಿಸಿದರು.ಕಾರ್ಯಕ್ರಮದ ಅಂಗವಾಗಿ ಪ್ರೊ. ನರೇಂದ್ರ ಎಲ್. ನಾಯಕ್ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷೆ ಶ್ರೀದೇವಿ ಎ. ಚೌಗುಲೆ, ಕಾರ್ಯದರ್ಶಿ ಅನಿಲಕುಮಾರ ಚೌಗುಲೆ, ಡಾ. ರಮೇಶ್ ಎನ್. ಭಾಂಡಿವಾಡ ಹಾಗೂ ಗಂಗಾಧರ ಬಿ. ಕಮಡೊಳ್ಳಿ ಇದ್ದರು.