ಶೀಘ್ರ ಸ್ಕ್ಯಾನಿಂಗ್ ಸೆಂಟರ್‌ಗಳ ವ್ಯಾಪಕ ತಪಾಸಣೆ: ಡಾ. ಅನ್ನಪೂರ್ಣ

KannadaprabhaNewsNetwork |  
Published : Jul 02, 2024, 01:31 AM IST
ಅನ್ನಪೂರ್ಣಾ ವಸ್ತ್ರದ ಮಾತನಾಡಿದರು  | Kannada Prabha

ಸಾರಾಂಶ

ಜಿಲ್ಲೆಯಲ್ಲಿ 2011ರ ಜನಸಂಖ್ಯಾ ವರದಿಯಂತೆ ಲಿಂಗಾನುಪಾತದ ಪ್ರಮಾಣ 955 ಇದ್ದು, ಪ್ರಸ್ತುತ ಜಿಲ್ಲೆಯಲ್ಲಿ 71 ಸ್ಕ್ಯಾನಿಂಗ್‌ ಸೆಂಟರ್‌ಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಯಾವುದೇ ಕೇಂದ್ರಗಳಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಡೆಯದಂತೆ ಈಗಾಗಲೇ ತೀವ್ರ ನಿಗಾ ವಹಿಸಲಾಗಿದ್ದು, ಮುಂದಿನ ತ್ರೈಮಾಸಿಕ ಅವಧಿಯಲ್ಲಿ ಈ ಎಲ್ಲ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು.

ಕಾರವಾರ: ಜಿಲ್ಲೆಯಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆಯುವ ನಿಟ್ಟಿನಲ್ಲಿ ಜುಲೈಯಿಂದ ಸೆಪ್ಟೆಂಬರ್‌ವರೆಗೆ, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳ ವ್ಯಾಪಕ ತಪಾಸಣೆ ನಡೆಸಲಾಗುವುದು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅನ್ನಪೂರ್ಣ ವಸ್ತ್ರದ ತಿಳಿಸಿದರು.

ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಡೆ ಕುರಿತು ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 2011ರ ಜನಸಂಖ್ಯಾ ವರದಿಯಂತೆ ಲಿಂಗಾನುಪಾತದ ಪ್ರಮಾಣ 955 ಇದ್ದು, ಪ್ರಸ್ತುತ ಜಿಲ್ಲೆಯಲ್ಲಿ 71 ಸ್ಕ್ಯಾನಿಂಗ್‌ ಸೆಂಟರ್‌ಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಯಾವುದೇ ಕೇಂದ್ರಗಳಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಡೆಯದಂತೆ ಈಗಾಗಲೇ ತೀವ್ರ ನಿಗಾ ವಹಿಸಲಾಗಿದ್ದು, ಮುಂದಿನ ತ್ರೈಮಾಸಿಕ ಅವಧಿಯಲ್ಲಿ ಈ ಎಲ್ಲ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದರು.

ಎಲ್ಲ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಸರ್ಕಾರದ ಮಾರ್ಗಸೂಚಿಯಂತೆ, ಅಗತ್ಯ ಅನುಮತಿಯನ್ನು ಪಡೆದಿರುವ ಬಗ್ಗೆ, ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆಗೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಮತ್ತು ಸ್ಕ್ಯಾನಿಂಗ್ ಸೆಂಟರ್‌ಗೆ ಭೇಟಿ ನೀಡುವ ಎಲ್ಲ ರೋಗಿಗಳ ಸಮಗ್ರ ಮಾಹಿತಿಯನ್ನು ನಿಗದಿತ ರೀತಿಯಲ್ಲಿ ದಾಖಲಿಸಿ ಸಂರಕ್ಷಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಅವಧಿಯಲ್ಲಿ ಯಾವುದೇ ಮಾರ್ಗಸೂಚಿಗಳ ಉಲ್ಲಂಘನೆ ಕಂಡು ಬಂದಲ್ಲಿ ಅಂತಹ ಸ್ಕ್ಯಾನಿಂಗ್ ಸೆಂಟರ್ ಮತ್ತು ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಜಿಲ್ಲೆಯಲ್ಲಿನ ಎಲ್ಲ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಶೇ. 100ರಷ್ಟು ತಪಾಸಣೆ ನಡೆಸಲಾಗಿದ್ದು, ಈ ಅವಧಿಯಲ್ಲಿ ಯಾವುದೇ ಹೊಸ ನೋಂದಣಿ ಮತ್ತು ನವೀಕರಣ ಮಾಡಿರುವುದಿಲ್ಲ ಎಂದರು.

ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ. ಶಿವಕುಮಾರ್, ವಕೀಲರಾದ ಮಾರುತಿ ಎಂ. ಮರಜ್ಜ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಎಂ. ನಾಯ್ಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಯೂಸುಫ್ ಖಾನ್, ಅಧೀಕ್ಷಕ ಸುಭಾಷ್ ಗಾಂವಕರ್ ಉಪಸ್ಥಿತರಿದ್ದರು. ರಿತೇಶ್ ಸಿ. ನಾಯ್ಕ್ ಸ್ವಾಗತಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರೇಜ್‌ ಮೆಕಾನಿಕ್‌ ಕೊಲೆ ಕೇಸ್‌: 7 ಆರೋಪಿಗಳ ಸೆರೆ
ಪೋಟೋ ಫ್ರೇಮ್‌ನಲ್ಲಿ ಅಡಗಿಸಿಟ್ಟುಸಾಗಿಸುತ್ತಿದ್ದ 37 ಲಕ್ಷದ ಗಾಂಜಾ ಜಪ್ತಿ